ಭಾನುವಾರ, ಮೇ 22, 2022
21 °C

ರೆಡ್ಡಿ ವಿಚಾರಣೆಗೆ ಇ.ಡಿಗೆ ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಣದಅಕ್ರಮ ವರ್ಗಾವಣೆ ಮತ್ತು ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ ಉಲ್ಲಂಘನೆ ಆರೋಪಗಳಿಗೆ ಸಂಬಂಧಿಸಿದಂತೆ ಇದೇ 21ರಿಂದ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರ ವಿಚಾರಣೆ ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಅನುಮತಿ ನೀಡಿದೆ.ಅಸೋಸಿಯೇಟೆಡ್ ಮೈನಿಂಗ್ ಕಂಪೆನಿ ಮೂಲಕ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಮೇಲೆ ರೆಡ್ಡಿ ಮತ್ತು ಇತರರ ವಿರುದ್ಧ ತನಿಖೆ ನಡೆಸಿದ್ದ ಸಿಬಿಐ ಮೇ 30ರಂದು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು. ರೆಡ್ಡಿ ಅಕ್ರಮ ಗಣಿಗಾರಿಕೆ ಮೂಲಕ 480 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಅಕ್ರಮವಾಗಿ ಸಂಪಾದಿಸಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ಸಿಬಿಐ ತಿಳಿಸಿತ್ತು.

 

ಸಿಬಿಐ ಆರೋಪಪಟ್ಟಿ ಮತ್ತು ಅದರೊಂದಿಗೆ ಸಲ್ಲಿಸಿದ ದಾಖಲೆಗಳನ್ನು ಪಡೆದ ಜಾರಿ ನಿರ್ದೇಶನಾಲಯದ ಬೆಂಗಳೂರು ವಿಭಾಗದ ಅಧಿಕಾರಿಗಳು, ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಮತ್ತು ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆಗಳ ಅಡಿಯಲ್ಲಿ ತನಿಖೆ ಆರಂಭಿಸಿದ್ದರು. ಅಕ್ರಮ ಗಣಿಗಾರಿಕೆಯಿಂದ ಸಂಪಾದಿಸಿದ ಹಣದ ವರ್ಗಾವಣೆ, ಅದಿರು ರಫ್ತಿನಲ್ಲಿ ಅಕ್ರಮ ಎಸಗಿರುವುದು ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಅವರನ್ನು ಪ್ರಶ್ನಿಸಲು ಅವಕಾಶ ನೀಡುವಂತೆ ಇ.ಡಿ ಬುಧವಾರ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.ಇ.ಡಿ ಅರ್ಜಿಯನ್ನು ಮಾನ್ಯಮಾಡಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಎಂ.ಅಂಗಡಿ ಅವರು, ಇದೇ 21ರಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೆಡ್ಡಿ ಅವರ ವಿಚಾರಣೆಗೆ ಅನುಮತಿ ನೀಡಿದ್ದಾರೆ. ಆರೋಪಿಯ ವಿಚಾರಣೆ ನಡೆಸಲು ಇ.ಡಿ ಅಧಿಕಾರಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಕಾರಾಗೃಹದ ಅಧೀಕ್ಷಕರಿಗೆ ನ್ಯಾಯಾಧೀಶರು ಸೂಚಿಸಿದ್ದಾರೆ.`ಸಿಬಿಐ ನ್ಯಾಯಾಲಯ ಇ.ಡಿ ಅರ್ಜಿಯನ್ನು ಮಾನ್ಯ ಮಾಡಿಲ್ಲ. ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಮತ್ತು ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿ, ಇ.ಡಿ ಅರ್ಜಿಯನ್ನು ತಿರಸ್ಕರಿಸಿದೆ~ ಎಂದು `ಪ್ರಜಾವಾಣಿ~ಯ ಗುರುವಾರದ ಸಂಚಿಕೆಯಲ್ಲಿ ತಪ್ಪಾಗಿ ಪ್ರಕಟವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.