ಮಂಗಳವಾರ, ಜೂನ್ 15, 2021
27 °C

ಯೋಜನೆಗಳಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪ ನಿಲ್ಲಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೇ ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ತಲುಪುವಂತಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.ವಾರ್ತಾ  ಮತ್ತು ಪ್ರಚಾರ ಇಲಾಖೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ತಾಲ್ಲೂಕಿನ 100 ಗ್ರಾಮಗಳಲ್ಲಿ ಹಮ್ಮಿಕೊಂಡಿರುವ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಪ್ರತಿಬಿಂಬಿಸುವ ಬಹುಮಾಧ್ಯಮ ಪ್ರಚಾರಾಂದೋಲನ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.ಮಾಹಿತಿಯ ಕೊರತೆಯಿಂದಾಗಿ ಸರ್ಕಾರದ ಹಲವಾರು ಜನಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಹಲವು ಬಾರಿ ಯೋಜನೆಗಳ  ಪ್ರಯೋಜನ ಪಡೆದವರೆ ಮತ್ತೆ ಮತ್ತೆ ಪಡೆಯುತ್ತಿದ್ದಾರೆ. ಇದಕ್ಕೆ ಮಧ್ಯವರ್ತಿಗಳ ಹಸ್ತಕ್ಷೇಪವೂ ಕಾರಣವಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಈ ಸನ್ನಿವೇಶವನ್ನು ಬದಲಿಸಬೇಕಿದೆ ಎಂದರು.ಸರ್ಕಾರದ ಯೋಜನೆಗಳು ಯಾರಿಗೆ ತಲುಪಬೇಕೊ ಅವರಿಗೆ ತಲುಪಿಸುವ ಜವಾಬ್ದಾರಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಮೇಲೂ ಇದೆ. ಹೇಗಾದರೂ ಮಾಡಿ ಅಂಕಿ ಅಂಶ ತುಂಬಿಸಿದರೆ ಸಾಕು ಎಂಬ ಮನೋಭಾವವನ್ನು ಇಲಾಖೆಗಳು ಕೈಬಿಡಬೇಕು ಎಂದು ಕಿವಿಮಾತು ಹೇಳಿದರು.ಯೋಜನೆಗಳ ಕುರಿತ ಮಾಹಿತಿಯನ್ನು ಗ್ರಾಮೀಣ ಭಾಗದ ಜನರಿಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಆಸಕ್ತಿ ವಹಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದರು.ಸರ್ಕಾರದ ಯೋಜನೆಗಳ ಜಾರಿ ಸಂದರ್ಭದಲ್ಲಿ ನಡೆಯುವ ಭ್ರಷ್ಟಾಚಾರವನ್ನು ಜನರ ವಿರೋಧವಿಲ್ಲದೆ ತಡೆಯಲು ಸಾಧ್ಯವಿಲ್ಲ. ಯೋಜನೆ ಅನುಷ್ಠಾನಕ್ಕೆ ಅಡ್ಡಿ ಪಡಿಸುವುದರ ವಿರುದ್ಧವೂ ಜನರು ಧ್ವನಿ ಎತ್ತಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಸ್ವರ್ಣ ಜಯಂತಿ ಶಹರಿ ರೋಜಗಾರ್ ಯೋಜನೆ ವತಿಯಿಂದ ಸ್ತ್ರೀಶಕ್ತಿ ಸಂಘಗಳಿಗೆ ಆವರ್ತನಿಧಿ ಚೆಕ್, ಭಾಗ್ಯಲಕ್ಷಿ ಯೋಜನೆ ಬಾಂಡ್, ಪೌರಕಾರ್ಮಿಕರಿಗೆ ಸಮವಸ್ತ್ರ ಹಾಗೂ ನ್ಯಾಷನಲ್ ಇನ್ಸುರೆನ್ಸ್ ಕಂಪೆನಿ ವತಿಯಿಂದ ನೀಡಲಾದ ಆರೋಗ್ಯ ವಿಮೆ ಕಾರ್ಡ್‌ಗಳನ್ನು ವಿತರಿಸಲಾಯಿತು.ನಗರಸಭೆ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಬೇಂಗ್ರೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಡಿ.ರವಿ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್ ಸುಬ್ರು, ಸದಸ್ಯರುಗಳಾ ಸತೀಶ್‌ಬಾಬು, ಹಸೀನಾಫರ್ವೇಜ್, ಪೌರಾಯುಕ್ತ ಎಸ್. ಬಸವರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಲಕ್ಷ್ಮಿಕಾಂತಮ್ಮ, ನ್ಯಾಷನಲ್ ಇನ್ಸುರೆನ್ಸ್ ಕಂಪೆನಿ ವಿಭಾಗೀಯ ವ್ಯವಸ್ಥಾಪಕ ಎಸ್. ಸೇತುಮಾಧವನ್, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಡಾ.ಶಶಿಕುಮಾರ್ ಹಾಜರಿದ್ದರು.ನಯನಾ ಪ್ರಾರ್ಥಿಸಿದರು. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ದೇವರಾಜಯ್ಯ ಸ್ವಾಗತಿಸಿದರು. ಇಲಾಖೆಯ ಉಪ ನಿರ್ದೇಶಕ ಡಿ.ಪಿ. ಮುರಳೀಧರ್ ಪ್ರಾಸ್ತಾವಿಕ ಮಾತನಾಡಿದರು. ನಗರಸಭಾ ಸದಸ್ಯ ಸಂತೋಷ್‌ಶೇಟ್ ಕಾರ್ಯಕ್ರಮ  ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.