ಭಾನುವಾರ, ಮೇ 9, 2021
27 °C
ಉಡುಪಿಯಲ್ಲಿ ವಿದ್ಯಾರ್ಥಿಗಳಿಂದ ಬೀದಿಗಿಳಿದು ಪ್ರತಿಭಟನೆ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ನಾಗರಿಕರ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಣಿಪಾಲ ವಿಶ್ವವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ವಿರುದ್ಧ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ನಾಗರಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಯನ್ನು ಖಂಡಿಸಿ ಮತ್ತು ಅತ್ಯಾಚಾರಿಗಳನ್ನು ಬಂಧಿಸುವಂತೆ ಆಗ್ರಹಿಸಿ ಉಡುಪಿಯಲ್ಲಿ ಶನಿವಾರ ಸರಣಿ ಪ್ರತಿಭಟನೆ, ಮೆರವಣಿಗೆ ನಡೆದವು.ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಕರ್ನಾಟಕ, ಸೇಂಟ್ ಸಿಸಿಲಿಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು- ಸಿಬ್ಬಂದಿ ಸೇರಿದಂತೆ ವಿವಿಧ ಸಂಘಟನೆಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದವು. ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದಿಂದ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಾ ಗಿದೆ. ಈ ದುರ್ಘಟನೆಯಿಂದ ಮಹಿಳೆ ಯರಲ್ಲಿ ಆತಂಕ ಎದುರಾಗಿದೆ. ಮಹಿಳೆ ಯರ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ.

ಅತ್ಯಾಚಾರಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು. ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಮಾನ ಮತ್ತು ಪ್ರಾಣ ರಕ್ಷಣೆಗೆ ಸರ್ಕಾರ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳ ಬೇಕು ಎಂದು ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವ ಕುಮಾರ್ ಆಗ್ರಹಿಸಿದರು. ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಸರ್ವೀಸ್ ಬಸ್ ನಿಲ್ದಾಣದ ಎದುರು ಜಮಾಯಿಸಿ ಎಬಿವಿಪಿಗೆ ಬೆಂಬಲ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾ ಕಾರರು ಪೊಲೀಸ್ ವರಿಷ್ಠಾಧಿಕಾರಿಡಾ.ಎಂ.ಬಿ. ಬೋರಲಿಂಗಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.`ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿ ರುವ ಮಣಿಪಾಲ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಿಂದ ಇಡೀ ಜಿಲ್ಲೆಗೆ ಕೆಟ್ಟ ಹೆಸರು ಬಂದಿದೆ. ಆದ್ದರಿಂದ ಆದಷ್ಟು ಬೇಗ ಅಪರಾಧಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ದೌರ್ಜನ್ಯಕ್ಕೆ ಒಳಗಾಗಿರುವ ಯುವತಿಗೆ ನ್ಯಾಯ ಒದಗಿಸಬೇಕು' ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರು ಆಗ್ರಹಿಸಿದರು.ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಕರ್ನಾಟಕದ ಸದಸ್ಯರು ನಗರದ ಸರ್ವೀಸ್ ಬಸ್‌ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು. ಮದ್ಯಪಾನ, ಮಾದಕ ವಸ್ತುಗಳ ಸೇವನೆ ಇಂತಹ ಕೃತ್ಯಕ್ಕೆ ಪ್ರೇರೇಪಣೆ ನೀಡುತ್ತವೆ. ಆದ್ದರಿಂದ ಇವುಗಳನ್ನು ಸರ್ಕಾರ ನಿಷೇಧಿ ಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಸೇಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಶಾಲೆಯಿಂದ ತಾಲ್ಲೂಕು ಕಚೇರಿ ವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.  ಮಣಿಪಾಲದಲ್ಲಿ ಇದುವರೆಗೆ ಇಂತಹ ಅಹಿತಕರ ಘಟನೆ ನಡೆದಿಲ್ಲ. ಈ ಘಟನೆ ಮಹಿಳೆಯರು ಭಯಭೀತರಾಗುವಂತೆ ಮಾಡಿದೆ. ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಮಣಿಪಾಲ ವಿಶ್ವವಿದ್ಯಾಲಯದ ಆವರಣದಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಸದಸ್ಯರು ಡಾ.ಎಂ.ಬಿ. ಬೋರಲಿಂಗಯ್ಯ ಅವರಿಗೆ ಮನವಿ ಸಲ್ಲಿಸಿದರು. ಮಂಗಳೂರಿನಲ್ಲಿ ಪ್ರತಿಭಟನೆ: ಮಂಗಳೂರಿನಲ್ಲೂ ವಿವಿಧ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರವನ್ನು ತೀವ್ರವಾಗಿ ಖಂಡಿಸಿದರು.

ಅತ್ಯಾಚಾರಿ ವಿರುದ್ಧ ಕ್ರಮ: ಸಿಎಂ

ಬೆಂಗಳೂರು:
ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿ ಸಿದೆ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು. ಗೃಹಸಚಿವ ಕೆ.ಜೆ. ಜಾರ್ಜ್ ಭಾನು ವಾರ ವಿದ್ಯಾರ್ಥಿನಿಯನ್ನು ಭೇಟಿ ಮಾಡುವರು ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.