ಮಂಗಳವಾರ, ಮೇ 11, 2021
21 °C

ರಕ್ತದಾನದ ಮಹತ್ವ: ಜನಜಾಗೃತಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ರಕ್ತದಾನದ ಮಹತ್ವದ ಕುರಿತು ಜನಜಾಗೃತಿ ಮೂಡಿಸಲು ಬುಧವಾರ ನಗರದಲ್ಲಿ ಬೃಹತ್ ಜಾಥಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.



ಜಿಲ್ಲಾಧಿಕಾರಿ ಎನ್.ಜಯರಾಂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೀಪಾ ಚೋಳನ ಅವರು ಜಾಥಾಕ್ಕೆ ಚಾಲನೆ ನೀಡಿದರು. ಇದೇ 14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ರಕ್ತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.



ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲಿದೆ. ದೇಹದಲ್ಲಿ ಹೊಸ ರಕ್ತ ಚಾಲನೆಯಿಂದ ಕಾರ್ಯತತ್ಪರತೆ, ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ. ರಕ್ತದಲ್ಲಿ ಕೊಬ್ಬಿನಾಂಶ ಕಡಿಮೆ ಮಾಡಲು ಸಹಾಯವಾಗುತ್ತದೆ.

ಹೃದಯಘಾತವನ್ನು ಶೇ. 80 ಕ್ಕಿಂತಲೂ ಹೆಚ್ಚು ತಡೆಯಲು ಸಹಾಯವಾಗುತ್ತದೆ ಹಾಗೂ ರಕ್ತದ ಒತ್ತಡ ಇತರೆ ಕೆಲವು ರೋಗಗಳನ್ನು ತಡೆಗಟ್ಟಲು ಸಹಾಯವಾಗುತ್ತದೆ ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ನಂತರ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ಸುಮಾರು 150ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಈವರೆಗೆ 22 ಬಾರಿ ರಕ್ತದಾನ ಮಾಡಿದ ಮಹಾಂತೇಶ ಹಿರೇಮಠ ಹಾಗೂ 18 ಬಾರಿ ರಕ್ತದಾನ ಮಾಡಿದ ಅನಿಲ ಭೋಸಲೆ ಅವರನ್ನು ಜಿಲ್ಲಾಧಿಕಾರಿಗಳು ಸನ್ಮಾನಿಸಿದರು.



ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ದಿಲೀಪಕುಮಾರ ಮನೋಳಿ,   ಡಾ. ವಿ.ಬಿ.ಕುಲಕರ್ಣಿ, ವಾರ್ತಾ ಇಲಾಖೆ ಉಪನಿರ್ದೇಶಕ ಬಸವರಾಜ ಕಂಬಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ- ಕಾಲೇಜು ವಿದ್ಯಾರ್ಥಿ/ ವಿದ್ಯಾರ್ಥಿನಿಯರು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.



ಕರ್ನಾಟಕ ರಾಜ್ಯ ಏಡ್ಸ್ ಪ್ರಿವೇನ್‌ಷನ್ ಸೊಸೈಟಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕದ ಆಶ್ರಯದಲ್ಲಿ ಈ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 13 ರಂದು ಗೋಕಾಕದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ರಕ್ತದಾನ ಶಿಬಿರವನ್ನು ನಡೆಯಲಿದೆ ಎಂದು ಡಾ. ಮನೋಳಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.