ಮಂಗಳವಾರ, ಜೂನ್ 22, 2021
29 °C

ಯಾವುದೇ ಕ್ಷಣದಲ್ಲಿ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ರಾಜ್ಯ ವಿಧಾನಸಭೆ ಮತ್ತು ಲೋಕಸಭೆಗೆ ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾಗಬಹುದು~ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಶನಿವಾರ ಇಲ್ಲಿ ಇಂಗಿತ ವ್ಯಕ್ತಪಡಿಸಿದರು.ಪಕ್ಷದ ಮಹಿಳಾ ಮೋರ್ಚಾ ಇದೇ 31ರಂದು ಆಯೋಜಿಸಲಿರುವ `ನಾರಿ ಶಕ್ತಿ ಸಂಗಮ~ ಸಮಾವೇಶಕ್ಕೆ ಪೂರ್ವಭಾವಿಯಾಗಿ ನಗರದ ಅರಮನೆ ಮೈದಾನದಲ್ಲಿ ನಡೆದ ಭೂಮಿ ಪೂಜೆ ಕಾರ್ಯಕ್ರಮ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಸರಣಿ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. `ಡಿ.ವಿ. ಸದಾನಂದಗೌಡರೇ ಈ ಸಲದ ಬಜೆಟ್ ಮಂಡಿಸಲಿದ್ದಾರೆ. ಇದರಲ್ಲಿ ಯಾವ ಗೊಂದಲವೂ ಇಲ್ಲ. ಉಳಿದ ಅವಧಿಗೂ ಅವರೇ ಮುಖ್ಯಮಂತ್ರಿ~ ಎಂದೂ ಈಶ್ವರಪ್ಪ ತಿಳಿಸಿದರು.ಅವಧಿಪೂರ್ವ ಚುನಾವಣೆ ಸಾಧ್ಯತೆಯ ಈ ಹೇಳಿಕೆ ಪಕ್ಷದ ಅಧ್ಯಕ್ಷರಿಂದಲೇ ಬಂದಿರುವುದು ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದೆ. ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಬೆಂಬಲಿಗರು ನಾಯಕತ್ವದ ವಿಚಾರದಲ್ಲಿ ನೀಡುತ್ತಿರುವ ಗೊಂದಲದ ಹೇಳಿಕೆಗಳಿಗೆ ಕಡಿವಾಣ ಹಾಕಲು ಈಶ್ವರಪ್ಪ ಈ `ಬಾಂಬ್~ ಸಿಡಿಸಿದ್ದಾರೆ ಎಂದು ಪಕ್ಷದ ವಲಯದಲ್ಲಿ ಅರ್ಥೈಸಲಾಗಿದೆ.ಭಾನುವಾರ ಸಭೆ: ಈ ನಡುವೆ ಯಡಿಯೂರಪ್ಪ ಬೆಂಬಲಿಗರು ಒತ್ತಡ ತಂತ್ರ ಮುಂದುವರಿಸಿದ್ದಾರೆ. ತಮ್ಮ ಬೇಡಿಕೆಗೆ ಹೈಕಮಾಂಡ್ ಬಗ್ಗದಿದ್ದರೆ ಸಾಮೂಹಿಕ ರಾಜೀನಾಮೆ `ಅಸ್ತ್ರ~ ಬಳಸಲು ಚಿಂತನೆ ನಡೆಸಿದ್ದಾರೆ.ಭಾನುವಾರ ಯಡಿಯೂರಪ್ಪ ಅವರ ನಿವಾಸದಲ್ಲಿ ಜರುಗಲಿರುವ ಆಪ್ತ ಸಚಿವರು, ಶಾಸಕರ ಸಭೆಯಲ್ಲಿ ಈ ಕುರಿತು ಚರ್ಚೆ ಆಗುವ ಸಂಭವ ಇದೆ.ಈ ಸಭೆಗೆ ಬರುವಂತೆ ಅವರ ಆಪ್ತ ಸಿದ್ದಲಿಂಗಸ್ವಾಮಿ ಅವರು ಶಾಸಕರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನ 2.30ಕ್ಕೆ ರೇಸ್‌ಕೋರ್ಸ್ ರಸ್ತೆಯ ನಿವಾಸಕ್ಕೆ ಬರುವಂತೆ ತಿಳಿಸಿದ್ದಾರೆ.ಮಂಗಳವಾರದಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಆ ವೇಳೆಯೊಳಗೆ ರಾಜ್ಯ ರಾಜಕೀಯದಲ್ಲಿ ಕೆಲ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ಅಧಿವೇಶನ ಆರಂಭಕ್ಕೂ ಮುನ್ನವೇ ತಮ್ಮನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆ. ಹೈಕಮಾಂಡ್ ಇದಕ್ಕೆ ಒಪ್ಪದಿದ್ದರೆ ಅವರು ಬಲ ಪ್ರದರ್ಶನಕ್ಕೂ ಮುಂದಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮುಗಿದ ಕೂಡಲೇ ಮುಂದಿನ ನಡೆ ಕುರಿತು ದೃಢ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ತಾವು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದು ಕೆಲವು ಬೆಂಬಲಿಗರಿಗೆ ಸೂಚಿಸಿದ್ದಾರೆ.ಕೆಲವರಿಂದ `ವಚನ~ ಕೂಡ ಪಡೆದಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿ ಸಮಾವೇಶಕ್ಕೆ ತೆರಳುವಾಗ ರೈಲಿನಲ್ಲಿ ಈ ಎಲ್ಲ ಬೆಳವಣಿಗೆಗಳು ನಡೆದಿವೆ. ಭರವಸೆ ಕೊಟ್ಟವರಲ್ಲಿ ಶಾಸಕರಾದ ನಂದೀಶ್ ರೆಡ್ಡಿ, ಎಸ್.ಆರ್.ವಿಶ್ವನಾಥ್, ಅರವಿಂದ ಲಿಂಬಾವಳಿ ಮತ್ತಿತರರು ಸೇರಿದ್ದಾರೆ ಎಂದು ಗೊತ್ತಾಗಿದೆ. ಶನಿವಾರ ರಾತ್ರಿ ಸಚಿವ ಜಗದೀಶ ಶೆಟ್ಟರ್ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.ಸಿ.ಎಂ ದೆಹಲಿಗೆ: ಯಡಿಯೂರಪ್ಪ ಅವರು ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬೇಸತ್ತಿರುವ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಈ ಬಗ್ಗೆ ಪಕ್ಷದ ವರಿಷ್ಠರಿಗೆ ದೂರು ನೀಡಲು ಈಶ್ವರಪ್ಪ ಅವರ ಜೊತೆಗೂಡಿ ಸೋಮವಾರ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಬಜೆಟ್ ಅಧಿವೇಶನಕ್ಕೂ ಮೊದಲೇ ಗೊಂದಲ ನಿವಾರಿಸಬೇಕು. ಸಾಧ್ಯವಾದರೆ ಈ ಕುರಿತು ವರಿಷ್ಠರಿಂದಲೇ ಹೇಳಿಕೆ ಬರುವಂತೆ ಮಾಡಿ, ಬಜೆಟ್ ಅಧಿವೇಶನಕ್ಕೆ ಹಾದಿ ಸುಗಮ ಮಾಡಿಕೊಳ್ಳಬೇಕು ಎಂದು ಬಯಸಿದ್ದಾರೆ.`ಬಿಜೆಪಿಯ ಮುಖ್ಯಮಂತ್ರಿ ಈ ಬಾರಿ ಬಜೆಟ್ ಮಂಡಿಸಲಿದ್ದಾರೆ~ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ವಿ. ಧನಂಜಯ ಕುಮಾರ್ ಇತ್ತೀಚೆಗೆ ನೀಡಿರುವ ಹೇಳಿಕೆ ಕುರಿತು ಈಶ್ವರಪ್ಪ ಕೆಂಡಾಮಂಡಲವಾಗಿದ್ದಾರೆ. `ಧನಂಜಯ ಕುಮಾರ್ ಅಂಥ ಹೇಳಿಕೆ ಏಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ, ಅವರು ಪಕ್ಷದ ವಕ್ತಾರರೂ ಅಲ್ಲ. ಅವರು ನೀಡಿರುವ ಹೇಳಿಕೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರಲಾಗುವುದು~ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.