ಗುರುವಾರ , ಜೂನ್ 24, 2021
22 °C

ರಾಜ್ಯಸಭೆ ಟಿಕೆಟ್ ಆಕಾಂಕ್ಷಿಗಳ ಲಾಬಿ ತೀವ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷವಾದ ಕಾಂಗ್ರೆಸ್‌ನಲ್ಲಿ ರಾಜ್ಯಸಭೆಯ ಟಿಕೆಟ್‌ಗಾಗಿ ಆಕಾಂಕ್ಷಿಗಳು ತೀವ್ರ ಲಾಬಿ ನಡೆಸಿದ್ದಾರೆ.ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರೆಲ್ಲ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರದಲ್ಲಿ ತೊಡಗಿರುವುದರಿಂದ ರಾಜ್ಯಸಭೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಆದರೆ ಆಕಾಂಕ್ಷಿಗಳು ಈಗಾಗಲೇ ಹೈಕಮಾಂಡ್ ಮೇಲೆ ಒತ್ತಡ ಹೇರುವ ಕಾರ್ಯದಲ್ಲಿ ತೊಡಗಿದ್ದಾರೆ.ಇದೇ 30ರಂದು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ನಾಲ್ಕು ಸ್ಥಾನಗಳ ಚುನಾವಣೆಗೆ ಸೋಮವಾರದಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಬಿಜೆಪಿಗೆ ಎರಡು, ಕಾಂಗ್ರೆಸ್‌ಗೆ ಒಂದು ಸ್ಥಾನ ಸುಲಭವಾಗಿ ದೊರೆಯಲಿದ್ದು, ನಾಲ್ಕನೇ ಅಭ್ಯರ್ಥಿಯ ಗೆಲುವಿನಲ್ಲಿ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ.ರಾಜ್ಯಸಭೆಯ ಉಪ ಸಭಾಪತಿ ಕೆ.ರೆಹಮಾನ್ ಖಾನ್, ಸಂಸದರಾದ ಕೆ.ಬಿ.ಶಾಣಪ್ಪ, ಹೇಮಾಮಾಲಿನಿ ಮತ್ತು ರಾಜೀವ್ ಚಂದ್ರಶೇಖರ್ ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ನ ರೆಹಮಾನ್ ಖಾನ್ ಪುನರಾಯ್ಕೆ ಬಯಸಿದ್ದಾರೆ. ಇನ್ನು ಮಾಜಿ ಕೇಂದ್ರ ಸಚಿವರಾದ ಸಿ.ಕೆ.ಜಾಫರ್ ಷರೀಫ್, ಸಿ.ಎಂ. ಇಬ್ರಾಹಿಂ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಅವರೂ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದಾರೆ.ಒಂದು ಸ್ಥಾನ ಮಾತ್ರ ಕಾಂಗ್ರೆಸ್‌ಗೆ ದೊರೆಯಲಿದ್ದು, ಮುಸ್ಲಿಂ ಸಮುದಾಯಕ್ಕೆ ಸೇರಿದವರಿಗೇ ಆ ಸ್ಥಾನ ನೀಡುವ ಸಾಧ್ಯತೆಗಳಿವೆ. ರೆಹಮಾನ್ ಖಾನ್ ಪುನರಾಯ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಒಂದು ವೇಳೆ ಅವರನ್ನು ಕೈಬಿಟ್ಟರೆ ಹಿರಿಯ ಮುಖಂಡರಾದ ಷರೀಫ್‌ಗೆ ಟಿಕೆಟ್ ನೀಡಬಹುದು ಎಂದು ಮೂಲಗಳು ತಿಳಿಸಿವೆ.ಬಿಜೆಪಿಯಲ್ಲೂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಹಾಲಿ ಸದಸ್ಯರಾದ ಶಾಣಪ್ಪ ಅವರೊಂದಿಗೆ ದೆಹಲಿಯಲ್ಲಿ ರಾಜ್ಯದ ವಿಶೇಷ ಪ್ರತಿನಿಧಿಯಾಗಿರುವ ವಿ.ಧನಂಜಯಕುಮಾರ್, ಲೋಕಸಭೆಯ ಮಾಜಿ ಉಪಸಭಾಧ್ಯಕ್ಷ ಎಸ್.ಮಲ್ಲಿಕಾರ್ಜುನಯ್ಯ ಮೊದಲಾದವರು ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ.ಈ ಬಾರಿ ಹೇಮಾಮಾಲಿನಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಕಡಿಮೆ. ಆದರೆ ಆ ಸ್ಥಾನಕ್ಕೆ ರಾಷ್ಟ್ರಮಟ್ಟದ ಮುಖಂಡರೊಬ್ಬರನ್ನು ಆಯ್ಕೆ ಮಾಡಲಾಗುತ್ತದೆ. ರಾಜ್ಯದಿಂದ ಒಬ್ಬರಿಗೆ ಮಾತ್ರ ಅವಕಾಶ ಸಿಗಲಿದ್ದು, ಶಾಣಪ್ಪ ಅಥವಾ ಅವರ ಸಮುದಾಯಕ್ಕೆ ಸೇರಿದ ಯುವಕರಿಗೆ ಟಿಕೆಟ್ ನೀಡಲು ಚಿಂತನೆ ನಡೆದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.ಜೆಡಿಎಸ್ ನಿರ್ಣಾಯಕ: ವಿಧಾನ ಸಭೆಯ ಒಟ್ಟು ಸಂಖ್ಯಾಬಲ 224. ಒಬ್ಬ ಅಭ್ಯರ್ಥಿಯ ಗೆಲುವಿಗೆ 45 ಮತಗಳು ಬೇಕು. ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿ ಎರಡು, ಕಾಂಗ್ರೆಸ್ ಒಂದು ಸ್ಥಾನವನ್ನು ಸುಲಭವಾಗಿ ಪಡೆಯಲಿದೆ.26 ಸದಸ್ಯರನ್ನು ಹೊಂದಿರುವ ಜೆಡಿಎಸ್ ಮತಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಜೆಡಿಎಸ್‌ನವರು ಕಾಂಗ್ರೆಸ್‌ಗೆ ಬೆಂಬಲ ನೀಡಿದರೆ ಆ ಪಕ್ಷಕ್ಕೆ ಎರಡು ಸ್ಥಾನಗಳು ದೊರೆಯಲಿವೆ. ಆದರೆ ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಅಂತಹ ಸಾಧ್ಯತೆಗಳು ತುಂಬಾ ಕಡಿಮೆ.ರಾಜೀವ್ ಚಂದ್ರಶೇಖರ್, ಆದಿಕೇಶವುಲು ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಜೆಡಿಎಸ್‌ನ 26 ಮತ್ತು ಬಿಜೆಪಿಯ ಹೆಚ್ಚುವರಿ ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಲು ಪ್ರಯತ್ನ ನಡೆಸಿದ್ದಾರೆ.ಇದಲ್ಲದೆ ಆಂಧ್ರ ಪ್ರದೇಶದ ಪ್ರಭಾವಿ ಮುಖಂಡರೊಬ್ಬರು ನಾಲ್ಕನೇ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ತಿಳಿದುಬಂದಿದೆ.  ರಾಜೀವ್ ಚಂದ್ರಶೇಖರ್ ಪುನರಾಯ್ಕೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರೋಧವಿದೆ ಎನ್ನಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.