ರೆಡ್ಡಿ ಜಾಮೀನು ಅರ್ಜಿ: ವಿಚಾರಣೆ ಮುಂದೂಡಿಕೆ
ಬೆಂಗಳೂರು: ಅಸೋಸಿಯೇಟೆಡ್ ಮೈನಿಂಗ್ ಕಂಪೆನಿ ಮೂಲಕ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಸೋಮವಾರ ಮತ್ತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಸೂಚಿಸಿರುವ ನ್ಯಾಯಾಲಯ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದೆ.
ಈ ಪ್ರಕರಣದಲ್ಲಿ ಸಿಬಿಐ ಈಗಾಗಲೇ ಆರೋಪಪಟ್ಟಿ ಸಲ್ಲಿಸಿದೆ. ಆದ್ದರಿಂದ ಸಾಕ್ಷ್ಯನಾಶದ ಪ್ರಶ್ನೆ ಉದ್ಭವಿಸುವುದಿಲ್ಲ ಎಂಬುದೂ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸುವಂತೆ ರೆಡ್ಡಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಸೋಮವಾರ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶ ಬಿ.ಎಂ.ಅಂಗಡಿ ಅವರು ಇದೇ 18ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಬಿಐಗೆ ಆದೇಶಿಸಿ, ವಿಚಾರಣೆ ಮುಂದೂಡಿದರು.
ಅಲಿಖಾನ್ ಅರ್ಜಿ: ಇದೇ ಪ್ರಕರಣದಲ್ಲಿ ಬಂಧಿತನಾಗಿರುವ ರೆಡ್ಡಿ ಅವರ ಬಂಟ ಮೆಹಫೂಜ್ ಅಲಿಖಾನ್ ಮಧ್ಯಂತರ ಜಾಮೀನು ಕೋರಿ ಸೋಮವಾರ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.