ಸೋಮವಾರ, ಏಪ್ರಿಲ್ 12, 2021
23 °C

ರಾಜ್ಯದ 4 ಸಾವಿರ ಕೆರೆಗಳ ಅಭಿವೃದ್ಧಿ: ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |ವಿಜಾಪುರ: ಪ್ರಸಕ್ತ ವರ್ಷ ಒಂದು ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ 4 ಸಾವಿರ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಸಣ್ಣ ನೀರಾವರಿ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಗೋವಿಂದ ಕಾರಜೋಳ ಹೇಳಿದರು.ಸೋಮವಾರ ಇಲ್ಲಿ ಜಲಸಂವರ್ಧನ ಯೋಜನಾ ಸಂಘದಿಂದ ಸಮುದಾಯ ಆಧರಿತ ಕೆರೆ ನಿರ್ವಹಣೆ ಯೋಜನೆಯಡಿಯಲ್ಲಿ ಆದಾಯೋತ್ಪನ್ನ ಚಟುವಟಿಕೆಗಳ ಫಲಾನುಭವಿಗಳಿಗೆ ಚೆಕ್ ವಿತರಿಸುವ ಸಮಾರಂಭ ಹಾಗೂ ಕೆರೆ ಬಳಕೆದಾರರ ಸಂಘಗಳ ಒಕ್ಕೂಟ ಉದ್ಘಾಟಿಸಿ ಮಾತನಾಡಿದರು.ರಾಜ್ಯದ 36 ಸಾವಿರ ಕೆರೆಗಳ ಪೈಕಿ 33 ಸಾವಿರ ಕೆರೆಗಳು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಲ್ಲಿವೆ. ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ  360 ಕೆರೆಗಳಿವೆ. ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಣ್ಣ ಕೆರೆಗಳನ್ನು ಆಯ್ಕೆ ಮಾಡಿ ತಲಾ ರೂ 25 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಪ್ರಕ್ರಿಯೆ ಆರಂಭಗೊಂಡಿದೆ ಎಂದರು.ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ 5 ಕೋಟಿಯಂತೆ ನೀಡಿ ಜಿಲ್ಲಾಧಿಕಾರಿಗಳಿಗೆ ಉಸ್ತುವಾರಿ ವಹಿಸಲಾಗಿದೆ.  ವಿಜಾಪುರ ಜಿಲ್ಲೆಯಲ್ಲಿ 310 ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜ್ಯದಲ್ಲಿ 100 ಸಾಂಸ್ಕೃತಿಕ ಭವನಗಳನ್ನು ನಿರ್ಮಿಸಲಾಗುವುದು ಎಂದೂ ಸಚಿವರು ಹೇಳಿದರು.

ರಾಜ್ಯದಲ್ಲಿ ಒತ್ತುವರಿಯಾಗಿದ್ದ 1333 ಕೆರೆಗಳನ್ನು ತೆರವುಗೊಳಿಸಿ 2563 ಹೆಕ್ಟೇರ್ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.ಶಾಸಕ ವಿಠ್ಠಲ ಕಟಕಧೋಂಡ, ಅಧ್ಯಕ್ಷತೆ ವಹಿಸಿದ್ದ ಶಾಸಕ ಅಪ್ಪು ಪಟ್ಟಣಶೆಟ್ಟಿ ಮಾತನಾಡಿದರು. ಸಂಸದ ರಮೇಶ ಜಿಗಜಿಣಗಿ, ಶಾಸಕ ಎಂ.ಬಿ. ಪಾಟೀಲ, ಜಿ.ಪಂ. ಅಧ್ಯಕ್ಷೆ ಶಂಕ್ರುಬಾಯಿ ಚಲವಾದಿ, ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ಜಿ.ಪಂ. ಸಿಇಒ ಎ.ಎನ್. ಪಾಟೀಲ, ಜಲಸಂವರ್ಧನ ಯೋಜನಾ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಪುನಟಿ ಶ್ರೀಧರ, ಜಿಲ್ಲಾ ಕೆರೆ ಬಳಕೆದಾರರ ಸಂಘಗಳ ಒಕ್ಕೂಟದ ಅಧ್ಯಕ್ಷ ಶಿವಣ್ಣ ಮುದ್ದೇಬಿಹಾಳ, ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಎಸ್.ಎಲ್. ವಾರಣಾಸಿ ಇತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.