ಗುರುವಾರ , ಮೇ 26, 2022
23 °C

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಅಧಿಕಾರ: ಸೋನಿಯಾ ವಿವೇಚನೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಅಧಿಕಾರ: ಸೋನಿಯಾ ವಿವೇಚನೆಗೆ

ನವದೆಹಲಿ: ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಸ್ಥಾನಕ್ಕೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಅಧಿಕಾರವನ್ನು ಕಾಂಗ್ರೆಸ್ ಕಾರ್ಯಕಾರಿಣಿ ಸೋಮವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೀಡಿತು.

ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಅಧಿಕಾರವನ್ನು ಸೋನಿಯಾ ಅವರಿಗೆ ನೀಡುವ ನಿರ್ಣಯವನ್ನು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಮಂಡಿಸಿದರು. ರಾಷ್ಟ್ರಪತಿ ಚುನಾವಣೆ ಜುಲೈನಲ್ಲಿ ನಡೆಯಲಿದ್ದು, ಪ್ರಣವ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಅಧಿಕಾರವನ್ನು ಸೋನಿಯಾ ಅವರಿಗೆ ಬಿಡುವ ನಿರ್ಣಯ ಮಾಡಲಾಗಿದೆ ಎಂದು ಪಕ್ಷದ ವಕ್ತಾರ ಜನಾರ್ದನ ದ್ವಿವೇದಿ ಕಾರ್ಯಕಾರಿಣಿ ಬಳಿಕ ಪತ್ರಕರ್ತರಿಗೆ ತಿಳಿಸಿದರು.

ಲೋಕಸಭೆ ಹಾಗೂ ರಾಜ್ಯಸಭೆಗಳೆರಡರಲ್ಲೂ ಕಾಂಗ್ರೆಸ್ ಅತ್ಯಂತ ದೊಡ್ಡ ಪಕ್ಷವಾಗಿದ್ದು ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಮುನ್ನ ಪಕ್ಷದ ಅಧ್ಯಕ್ಷರು ಎಲ್ಲ ಅಂಶಗಳನ್ನು ಪರಿಶೀಲಿಸಲಿದ್ದಾರೆ ಎಂದು ಪ್ರಣವ್ ಮುಖರ್ಜಿ ಸ್ಪಷ್ಟಪಡಿಸಿದರು.

`ನೀವೇ ರಾಷ್ಟ್ರಪತಿ ಸ್ಥಾನದ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ~ ಎಂಬ ಪ್ರಶ್ನೆಗೆ, `ಇದನ್ನು ನಾನಾಗಲೀ ಅಥವಾ ದ್ವಿವೇದಿ ಅವರಾಗಲೀ ತೀರ್ಮಾನಿಸುವುದಿಲ್ಲ~ ಎಂದು ಪ್ರಣವ್ ಮುಖರ್ಜಿ ನಕ್ಕರು.

ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಈಗಾಗಲೇ ಪ್ರಣವ್ ಅವರಿಗೆ ತಮ್ಮ ಬೆಂಬಲವಿಲ್ಲ ಎಂದು ಹೇಳಿದ್ದಾರೆ. ರಾಷ್ಟ್ರಪತಿ ಸ್ಥಾನಕ್ಕೆ ಪ್ರಣವ್ ಜತೆ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ಹೆಸರೂ ಕೇಳಿಬರುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.