ಭಾನುವಾರ, ಜೂನ್ 13, 2021
26 °C

ಲೋಕಸಭಾ ಉಪ ಚುನಾವಣೆ: ಜೆಡಿಎಸ್‌ಗೆ ಕಾಂಗ್ರೆಸ್ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವ ಸಲುವಾಗಿ ಜೆಡಿಎಸ್ ತನ್ನ ಅಭ್ಯರ್ಥಿಯ ನಾಮಪತ್ರವನ್ನು ಹಿಂದಕ್ಕೆ ಪಡೆಯುವ ಮೂಲಕ ಕಾಂಗ್ರೆಸ್‌ಗೆ ಸಹಕಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮನವಿ ಮಾಡಿದರು.ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಈ ಕ್ಷೇತ್ರದ ಜನರು ಕಾಂಗ್ರೆಸ್ ಪರವಾಗಿ ನಿಲ್ಲುತ್ತಾರೆ ಎಂಬ ವಿಶ್ವಾಸವಿದೆ. ಕೋಮುವಾದಿ ಬಿಜೆಪಿಯನ್ನು ಎದುರಿಸಲು ಜಾತ್ಯತೀತ ಪಕ್ಷಗಳು ಒಗ್ಗೂಡಬೇಕಿದೆ. ಈ ಕಾರಣಕ್ಕಾಗಿ ತಮ್ಮ ಅಭ್ಯರ್ಥಿಯನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡುತ್ತೇನೆ~ ಎಂದರು.ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣದಲ್ಲಿ ವಿಧಾನಸಭೆ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ತಪ್ಪಿತಸ್ಥರು ಎಂಬುದಾಗಿ ಸುಪ್ರೀಂಕೋರ್ಟ್‌ನ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ವರದಿ ಸಲ್ಲಿಸಿದೆ. ಇಂತಹ ಸಂದರ್ಭದಲ್ಲಿ ಅವರು ಸ್ಪೀಕರ್ ಸ್ಥಾನದಲ್ಲಿ ಮುಂದುವರಿಯಬಾರದು. ತಕ್ಷಣವೇ ಹುದ್ದೆಯಿಂದ ನಿರ್ಗಮಿಸಬೇಕು ಎಂದು ಆಗ್ರಹಿಸಿದರು.`ಸಮಿತಿಯಲ್ಲಿ ತಾರತಮ್ಯ~: ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಮಂಜುಳಾ ನಾಯ್ಡು ಮಾತನಾಡಿ, `ಬ್ಲೂ ಫಿಲಂ ವೀಕ್ಷಣೆ ಪ್ರಕರಣಕ್ಕೆ ಸಂಬಂಧಿಸಿದ ಸದನದ ವಿಚಾರಣೆ ಸಮಿತಿಯಲ್ಲಿ ಮಹಿಳಾ ಸದಸ್ಯರಿಗೆ ಸ್ಥಾನ ನೀಡಿಲ್ಲ. ಸಮಿತಿ ರಚನೆಯಲ್ಲೂ ಮಹಿಳೆಯರಿಗೆ ಅನ್ಯಾಯವಾಗಿದೆ. ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಸರ್ಕಾರದಿಂದ ನ್ಯಾಯ ದೊರೆಯುತ್ತಿಲ್ಲ~ ಎಂದು ದೂರಿದರು.ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ, `ಸರ್ಕಾರ ಬರ ಪರಿಹಾರ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಗೋವುಗಳ ರಕ್ಷಣೆಗೆ ಯಾವುದೇ ಕ್ರಮವನ್ನೂ ಕೈಗೊಂಡಿಲ್ಲ. ರಾಜ್ಯದಾದ್ಯಂತ 14 ಗೋಶಾಲೆಗಳನ್ನು ಮಾತ್ರ ತೆರೆಯಲಾಗಿದೆ. ಅಲ್ಲಿಯೂ ನೀರು ಮತ್ತು ಮೇವು ಸಮರ್ಪಕವಾಗಿ ದೊರೆಯುತ್ತಿಲ್ಲ~ ಎಂದು ಆರೋಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.