ಶನಿವಾರ, ಮೇ 15, 2021
24 °C

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಒತ್ತಾಯ:ಶಾಸಕರಿಂದ ಸಹಿ ಸಂಗ್ರಹಿಸಿ ಒತ್ತಡ ತಂತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಒತ್ತಾಯಿಸಿ ಆಡಳಿತಾರೂಢ ಬಿಜೆಪಿಯ ಕೆಲ ಶಾಸಕರು ಸಹಿ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ. ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರುವ ಉದ್ದೇಶದ ಈ ಕಾರ್ಯ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ನಡೆದಿದೆ.ವಿಧಾನಸೌಧದಲ್ಲಿನ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಗುರುವಾರ ಸಭೆ ಸೇರಿದ ಶಾಸಕರು, ಆದಷ್ಟು ಬೇಗ ಸಂಪುಟ ವಿಸ್ತರಿಸುವಂತೆ ಪಕ್ಷದ ಮುಖಂಡರನ್ನು ಆಗ್ರಹಪಡಿಸಿದರು. ಸೊಗಡು ಶಿವಣ್ಣ, ಅಭಯ ಪಾಟೀಲ, ಅಪ್ಪಚ್ಚು ರಂಜನ್, ಕಳಕಪ್ಪ ಬಂಡಿ, ಜಿ.ಎನ್. ನಂಜುಂಡಸ್ವಾಮಿ ಸೇರಿದಂತೆ ಹಲವು ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ಶಾಸಕರು, ಸಹಿ ಸಂಗ್ರಹದಲ್ಲಿಯೂ ತೊಡಗಿದ್ದರು. ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ರವಿ ಅವರು, `ಇದು ಪಕ್ಷ ವಿರೋಧಿ ಚಟುವಟಿಕೆ ಅಲ್ಲ. ಪಕ್ಷದ ಹಿತದೃಷ್ಟಿಯಿಂದ ಸಂಪುಟ ವಿಸ್ತರಣೆಗೆ ವರಿಷ್ಠರನ್ನು ಒತ್ತಾಯಿಸುತ್ತಿದ್ದೇವೆ~ ಎಂದು ಹೇಳಿದರು.`ವಿಧಾನಸಭೆ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಇದೆ. ಸಂಪುಟ ವಿಸ್ತರಣೆಯನ್ನು ಇನ್ನಷ್ಟು ಮುಂದೂಡುತ್ತಾ ಹೋಗುವುದು ಸರಿಯಲ್ಲ. 19 ಖಾತೆಗಳನ್ನು ನಿಭಾಯಿಸುವುದು ಕಷ್ಟ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರೇ ಹೇಳಿದ್ದಾರೆ. ಇದರ ಮಧ್ಯೆ ಸುಮಾರು 15 ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಸಾಮಾಜಿಕವಾಗಿಯೂ ನ್ಯಾಯ ಒದಗಿಸಬೇಕಾಗಿದೆ. ಇಂತಹ ಸನ್ನಿವೇಶದಲ್ಲಿ ಸಂಪುಟ ವಿಸ್ತರಣೆ ಮಾಡುವಂತೆ ಒತ್ತಾಯಿಸುವುದರಲ್ಲಿ ಯಾವ ತಪ್ಪೂ ಇಲ್ಲ~ ಎಂದರು.ಶಾಸಕರ ಸಹಿ ಇರುವ ಮನವಿ ಪತ್ರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ, ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಮುಖ್ಯಮಂತ್ರಿ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಲಾಗುವುದು ಎಂದು ಹೇಳಿದರು.`ಸಂಪುಟ ವಿಸ್ತರಣೆಯ ಅಗತ್ಯವನ್ನು ಮುಖ್ಯಮಂತ್ರಿ ಸೇರಿದಂತೆ ಎಲ್ಲ ನಾಯಕರೂ ಪ್ರತಿಪಾದಿಸುತ್ತಲೇ ಬಂದಿದ್ದಾರೆ. ಆದರೆ, ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ಅದಕ್ಕೆ ಅಡ್ಡಿ ಉಂಟು ಮಾಡುತ್ತಿದ್ದಾರೆ. ವಿಸ್ತರಣೆಗೆ ಕೈಹಾಕಿದರೆ, ಸರ್ಕಾರ ಪತನವಾಗುತ್ತದೆ ಎಂದು ಹುಯಿಲೆಬ್ಬಿಸುತ್ತಿದ್ದಾರೆ.ಇಂತಹ ಅಪಸ್ವರಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಇದುವರೆಗೂ 27 ಮಂದಿ ಸಹಿ ಶಾಸಕರು ಹಾಕಿದ್ದಾರೆ. ಸಂಖ್ಯೆ ಇನ್ನೂ ಹೆಚ್ಚಲಿದೆ~ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸಂಪುಟ ವಿಸ್ತರಣೆಗೆ ಕೆಲವು ಸಚಿವರೇ ಅಡ್ಡಿಪಡಿಸುತ್ತಿದ್ದಾರೆಂಬ ದೂರಿನ ಬಗ್ಗೆ ಕೇಳಿದಾಗ, `ಸಮಯ ಬಂದಾಗ ಆ ಕುರಿತು ಪ್ರತಿಕ್ರಿಯೆ ನೀಡುತ್ತೇನೆ~ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.