ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ

7

ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ

Published:
Updated:

ಬೆಂಗಳೂರು: ಕೆ.ಆರ್.ಪುರ ಸಮೀಪದ ಆನಂದಪುರದಲ್ಲಿರುವ ಖಾಸಗಿ ಶಾಲೆಯ ಶಿಕ್ಷಕನೊಬ್ಬ ಐದನೇ ತರಗತಿಯ ವಿದ್ಯಾರ್ಥಿನಿ ಮೇಲೆ ಒಂದು ತಿಂಗಳಿನಿಂದ ಹಲವು ಬಾರಿ ಅತ್ಯಾಚಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಅತ್ಯಾಚಾರ ಎಸಗಿದ್ದ ಶಿಕ್ಷಕ ಕೃಷ್ಣಮೂರ್ತಿ (68) ಎಂಬಾತನನ್ನು ಬಂಧಿಸಲಾಗಿದೆ. ತಮಿಳುನಾಡು ಮೂಲದ ಆತ ನಗರದ ಮಹದೇವಪುರ ವರ್ತುಲ ರಸ್ತೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಆನಂದಪುರದ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಆತ ಗಣಿತ, ವಿಜ್ಞಾನ ಮತ್ತು ಸಂಸ್ಕೃತ ವಿಷಯಗಳನ್ನು ಬೋಧಿಸುತ್ತಿದ್ದ ಎಂದು ಕೆ.ಆರ್.ಪೊಲೀಸರು ತಿಳಿಸಿದ್ದಾರೆ.ಕೃಷ್ಣಮೂರ್ತಿ ವಿದ್ಯಾರ್ಥಿನಿಗೆ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸುವುದಾಗಿ ಬೆದರಿಸಿ ತರಗತಿಯಲ್ಲೇ ಹಲವು ಬಾರಿ ಅತ್ಯಾಚಾರ ನಡೆಸಿದ್ದಾನೆ. ಅಲ್ಲದೇ ಈ ವಿಷಯವನ್ನು ಪೋಷಕರಿಗೆ ತಿಳಿಸಿದರೆ ಕೊಲೆ ಮಾಡಿ ಶವವನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್‌ಕೇಸ್‌ನಲ್ಲಿ ತುಂಬಿ ಎಸೆಯುವುದಾಗಿಯೂ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ಇದರಿಂದ ಆತಂಕಗೊಂಡಿದ್ದ ವಿದ್ಯಾರ್ಥಿನಿ ಅತ್ಯಾಚಾರದ ವಿಷಯವನ್ನು ಪೋಷಕರಿಗೆ ತಿಳಿಸಿರಲಿಲ್ಲ. ಆದರೆ, ಆ ವಿದ್ಯಾರ್ಥಿನಿ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಅಸ್ವಸ್ಥಗೊಂಡಿದ್ದಳು. ಈ ಹಿನ್ನೆಲೆಯಲ್ಲಿ ಪೋಷಕರು ಅವಳನ್ನು ವೈದ್ಯರ ಬಳಿ ಕರೆದುಕೊಂಡು ಹೋದಾಗ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.ಆರೋಪಿ ವಿದ್ಯಾರ್ಥಿನಿಯ ಸಹಪಾಠಿಗಳನ್ನು ತರಗತಿಯಿಂದ ಹೊರಗೆ ಕಳುಹಿಸಿ ಈ ಕೃತ್ಯ ಎಸಗುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಪ್ರತಿಭಟನೆ: ಅತ್ಯಾಚಾರದ ವಿಷಯ ತಿಳಿದು ಕೋಪಗೊಂಡ ವಿದ್ಯಾರ್ಥಿನಿಯ ಪೋಷಕರು ಮತ್ತು ಸಂಬಂಧಿಕರು ಬುಧವಾರ ಬೆಳಿಗ್ಗೆ ಆ ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅಲ್ಲದೇ ಶಾಲೆಯ ಪೀಠೋಪಕರಣ ಹಾಗೂ ಕಿಟಕಿ ಗಾಜುಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು.

 

ಈ ವೇಳೆ ಪ್ರತಿಭಟನಾಕಾರರು ಮತ್ತು ಶಾಲಾ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದ ಪರಿಣಾಮ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬಂದ ಕೆ.ಆರ್.ಪುರ ಪೊಲೀಸರು ಆರೋಪಿ ಕೃಷ್ಣಮೂರ್ತಿಯನ್ನು ಬಂಧಿಸಿ ಪರಿಸ್ಥಿತಿ ನಿಯಂತ್ರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry