ಸೋಮವಾರ, ಮೇ 16, 2022
29 °C

ಲೈಂಗಿಕ ಕಿರುಕುಳ:ಎಸಿಪಿ ನೇತೃತ್ವದ ತಂಡ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಮೈಸೂರು ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ’ ಎಂದು ಪೊಲೀಸ್ ಕಮಿಷನರ್ ಸುನಿಲ್ ಅಗರವಾಲ್ ಇಲ್ಲಿ ತಿಳಿಸಿದರು.ಲೈಂಗಿಕ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡು ಬಿ.ಎಂ. ಆಸ್ಪತ್ರೆಗೆ ದಾಖಲಾಗಿರುವ ಸಂಶೋಧನಾ ವಿದ್ಯಾರ್ಥಿನಿಯನ್ನು ಸೋಮವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಶಿವಬಸವಯ್ಯ ಹಾಗೂ ಸಂಶೋಧನಾ ವಿದ್ಯಾರ್ಥಿನಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಮೈಸೂರು ವಿ.ವಿ. ಕುಲಪತಿ ಪ್ರೊ.ವಿ.ಜಿ.ತಳವಾರ್ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ತಿಳಿಸಿದರು. ‘ಪ್ರಕರಣ ಕುರಿತಂತೆ ಎಸಿಪಿ ನೇತೃತ್ವದ ತಂಡ ತನಿಖೆ ನಡೆಸಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಸೂಕ್ತ ಕ್ರಮ ತೆಗೆದುಕೊಳ್ಳ ಲಾಗುವುದು’ ಎಂದರು. ಇದಕ್ಕೂ ಮುನ್ನ ಸಂಶೋಧನಾ ವಿದ್ಯಾರ್ಥಿ ನಿಯೊಂದಿಗೆ ಸುಮಾರು ಅರ್ಧ ತಾಸಿಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ ಅಗರವಾಲ್, ಅವರ ಹೇಳಿಕೆಗಳನ್ನು ಪಡೆದರು.‘ಒಂದು ವರ್ಷದಿಂದ ಪ್ರೊ.ಶಿವಬಸವಯ್ಯ ಅವರು ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಈ ವಿಷಯವನ್ನು ಆಪ್ತರೊಂದಿಗೆ ಹೇಳಿಕೊಂಡಿದ್ದೆ. ಆದರೆ ಕ್ರಮೇಣ ಎಲ್ಲವೂ ಸರಿಯಾಗುವುದು ಎಂದು ಧೈರ್ಯ ತುಂಬಿದ್ದರು. ಆದರೆ ಮತ್ತೆ ಕಿರುಕುಳ ಹೆಚ್ಚಿದ್ದರಿಂದ ಬೇರೆ ದಾರಿ ಕಾಣದೆ ಪತಿ ವಿಜಯಕುಮಾರ್‌ಗೆ ಎಲ್ಲ ವಿಷಯವನ್ನು ತಿಳಿಸಿದೆ. ಇನ್ನು ಮುಂದೆ ಮಾರ್ಗದರ್ಶನ ಮಾಡಲು ಒಪ್ಪುವುದಿಲ್ಲ ಎಂದು ಶಿವಬಸವಯ್ಯ ಅವರು ಪತ್ರ ಬರೆದು ಕುಲಪತಿಗೆ ನೀಡಿದ್ದರಿಂದ ಮನನೊಂದು ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದೆ’ ಎಂದು ಸಂಶೋಧನಾ ವಿದ್ಯಾರ್ಥಿನಿ ಸರಿತಾ ವಿಜಯಕುಮಾರ್ ಸುದ್ದಿಗಾರರಿಗೆ ತಿಳಿಸಿದರು.ತನಿಖೆಗೆ ಸಿಎಂ ಆದೇಶ

 ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ನೀಡಿದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಇಲ್ಲಿ ತಿಳಿಸಿದರು.‘ಇದೊಂದು ಗಂಭೀರವಾದ ಪ್ರಕರಣವಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಇಂತಹ ಪ್ರಕರಣಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.ಈ ನಡುವೆ ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಮಾತನಾಡಿ, ‘ಈ ಪ್ರಕರಣ ಕುರಿತು ಕುಲಪತಿಯಿಂದ ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.