ರಸ್ತೆಗಳಲ್ಲಿಯ ಗುಂಡಿ ಭರ್ತಿಗೆ ಗಡುವು

7

ರಸ್ತೆಗಳಲ್ಲಿಯ ಗುಂಡಿ ಭರ್ತಿಗೆ ಗಡುವು

Published:
Updated:

ವಿಜಾಪುರ: ಜಿಲ್ಲೆಯಲ್ಲಿರುವ ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆಗಳ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ತಿಂಗಳೊಳಗಾಗಿ ಭರ್ತಿ ಮಾಡಬೇಕು. ಇಲ್ಲದಿದ್ದರೆ ಕರ್ತವ್ಯಲೋಪ ಆರೋಪದ ಮೇಲೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರ ಜಿಲ್ಲಾಧಿಕಾರಿ ಜಿ.ಎಸ್. ಜಿದ್ದಿಮನಿ ಎಚ್ಚರಿಸಿದರು.ಬುಧವಾರ ಇಲ್ಲಿ ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ರಸ್ತೆಗಳಲ್ಲಿರುವ ತೆಗ್ಗುಗಳನ್ನು ಒಂದು ತಿಂಗಳ ಒಳಗಾಗಿ ಮುಚ್ಚಬೇಕು. ಇಲ್ಲದಿದ್ದರೆ ಅದಕ್ಕೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿಶೇಷ ಘಟಕದ ಕಾರ್ಯಕ್ರಮಗಳು ಹಾಗೂ ಡಾ. ನಂಜುಂಡಪ್ಪ ವರದಿ ಅನ್ವಯ ಬಿಡುಗಡೆಯಾಗಿರುವ ಅನುದಾನದಡಿ ಕೈಗೊಳ್ಳಬೇಕಾದ ಕಾಮಗಾರಿಗಳನ್ನು ತ್ವರಿತವಾಗಿ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಅನುದಾನ ವಾಪಸ್ಸು ಕಳಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎನ್. ಪಾಟೀಲ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry