ಗುರುವಾರ , ಮೇ 13, 2021
17 °C
ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ನಗರದ ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಶನಿವಾರ ಪ್ರತಿಭಟನೆ ಮಾಡಿದರು.



ಶೈಕ್ಷಣಿಕ ನಗರ ಎಂದು ಹೆಸರಾಗಿರುವ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿರುವ ಈ ಘಟನೆಯಿಂದ ಇಡೀ ರಾಜ್ಯ ತಲೆ ತಗ್ಗಿಸುವಂತಾಗಿದೆ. ಸರ್ಕಾರ ಈ ಬಗ್ಗೆ ಮೃದು ಧೋರಣೆ ತಳೆಯದೆ ಶೀಘ್ರವೇ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.



ದೇಶ ವಿದೇಶದಿಂದ ವಿದ್ಯಾಭ್ಯಾಸಕ್ಕಾಗಿ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಮಣಿಪಾಲಕ್ಕೆ ಬರುತ್ತಾರೆ. ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ನೆನಪು ಮಾಸುವ ಮುನ್ನವೇ ರಾಜ್ಯದಲ್ಲಿ ಈ ರೀತಿಯ ಘಟನೆ ನಡೆದಿರುವುದರಿಂದ ವಿದ್ಯಾರ್ಥಿನಿಯರಲ್ಲಿ ಆತಂಕ ಹೆಚ್ಚಿದೆ. ಆದ್ದರಿಂದ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಪ್ರತಿಭಟನಾಕಾರರು ಹೇಳಿದರು.



ಈ ಕೃತ್ಯ ಎಸಗಿರುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರ ವಹಿಸಬೇಕು. ಮಹಿಳೆಯರ ರಕ್ಷಣೆಗೆ ಸೂಕ್ತ ಕಾನೂನು ರೂಪಿಸಿ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.



ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಪುಷ್ಪಾಂಜಲಿ, ಪ್ರಶಾಂತ್, ನಗರ ಘಟಕದ ಕಾರ್ಯದರ್ಶಿ ರಘು ಪೂಜಾರ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.