ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

7

ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

Published:
Updated:

ದಾವಣಗೆರೆ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಬರ ಪರಿಸ್ಥಿತಿ ನಿರ್ವಹಣೆ ಮತ್ತು ಅನುದಾನ ಸದ್ಬಳಕೆ ಸೇರಿದಂತೆ ಒಟ್ಟಾರೆ ಆಡಳಿತ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದು, ಜವಾಬ್ದಾರಿ ಮರೆತು ಹುಡುಗಾಟಿಕೆಯಿಂದ ಸರ್ಕಾರ ನಡೆಸುವ ಬದಲು ಜನರ ಬಳಿಗೆ ಹೋಗುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.ಜೆಡಿಎಸ್ ಜಿಲ್ಲಾ ಕಾರ್ಯಕರ್ತರ ಸಮಾವೇಶ `ಜನಪರ ಜನತಾ ಜಾಥಾ~ದಲ್ಲಿ ಪಾಲ್ಗೊಳ್ಳಲು ಬುಧವಾರ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಜವಾಬ್ದಾರಿ ಮರೆತು ಕೇವಲ ಕಾಲಹರಣ ಮಾಡುತ್ತಿದೆ ಎಂದು ಹರಿಹಾಯ್ದರು.ಬರಪೀಡಿತ ಪ್ರದೇಶದ ಜನರು ಕುಡಿಯುವ ನೀರು, ಮೇವು ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಬರ ಪರಿಸ್ಥಿತಿ ನಿಭಾಯಿಸಲು ಸರ್ಕಾರದ ಕಾರ್ಯಕ್ರಮ ಏನು ಎನ್ನುವುದು ಸ್ಪಷ್ಟವಾಗಿಲ್ಲ. 99 ತಾಲ್ಲೂಕುಗಳಲ್ಲಿ ಬರ ಇದೆ. ರೂ. 2,400 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ. ಬರ ನಿರ್ವಹಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯಪಾಲರ ಭಾಷಣದಲ್ಲಿ ವಿವರಣೆ ನೀಡಲಾಗಿದೆ. ಆದರೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು.ರಾಜ್ಯದ ಬಜೆಟ್ ಸಿದ್ಧಪಡಿಸುವಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್. ಆಚಾರ್ಯ ಪ್ರಮುಖ ಪಾತ್ರ ನಿರ್ವಹಿಸುತ್ತ ಬಂದಿದ್ದರು. ಅವರ ನಿಧನದ ಹಿನ್ನೆಲೆಯಲ್ಲಿ `ಯಾರನ್ನು ನಂಬಿ ಬಜೆಟ್ ಸಿದ್ಧ ಮಾಡಲಿ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರೇ ಅಸಹಾಯಕತೆ ವ್ಯಕ್ತಪಡಿಸಿರುವುದು ದುರದೃಷ್ಟಕರ ಬೆಳವಣಿಗೆಯಾಗಿದೆ ಎಂದು ಹೇಳಿದರು.ಸದಾನಂದ ಗೌಡ ಅವರು ಒಂದು ಕಡೆ ಆರ್‌ಎಸ್‌ಎಸ್ ಮುಖಂಡರಿಗೆ ಸಮಾಧಾನ ಮಾಡಬೇಕು. ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನೂ ಓಲೈಸಬೇಕು. ಸ್ವತಃ ಮುಖ್ಯಮಂತ್ರಿ ಅವರು 18 ಖಾತೆಗಳ ಜವಾಬ್ದಾರಿ ನಿಭಾಯಿಸಬೇಕಿದೆ. ಸಂಪುಟದಲ್ಲಿ 11 ಸಚಿವರು ಇಲ್ಲ. ಇಂಥ ಸ್ಥಿತಿಯಲ್ಲಿ ಅವರು ಹೇಗೆ ಆಡಳಿತ ನಿರ್ವಹಿಸುತ್ತಾರೆ ಎಂದು ಪ್ರಶ್ನಿಸಿದರು.`ಬಜೆಟ್ ಮಂಡನೆ ಆಗುವವರೆಗಾದರೂ ನನ್ನನ್ನು ಮುಖ್ಯಮಂತ್ರಿಯಾಗಿರಲು ಬಿಡಿ~ ಎಂದು ಸದಾನಂದ ಗೌಡರು ಹೇಳಿಕೊಂಡಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ರೀತಿಯ ಹುಡುಗಾಟಿಕೆಯಿಂದ ರಾಜ್ಯದ ಆಡಳಿತ ನಡೆಸುವುದು ಸೂಕ್ತವಲ್ಲ ಎಂದು ಹೇಳಿದರು.ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಈ ನಿಟ್ಟಿನಲ್ಲಿ ಪಕ್ಷದ ಸಂಘಟನೆ ದೃಷ್ಟಿಯಿಂದ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ. ತಮ್ಮ ನಾಯಕತ್ವದಲ್ಲಿ ರಾಜ್ಯದಲ್ಲಿ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಯುವಕರಿಗೆ ಹೆಚ್ಚು ಅವಕಾಶಗಳನ್ನು ನೀಡಲಾಗುವುದು. ರಾಜ್ಯ ಪ್ರವಾಸ ಮುಗಿದ ನಂತರ ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ವಾಸ್ತವ್ಯ ಹೂಡುವ ಉದ್ದೇಶವಿದೆ ಎಂದು ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry