ಸೋಮವಾರ, ಅಕ್ಟೋಬರ್ 21, 2019
25 °C

ರೈತರ ಸಮಸ್ಯೆ ಪರಿಹಾರಕ್ಕೆ ಮನವಿ

Published:
Updated:

ಯಾದಗಿರಿ: ಜಿಲ್ಲೆಯಾದ್ಯಂತ ಭೂ ಕಾಯ್ದೆ ಅಡಿ ಬರುವ ರೈತರ ಸಮಸ್ಯೆಗಳ ಶೀಘ್ರ ವಿಲೇವಾರಿ, ವಿದ್ಯುತ್ ಸಮಸ್ಯೆ, ರಸ್ತೆಗಳ ದುಸ್ಥಿತಿ, ನೀರಿನ ಸಮಸ್ಯೆ ಹಾಗೂ ಮೈಲಾಪೂರ ಜಾತ್ರೆಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಮನವಿಯನ್ನು ಟೋಕರಿ ಕೋಲಿ ಸಮಾಜದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.ಶಹಾಪುರ, ಸುರಪುರ ಹಾಗೂ ಯಾದಗಿರಿ ಹೋಬಳಿ ಮಟ್ಟದಲ್ಲಿ ರೈತಾಪಿ ಜನರು ಜಮೀನು ವರ್ಗಾವಣೆಗಾಗಿ ಪರದಾಡುವಂತಹ ಸ್ಥಿತಿ ಬಂದಿದೆ. ಭೂ ಮಾಪನ ಕಚೇರಿಯೂ ತಮ್ಮ ಅಧೀನದಲ್ಲಿ ಬರುವುದರಿಂದ ರೈತಾಪಿ ಜನರಿಗೆ ಅನುಕೂಲವಾಗುವಂತೆ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಲು ಸುತ್ತೋಲೆಯನ್ನು ಹೊರಡಿಸುವಂತೆ ಮನವಿ ಮಾಡಿದರು.ಜಿಲ್ಲೆಯಾದ್ಯಂತ ಪಾರದರ್ಶಕ ಆಡಳಿತ ವ್ಯವಸ್ಥೆ ಜನ ಸಾಮಾನ್ಯರಿಗೆ ತಲುಪಬೇಕಾದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಹಾಗೂ ರೈತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.ಜಿಲ್ಲೆಯಾದ್ಯಂತ ರಸ್ತೆಗಳು ಹದಗೆಟ್ಟಿದ್ದು, ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಇಲಾಖೆಯವರು ಎಚ್ಚೆತ್ತುಕೊಳ್ಳುವಂತೆ ಮಾಡಬೇಕು. ಬರಗಾಲ ಸ್ಥಿತಿಯಲ್ಲಿ ರೈತರಿಗೆ ಸಮರ್ಪಕ ವಿದ್ಯುತ್ ಒದಗಿಸಬೇಕು ಎಂದು ಒತ್ತಾಯಿಸಿದರು.ಸಂಕ್ರಾಂತಿಯ ಸಮಯದಲ್ಲಿ ತಾಲ್ಲೂಕಿನ ಮೈಲಾಪೂರ ಗ್ರಾಮದಲ್ಲಿ ಮಲ್ಲಯ್ಯನ ಜಾತ್ರೆ ನಡೆಯುತ್ತದೆ. ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಭಾಗವಹಿಸುತ್ತಾರೆ. ಅದಕ್ಕಾಗಿ ಜಿಲ್ಲೆಯಲ್ಲಿರುವ ಎಲ್ಲ ಇಲಾಖೆಗಳಿಂದಲೂ ಮುಂಜಾಗ್ರತಾ ಮಳಿಗೆಗಳನ್ನು ಸ್ಥಾಪಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಯಾವುದೇ ದುರಂತ ನಡೆಯದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಬೇಕು ಎಂದು ಆಗ್ರಹಿಸಿದರು.ಟೋಕರಿ ಕೋಲಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ ಕೆ. ಮುದ್ನಾಳ ಮುಂತಾದವರು ಮನವಿ ಸಲ್ಲಿಸಿದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)