ಗುರುವಾರ , ಜೂಲೈ 9, 2020
28 °C

ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಕೃತಿ ದಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಕೃತಿ ದಹನ

ದಾವಣಗೆರೆ: ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕೃತಿ ದಹಿಸಿದರು. ನಂತರ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ವಿದ್ಯುತ್ ಅಭಾವ ಉಂಟಾಗಿ ಕೃಷಿ ಚಟುವಟಿಕೆಗೆ ತೀವ್ರ ಅಡ್ಡಿಯಾಗಿದೆ. ಪರೀಕ್ಷಾ ಸಮಯವಾದ ಕಾರಣ ವಿದ್ಯಾರ್ಥಿಗಳ ಓದಿಗೆ ತೊಡಕಾಗಿದೆ. ಸಣ್ಣ ಕೈಗಾರಿಕಾ ಕೇಂದ್ರಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ದೆಹಲಿಯಿಂದ ಬೆಂಗಳೂರಿಗೆ, ಬೆಂಗಳೂರಿನಿಂದ ದೆಹಲಿಗೆ ಸಂಚರಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಟೀಕಿಸಿದರು. ಕೊಪ್ಪಳದಲ್ಲಿ ಉದ್ಯೋಗ ಖಾತ್ರಿ ಹಣ ನೀಡುವಂತೆ ಒತ್ತಾಯಿಸುತ್ತಿದ್ದ ಕಾರ್ಮಿಕರು ಹಾಗೂ ರೈತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ.  ಪೊಲೀಸರು ಹೋರಾಟವನ್ನು ಹತ್ತಿಕ್ಕುವ ಯತ್ನ ನಡೆಸಿದ್ದಾರೆ. ಕಾರ್ಮಿಕರು ಹಾಗೂ ರೈತರ ಮೇಲೆ ಹಲ್ಲೆ ನಡೆಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.ಜಯದೇವ ವೃತ್ತದಿಂದ ಪ್ರತಿಭಟನಾ ಜಾಥಾ ಹೊರಟು ಗಾಂಧಿ ವೃತ್ತದ ಬಳಿ ಇಂಧನ ಸಚಿವರ ಪ್ರತಿಕೃತಿ ದಹಿಸಲಾಯಿತು. ನಂತರ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಯಿತು.ವೇದಿಕೆ ಜಿಲ್ಲಾ ಅಧ್ಯಕ್ಷ ಎಂ.ಎಸ್. ರಾಮೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಮಂಜುನಾಥ್, ಈಶ್ವರ್, ಟಿ. ಪರಶುರಾಮಪ್ಪ, ಶಂಕರಾನಂದ, ವೆಂಕಟೇಶ್, ವೀರೇಶ್, ಸಚಿನ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.