ಭಾನುವಾರ, ಏಪ್ರಿಲ್ 18, 2021
33 °C

ರಾಜ್ಯ ದೋಬಿಘಾಟ್‌ಗಳ ಒಕ್ಕೂಟ ಸದಸ್ಯರು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಒತ್ತಾಯಿಸಿ ರಾಜ್ಯ ದೋಬಿಘಾಟ್‌ಗಳ ಒಕ್ಕೂಟದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.ಒಕ್ಕೂಟದ ಅಧ್ಯಕ್ಷ ಬಿ.ಪಿ ಕರಿಯಪ್ಪ ಮಾತನಾಡಿ, `ಮೂರು ವರ್ಷಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆಯು ಮಡಿವಾಳ ಜನಾಂಗದ ಸ್ಥಿತಿಗತಿಯ ಬಗ್ಗೆ ಅಧ್ಯಯನ ಮಾಡಲು ಸಂಶೋಧಕಿ ಪ್ರೊ.ಅನ್ನಪೂರ್ಣ ಅವರನ್ನು ನೇಮಕ ಮಾಡಿತ್ತು. ಎರಡು ವರ್ಷಗಳ ಕಾಲ ಅಧ್ಯಯನ ಮಾಡಿದ ಅವರು, ಸಂಪೂರ್ಣ ವರದಿಯನ್ನು ಇಲಾಖೆಗೆ ಸಲ್ಲಿಸಿದ್ದಾರೆ.ಆ ವರದಿಗೆ ಸ್ಪಂದಿಸುವಂತೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ಎನ್.ಶಂಕರಪ್ಪ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳು ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ್ದಾರೆ. ಆದರೆ, ಸಮಾಜ ಕಲ್ಯಾಣ ಇಲಾಖೆ ಸಚಿವರು ಕಳೆದ ಆರು ತಿಂಗಳಿಂದ ವರದಿಯನ್ನು ತಮ್ಮ ಬಳಿಯೇ ಇಟ್ಟುಕೊಂಡು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ~ ಎಂದು ಆರೋಪಿಸಿದರು.`ಈಗಾಗಲೇ 17 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶದಲ್ಲಿ ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಆದ್ದರಿಂದ ನಮ್ಮ ರಾಜ್ಯದಲ್ಲೂ ಈ ವ್ಯವಸ್ಥೆಯನ್ನು ಜಾರಿಗೆ ತಂದು ಮಡಿವಾಳ ಜನಾಂಗಕ್ಕೆ ನ್ಯಾಯ ಒದಗಿಸಬೇಕು. ಜತೆಗೆ ಮಡಿವಾಳ ಮಾಚಿದೇವ ಪೀಠವನ್ನು ಕೂಡಲ ಸಂಗಮ ಪ್ರಾಧಿಕಾರಕ್ಕೆ ಸೇರಿಸಬೇಕು. ಎರಡು ಕೋಟಿ ರೂಪಾಯಿ ವೆಚ್ಚ ಮಾಡಿ ಪೀಠವನ್ನು ಯಾತ್ರಾ ಸ್ಥಳವನ್ನಾಗಿ ಮಾಡಬೇಕು~ ಎಂದರು.`ಮುಖ್ಯಮಂತ್ರಿ ಅವರ ಆಪ್ತ ಕಾರ್ಯದರ್ಶಿಗಳು ಮನವಿ ಸ್ವೀಕರಿಸಿದ್ದಾರೆ. ಈ ಬಗ್ಗೆ ಸಭೆ ನಡೆಸಿ ಶೀಘ್ರವೇ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದಾರೆ. ಬೇಡಿಕೆ ಈಡೇರದೆ ಹೋದರೆ ಮುಂದಿನ ದಿನಗಳಲ್ಲಿ ವಿಧಾನ ಸೌಧ ಚಲೋ ನಡೆಸುತ್ತೇವೆ~ ಎಂದು ನೆಲಮಂಗಲ ಮಡಿವಾಳ ಸಂಘದ ಅಧ್ಯಕ್ಷ ರಂಗಸ್ವಾಮಯ್ಯ ಎಚ್ಚರಿಸಿದರು.ಮಡಿವಾಳ ಮಾಚಿದೇವ ಪೀಠದ ಶಿವಯೋಗಾನಂದಪುರಿ ಸ್ವಾಮೀಜಿ, ಚಿತ್ರದುರ್ಗದ ಮಾಚದೇವ ಮಹಾಸಂಸ್ಥಾನದ ಬಸವ ಮಾಚಿದೇವ ಮಹಾಶರಣರು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.