ಮಂಗಳವಾರ, ಮೇ 24, 2022
25 °C

ಮೈಸೂರು ವಿವಿ ಲೈಂಗಿಕ ದೌರ್ಜನ್ಯ:ತನಿಖೆ ಮುಂದುವರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಮುಂದುವರಿಸಿ ಎರಡು ತಿಂಗಳ ಒಳಗೆ ವರದಿ ನೀಡುವಂತೆ ಹೈಕೋರ್ಟ್, ಪೊಲೀಸರಿಗೆ ಸೋಮವಾರ ನಿರ್ದೇಶಿಸಿದೆ.ವಿವಿಯ ಪ್ರಾಣಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಶಿವಬಸವಯ್ಯ ಅವರ ವಿರುದ್ಧ ಸಂಶೋಧನಾ ವಿದ್ಯಾರ್ಥಿನಿ ಎಂ.ಸರಿತಾ ಮೈಸೂರಿನ ವಿಜಯನಗರದ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿರುವ ದೂರಿನ ಪ್ರಕರಣ ಇದಾಗಿದೆ. ಶಿವಬಸವಯ್ಯನವರ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿವಿಯ ಕುಲಪತಿ ಟಿ.ಜಿ.ತಳವಾರ್ ವಿಫಲರಾಗಿದ್ದಾರೆ ಎನ್ನುವುದು ಸರಿತಾ ದೂರು. ಈ ಹಿನ್ನೆಲೆಯಲ್ಲಿ ತಳವಾರ್ ವಿರುದ್ಧವೂ ಅವರು ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಈ ದೂರು ಹಾಗೂ ಅದರ ಅನ್ವಯ ದಾಖಲಾದ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ರದ್ದತಿಗೆ ಕೋರಿ ತಳವಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ನಡೆಸಿದರು.

ತನಿಖೆಗೆ ಇದ್ದ ತಡೆಯಾಜ್ಞೆ ತೆರವು ಮಾಡಿರುವ ನ್ಯಾಯಮೂರ್ತಿಗಳು,ತನಿಖೆ ಮುಂದುವರಿಸಲು ಪೊಲೀಸರಿಗೆ ಅನುಮತಿ ನೀಡಿದ್ದಾರೆ. ತಳವಾರ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ್ದಾರೆ.ಸರಿತಾ ಅವರು ಶಿವಬಸವಯ್ಯ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸುತ್ತಿದ್ದರು. 2011ರ ಏಪ್ರಿಲ್ ತಿಂಗಳಿನಲ್ಲಿ ಸರಿತಾ ಅವರ ಪತಿ ಮನೆಯಲ್ಲಿ ಇಲ್ಲದಿದ್ದಾಗ ಅವರ ಮನೆಗೆ ಹೋದ ಶಿವಬಸವಯ್ಯ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನುವುದು ಆರೋಪ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ತಳವಾರ್ ಅವರಿಗೆ ಸರಿತಾ ಮನವಿ ಸಲ್ಲಿಸಿದ್ದರು. ಆದರೆ ಹಲವು ತಿಂಗಳು ಕಳೆದರೂ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ.ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧವೂ ಸರಿತಾ ಪೊಲೀಸರಲ್ಲಿ ದೂರು ದಾಖಲು ಮಾಡಿದ್ದರು. ಇದನ್ನು ತಳವಾರ್‌ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ಆರೋಪವು ಗಂಭೀರ ಸ್ವರೂಪದ್ದಾಗಿದ್ದು, ಅರ್ಜಿ ವಜಾ ಮಾಡಬೇಕು ಎಂದು ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಎಸ್. ಚಂದ್ರಮೌಳಿ ಅವರ ವಾದವನ್ನು ನ್ಯಾಯಮೂರ್ತಿಗಳು ಮಾನ್ಯ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.