ಸೋಮವಾರ, ಜೂಲೈ 13, 2020
29 °C

ವಸತಿಗೃಹ ನೆಲಸಮಗೊಳಿಸಿ ವಾಣಿಜ್ಯ ಸಂಕೀರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಶಾಲನಗರ: ಸ್ಥಳೀಯ ಪಟ್ಟಣ ಪಂಚಾಯ್ತಿಗೆ ಸೇರಿದ ಬಿ.ಎಂ. ರಸ್ತೆಯಲ್ಲಿರುವ ವಸತಿ ಗೃಹಗಳನ್ನು ನೆಲಸಮಗೊಳಿಸಿ ಆ ಸ್ಥಳದಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲು ಮಂಗಳವಾರ ನಡೆದ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.ಪಟ್ಟಣ ಪಂಚಾಯ್ತಿ ಸಭಾಂಗಣದಲ್ಲಿ ಅಧ್ಯಕ್ಷೆ ಚರಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಸತಿಗೃಹ ಮತ್ತು ಹಾಲಿ ಪ.ಪಂ. ಕಚೇರಿಯನ್ನು ನೆಲಸಮ ಮಾಡಿ ಎರಡು ಹಂತದಲ್ಲಿ ಸಂಕೀರ್ಣ ಕಾಮಗಾರಿ ಕೈಗೊಳ್ಳುವ ಮಹತ್ವದ ತೀರ್ಮಾನಕ್ಕೆ ಎಲ್ಲ ಸದಸ್ಯರು ಬೆಂಬಲ ಸೂಚಿಸಿದರು.ಮೊದಲ ಹಂತದಲ್ಲಿ ವಸತಿಗೃಹಗಳನ್ನು ತೆರವುಗೊಳಿಸಿ ವಾಣಿಜ್ಯ ಸಂಕೀರ್ಣ ಮತ್ತು ಮೇಲ್ಭಾಗದಲ್ಲಿ ವಸತಿ ಗೃಹಗಳನ್ನು ನಿರ್ಮಿಸುವ ಯೋಜನೆಯನ್ನು ಕೈಗೊಳ್ಳುವಂತೆ ಸೂಚಿಸಿದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಈ ಯೋಜನೆಗೆ ಸರ್ಕಾರದಿಂದ ಅನುದಾನವನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು.ವಿಸ್ತಾರವಾಗಿ ಬೆಳೆಯುತ್ತಿರುವ ಕುಶಾಲನಗರ ಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ ಅಗತ್ಯವಾಗಿ ಬೇಕಾಗಿದೆ. ಆದ್ದರಿಂದ ಈ ಯೋಜನೆಯ ಅನುಷ್ಠಾನಕ್ಕಾಗಿ ಮಂಡಳಿಗೆ ಪಾವತಿಸಬೇಕಾದ ರೂ. 5.94 ಲಕ್ಷವನ್ನು ಪಾವತಿಸಿ ಯೋಜನೆ ಯನ್ನು ಶೀಘ್ರವಾಗಿ ಕೈಗೊಳ್ಳುವಂತೆ ಮುಖ್ಯಾಧಿಕಾರಿಗೆ ರಂಜನ್ ನಿರ್ದೇಶನ ನೀಡಿದರು.ಕುಶಾಲನಗರ ಪಟ್ಟಣಕ್ಕೆ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಮುಳ್ಳುಸೋಗೆ ಗ್ರಾಮದಲ್ಲಿ ಎರಡು ಎಕರೆ ಸರ್ಕಾರಿ ಜಾಗವನ್ನು ಒದಗಿಸಿಕೊಡುವಂತೆ ಸದಸ್ಯರು ಮಾಡಿದ ಮನವಿಗೆ ಸ್ಪಂದಿಸಿದ ಶಾಸಕ ರಂಜನ್, ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಪಟ್ಟಣದ ಹೃದಯ ಭಾಗದಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ವಿಭಜಕಗಳನ್ನು ಅಳವಡಿಸುವ ಮಾಡುವ ಮೂಲಕ ಸಂಭವಿಸಬಹುದಾದ ಅಪಘಾತಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಸದಸ್ಯ ಜೋಸೆಫ್ ವಿಕ್ಟರ್ ಸೋನ್ಸ್ ಮನವಿ ಮಾಡಿದರು.ಶಾಸಕ ರಂಜನ್ ತಮ್ಮ ಮೊಬೈಲ್ ಮೂಲಕ ಕೆಆರ್‌ಡಿಸಿಎಲ್ ಎಂಜಿನಿಯರ್ ವೆಂಕಟೇಶ್ ಅವರನ್ನು ಸಂಪರ್ಕಿ ಕೂಡಲೇ ಕುಶಾಲನಗರದ ಕೊಪ್ಪ ಗೇಟ್‌ನಿಂದ ಬೈಚನಹಳ್ಳಿಯ ತಾವರೆಕೆರೆವರೆಗೆ ರಸ್ತೆ ವಿಭಜಕ ಅಳವಡಿಸುವಂತೆ ನಿರ್ದೇಶಿಸಿದರು.ಪಟ್ಟಣ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿರುವ ಉದ್ಯಾನ ವನಕ್ಕೆ ಮೀಸಲಿರಿಸಿರುವ ಜಾಗದ ಸರಹದ್ದನ್ನು ಗುರುತಿಸಿ ಬೇಲಿ ನಿರ್ಮಿಸುವ ಮೂಲಕ ಸಂರಕ್ಷಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಎಚ್.ಕೆ.ಕರಿಯಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್, ಮುಖ್ಯಾಧಿಕಾರಿ ಪದ್ಮನಾಭ, ಎಂಜಿನಿಯರ್ ಫಯಾಜ್ ಹಾಗೂ ಸದಸ್ಯರು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.