ಶನಿವಾರ, ಜನವರಿ 25, 2020
27 °C

ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ರಾಜ್ಯದಲ್ಲಿ ಅಧಿಕಾರ ನಡೆಸಿರುವ ಬಿಜೆಪಿ ಭ್ರಷ್ಟಚಾರದಲ್ಲಿ ಮುಳುಗಿದ್ದು, ರಾಜ್ಯದ ಜನರು ನಿರಾಶರಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಎಐಸಿಸಿ ಕಾರ್ಯದರ್ಶಿ ವಿ. ಹನುಮಂತರಾವ ವಿಶ್ವಾಸ ವ್ಯಕ್ತಪಡಿಸಿದರು.ಗುರುವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಳೆದ 3 ವರ್ಷಗಳಲ್ಲಿ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಸಚಿವರು ರಾಜ್ಯದ ಸಂಪತ್ತನ್ನು ಲೂಟಿ ಮಾಡುವುದರಲ್ಲಿಯೇ ಕಾಲಹರಣ ಮಾಡಿದ್ದಾರೆ. ಅಧಿಕಾರಕ್ಕಾಗಿ ಬಿಜೆಪಿಯಲ್ಲಿ ಕಿತ್ತಾಟ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಪತನವಾಗಲಿದೆ. ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗಬೇಕು.ಸಂಘಟಿತರಾಗಿ ಕೆಲಸ ಮಾಡುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಲಹೆ ಮಾಡಿದರು.ಬರುವ ಚುನಾವಣೆಗೆ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಚುನಾವಣೆಗಿಂತ ಪೂರ್ವದಲ್ಲಿಯೇ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.ಕಾಂಗ್ರೆಸ್ ಪಕ್ಷದಿಂದ ಮಾತ್ರ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಸಾಧ್ಯ. ರಾಹುಲ್ ಗಾಂಧಿಯವರ ಆಸೆಯಂತೆ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದ ಅವರು, ರಾಜ್ಯದಲ್ಲಿ ಸರ್ಕಾರ ನಿಯಂತ್ರಣ ಕಳೆದುಕೊಂಡಿದೆ. ಲೋಕಾಯುಕ್ತರನ್ನು ನೇಮಕ ಮಾಡಿಲ್ಲ. ಹೀಗಾಗಿ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಲಿದೆ ಎಂಬುದು ಖಾತರಿಯಾಗಿದ್ದು, ಪಕ್ಷದ ಸಂಘಟನೆಗಾಗಿ ತಾವು ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು.ಜ್ಲ್ಲಿಲೆಯಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ನಾಲ್ಕು ಕ್ಷೇತ್ರಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿದ್ದಾರೆ. ಉಳಿದ ಒಂದು ಕ್ಷೇತ್ರದಲ್ಲಿಯೂ ಜಯಗಳಿಸಲು ಪ್ರಯತ್ನಿಸಲಾಗುವುದು ಎಂದರು.ಕಾಂಗೆಸ್ ಶಾಸಕರು ಎನ್‌ಸಿಪಿ ಸೇರಲಿದ್ದಾರೆ ಎಂಬುದು ಕೇವಲ ಊಹಾಪೋಹ. ಎಲ್ಲ ಶಾಸಕರು ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿದಾರೆ. ಯಾವ ಶಾಸಕರೂ ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಕೆಪಿಸಿಸಿ ಕಾರ್ಯದರ್ಶಿ ಸಫೀಉಲ್ಲಾ ಮಾತನಾಡಿ, ರಾಜ್ಯದಲ್ಲಿ ಬರಗಾಲ ಎದುರಾಗಿದ್ದು, ಜನಸಾಮಾನ್ಯರು ತೊಂದರೆಯಲ್ಲಿದ್ದಾರೆ. ಅದನ್ನು ನೋಡುವ ಸಮಯ ಕೂಡ ಸರ್ಕಾರಕ್ಕಿಲ್ಲ. ಕೇಂದ್ರ ಸರ್ಕಾರವು ರೈತರ ರೂ. 73 ಕೋಟಿ ಸಾಲ ಮನ್ನಾ ಮಾಡಿದೆ. ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ. ಎ.ಬಿ. ಮಾಲಕರಡ್ಡಿ ಮಾತನಾಡಿ, ರಾಜ್ಯ ಸರ್ಕಾರದ ಕೆಟ್ಟ ವ್ಯವಸ್ಥೆಯಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ. ಭ್ರಷ್ಟಚಾರವೇ ಸರ್ಕಾರದ ಮೂಲ ಮಂತ್ರವಾಗಿದೆ ಎಂದು ತರಾಟೆಗೆ ತೆಗೆದುಕೊಂಡರು.ರಾಜ್ಯದಲ್ಲಿ ಬರಗಾಲವಿದೆ. ಮುಖ್ಯಮಂತ್ರಿಗಳು ಮಾತ್ರ ಹಣ ಬಿಡುಗಡೆ ಮಾಡಿರುವುದಾಗಿ ಹೇಳುತ್ತಿದ್ದಾರೆ. ಆದರೆ ಎಲ್ಲಿಯೂ ಅಗತ್ಯ ಕಾಮಗಾರಿಗಳು ನಡೆದಿಲ್ಲ ಎಂದು ಆರೋಪಿಸಿದರು.ಶಾಸಕ ಬಾಬುರಾವ ಚಿಂಚನಸೂರ, ಮಾಜಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ, ಮಾರುತಿ ಮಾಲೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಸವರಾಜೇಶ್ವರಿ ಪಾಟೀಲ, ಉಪಾಧ್ಯಕ್ಷ ನಾಗನಗೌಡ ಸುಬೇದಾರ, ಕೆಪಿಸಿಸಿ ಸದಸ್ಯರಾದ ಬುಚ್ಚಣ್ಣ ಜೈಗ್ರಾಮ್, ಮೌಲಾಲಿ ಅನಪೂರ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮೆಗೌಡ ಮರಕಲ್, ಸಿದ್ಲಿಂಗರೆಡ್ಡಿ ಉಳ್ಳೆಸುಗೂರು, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ಗೂಳಿ, ಬಸವರಾಜ ಜೈನ್, ಲಾಯಕ್ ಹುಸೆನ್ ಬಾದಲ್, ಮರೆಪ್ಪ ಬಿಳ್ಹಾರ, ಮಹೇಶ ಅನಪೂರ, ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಶಿವಾನಂದ ಭೀಮಳ್ಳಿ, ಸುರೇಶ ಜೈನ್ ಮುಂತಾದವರು ಪಾಲ್ಗೊಂಡಿದ್ದರು.ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಹುಲಕಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಗರ ಬ್ಲಾಕ್ ಕಾಂಗ್ರೆಸ್ ಶರಣಪ್ಪಗೌಡ ಮಲ್ಹಾರ ಅವರು ಸ್ವಾಗತಿಸಿದರು. ಮಧುಸೂಧನಗೌಡ ಮಾನಸಗಲ್ ನಿರೂಪಿಸಿ, ವಂದಿಸಿದರು.

ಪ್ರತಿಕ್ರಿಯಿಸಿ (+)