ರೈತರ ಆತ್ಮಹತ್ಯೆ: ಪಿಐಎಲ್

7

ರೈತರ ಆತ್ಮಹತ್ಯೆ: ಪಿಐಎಲ್

Published:
Updated:

ಬೆಂಗಳೂರು: ತೋಟಗಾರಿಕೆ ಮತ್ತು ಕೃಷಿ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆ ಘೋಷಿಸುವಂತೆ ಆದೇಶ ನೀಡಲು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶಿಸಿದೆ.ಹಾಸನ ಜಿಲ್ಲೆಯ ಅರಕಲಗೂಡಿನ ಕೃಷಿಕ ಎಚ್.ಟಿ. ಹುಚ್ಚಪ್ಪ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯಲು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವುದರ ಜೊತೆಗೆ ಕೃಷಿ ಉತ್ಪನ್ನಗಳ ಬೆಲೆ ನಿಗದಿ ಆಯೋಗ ರಚಿಸಬೇಕು ಎಂದೂ ಅರ್ಜಿಯಲ್ಲಿ ಕೋರಲಾಗಿದೆ.ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕ ದೇಶದಲ್ಲೇ 3ನೇ ಸ್ಥಾನದಲ್ಲಿದೆ. ಬೆಳೆಗೆ ಸೂಕ್ತ ಬೆಲೆ ದೊರೆಯದ ಕಾರಣ ಹೀಗಾಗುತ್ತಿದೆ. ರಾಜ್ಯದ ಒಟ್ಟು ಕೃಷಿ ಭೂಮಿಯ ಪೈಕಿ ಶೇ 26.5ರಷ್ಟು ಮಾತ್ರ ನೀರಾವರಿ ಸೌಲಭ್ಯ ಹೊಂದಿದೆ. ಇನ್ನುಳಿದ ಭೂಮಿ ಮಳೆ ನಂಬಿಕೊಂಡಿದೆ. ನೀರಾವರಿ ಸೌಲಭ್ಯ ಇಲ್ಲದ ಪ್ರದೇಶಗಳ ರೈತರ ನೆರವಿಗೆ ಸರ್ಕಾರವೂ ಬರುತ್ತಿಲ್ಲ ಎಂದು ದೂರಲಾಗಿದೆ.ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, `1995ರಿಂದ 2011ರ ನಡುವೆ ದೇಶದಲ್ಲಿ ಒಟ್ಟು 2,70,940 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಪೈಕಿ 37,153 ಮಂದಿ ಕರ್ನಾಟಕದವರು~ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry