ಶನಿವಾರ, ಫೆಬ್ರವರಿ 27, 2021
25 °C
ನಿವೃತ್ತ ನ್ಯಾಯಮೂರ್ತಿ ವೆಂಕಟಾಚಲಯ್ಯ

ಯುವಕರು ರಾಜಕೀಯಕ್ಕೆ ಬರಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯುವಕರು ರಾಜಕೀಯಕ್ಕೆ ಬರಬೇಕು

ಬೆಂಗಳೂರು: ‘ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಯುವಕರು ಸಕ್ರಿಯವಾಗಿ ಭಾಗವಹಿಸಬೇಕು’ ಎಂದು  ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹೇಳಿದರು.ಧಾರವಾಡದ ‘ಯೋಗಕ್ಷೇಮ’ ಸಂಸ್ಥೆ ವತಿಯಿಂದ ನಗರದ ಎಂ.ಜಿ.ರಸ್ತೆಯ ಗಾಂಧಿ ಪ್ರತಿಮೆ ಬಳಿ ಶನಿವಾರ ಏರ್ಪಡಿಸಿದ್ದ ‘ಯುವ ಜಾಗೃತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‘ದೇಶದ ಒಟ್ಟು ಜನಸಂಖ್ಯೆಯಲ್ಲಿ 25 ವರ್ಷಕ್ಕಿಂತ ಕೆಳಗಿನವರು ಶೇಕಡಾ 53ರಷ್ಟಿದ್ದಾರೆ. ಗಾಂಧೀಜಿ ಕನಸಿನ ಗ್ರಾಮ ಭಾರತ ನಿರ್ಮಾಣವಾಗಬೇಕಾದರೆ ಯುವಕರಿಂದ ಮಾತ್ರ ಸಾಧ್ಯ’ ಎಂದರು.ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಮಾತನಾಡಿ, ‘ಗ್ರಾಮೀಣ ಅಭಿವೃದ್ಧಿಯ ಕನಸು ಇಟ್ಟುಕೊಂಡಿರುವ ಯುವಕರು ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಬೇಕು. ಎಲ್ಲಾ ರಾಜಕೀಯ ಪಕ್ಷಗಳು ಸಹ ಯುವಕರಿಗೆ ಹೆಚ್ಚು ಟಿಕೆಟ್ ನೀಡಬೇಕು’ ಎಂದು ಮನವಿ ಮಾಡಿದರು.‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಗ್ರಾಮಗಳ ಅಭಿವೃದ್ಧಿಗೆ ಬಿಡುಗಡೆಯಾಗುವ ಹಣ ಸರಿಯಾಗಿ ಸದುಪಯೋಗವಾಗುತ್ತಿಲ್ಲ. ಯುವಕರು ಗ್ರಾಮಗಳನ್ನು ತೊರೆಯುತ್ತಿದ್ದಾರೆ. ಗ್ರಾಮದ ಬದುಕು ದುಸ್ತರವಾಗುತ್ತಿದೆ’ ಎಂದು ವಿಷಾದಿಸಿದರು.‘ಗ್ರಾಮದ ಅಭಿವೃದ್ಧಿಗೆ ಬದ್ಧತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ದಾರಿ ಸಾರ್ವಜನಿಕರ ಮೇಲಿದೆ’ ಎಂದರು. ‘ಯುವಕರಲ್ಲಿ ಜಾಗೃತಿ ಮೂಡಿಸಲು ಜ.12 ರಿಂದ ಚಿತ್ರದುರ್ಗದಿಂದ ಅಭಿಯಾನ ಆರಂಭಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.