ಗುರುವಾರ , ಮೇ 13, 2021
16 °C

ಲೋಕಸಭೆ ಚುನಾವಣೆ: ಜೆಡಿಎಸ್ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಯತ್ತ ಗಮನಹರಿಸುವ ಕುರಿತು ಸೋಮವಾರ ನಡೆದ ಜೆಡಿಎಸ್‌ನ ಚಿಂತನ - ಮಂಥನ - ಸಂಘಟನೆ ಸಭೆಯಲ್ಲಿ ಚರ್ಚಿಸಲಾಯಿತು.ನಗರದ ಅರಮನೆ ಮೈದಾನದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಸಂಘಟನೆ ಮತ್ತು ವಿಧಾನಮಂಡಲದ ಉಭಯ ಸದನಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಕೆಲವು ಸಲಹೆ ಸೂಚನೆಗಳನ್ನು ನೀಡಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ ತಮ್ಮ ಅನುಭವವನ್ನು ಹಂಚಿಕೊಂಡ ದೇವೇಗೌಡ, ಆತ್ಮವಿಶ್ವಾಸ ಕಳೆದುಕೊಳ್ಳದೆ ವಿರೋಧ ಪಕ್ಷದಲ್ಲಿ ಕುಳಿತು ಸಮರ್ಥವಾಗಿ ಕಾರ್ಯನಿರ್ವಹಿಸಬೇಕು. ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದರ ಜೊತೆಗೆ, ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೆಗೆದುಕೊಂಡು ಹೋಗುವಂತೆ ಸೂಚಿಸಿದರು ಎನ್ನಲಾಗಿದೆ.ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಬೇಕು. ಕನಿಷ್ಠ 10 - 12 ಸ್ಥಾನಗಳನ್ನು ಗಳಿಸುವ ಗುರಿ ಹೊಂದಬೇಕು. ಆ ಕ್ಷೇತ್ರಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಎಚ್. ಡಿ.ಕುಮಾರಸ್ವಾಮಿ ತಿಳಿಸಿದರು ಎಂದು ಗೊತ್ತಾಗಿದೆ.ಈಚೆಗೆ ನಡೆದ ವಿಧಾನಸಭಾ ಚುನಾವಣೆಯ ಸೋಲಿನ ಬಗ್ಗೆ ಹೆಚ್ಚು ಚರ್ಚೆಯಾಗಲಿಲ್ಲ. ಪಕ್ಷದ ಸಂಘಟನೆ ಮತ್ತು ಲೋಕಸಭಾ ಚುನಾವಣೆ ಬಗ್ಗೆಯೇ ಹೆಚ್ಚು ಚರ್ಚೆಯಾಯಿತು ಎನ್ನಲಾಗಿದೆ. ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರು, ಸೋತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು.ಹಿಂದು ಪಂಚಾಂಗದ ಪ್ರಕಾರ ದೇವೇಗೌಡ ಅವರಿಗೆ ಭಾನುವಾರ 80 ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಪ್ರಮುಖರಿಗೆ ಭೋಜನ ಕೂಟ ಏರ್ಪಡಿಸಿದ್ದರು. ಇದೇ ಸಂದರ್ಭದಲ್ಲಿ ಪಕ್ಷದ ಸಂಘಟನೆ ಮತ್ತು ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಆಗಿದೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.