ಶನಿವಾರ, ಮೇ 15, 2021
24 °C

ವಿಪತ್ತು ನಿರ್ವಹಣೆಗೆ ಸಮಿತಿ ರಚಿಸಿ: ಸಿ.ಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿ, ತುರ್ತು ಸಂದರ್ಭಗಳಲ್ಲಿ ನಗರದ ಜನತೆಯ ಕಷ್ಟಗಳಿಗೆ ಸ್ಪಂದಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನಿಡಿದರು.ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಬದಲು, ಬೆಂಗಳೂರಿಗೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಅವರು ಹೇಳಿದರು.ಶುಕ್ರವಾರ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಮೇಯರ್ ಡಿ. ವೆಂಕಟೇಶಮೂರ್ತಿ, ಬಿಬಿಎಂಪಿ ಆಯುಕ್ತ ಎಂ. ಲಕ್ಷ್ಮೀನಾರಾಯಣ ಅವರ ಜೊತೆ ಗೃಹ ಕಚೇರಿ `ಕೃಷ್ಣಾ'ದಲ್ಲಿ ಸಿದ್ದರಾಮಯ್ಯ ಅವರು ಶನಿವಾರ ಮಾತುಕತೆ ನಡೆಸಿದರು.ಮಳೆ ಸುರಿದ ಸಮಯದಲ್ಲಿ ಮಾತ್ರ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳುವುದು ಸರಿಯಲ್ಲ. ನಗರದ ಕೆರೆಗಳಲ್ಲಿ ತುಂಬಿಕೊಂಡಿರುವ ಹೂಳು ತೆಗೆಯುವುದು, ಚರಂಡಿಗಳನ್ನು ಶುಚಿಗೊಳಿಸುವುದು, ತ್ಯಾಜ್ಯ ವಿಲೇವಾರಿ ಕಾರ್ಯಗಳನ್ನು ಕಾಲಕಾಲಕ್ಕೆ ಮಾಡಬೇಕು. ಈ ಸಂದರ್ಭದಲ್ಲಿ ತುರ್ತಾಗಿ ಆಗಬೇಕಿರುವ ಕೆಲಸಗಳನ್ನು ಪೂರ್ಣಗೊಳಿಸಬೇಕು. ಮುಂದಿನ ಮಳೆಗಾಲದಲ್ಲಿ ಇಂಥ ಸಮಸ್ಯೆಗಳು ಎದುರಾಗದಂತೆ ನಿಗಾವಹಿಸಬೇಕು ಎಂದೂ ಸಿದ್ದರಾಮಯ್ಯ ಆದೇಶಿಸಿದರು. ಬಿಬಿಎಂಪಿ ಸಹಾಯವಾಣಿಯ ಸೇವೆಗಳನ್ನು ಇನ್ನಷ್ಟು ಉತ್ತಮಪಡಿಸಬೇಕು ಎಂದು ತಾಕೀತು ಮಾಡಿದರು.`ಎಲ್ಲ ಜಿಲ್ಲೆಗಳಂತೆ ಬೆಂಗಳೂರು ನಗರದಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಇದರ ವ್ಯಾಪ್ತಿಯಲ್ಲಿ ಬಿಬಿಎಂಪಿ ಕೂಡ ಸೇರುತ್ತದೆ. ಆದರೆ, ಬಿಬಿಎಂಪಿ ಆಯುಕ್ತರು ಹಿರಿಯ ಐಎಎಸ್ ಅಧಿಕಾ ರಿಯಾದ ಕಾರಣ ಜಿಲ್ಲಾಧಿಕಾರಿ ಕರೆಯುವ ಸಭೆ ಹೆಚ್ಚು ಮಹತ್ವ ಪಡೆಯುತ್ತಿಲ್ಲ. ಹೀಗಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗು ತ್ತಿಲ್ಲ' ಎಂಬ ಅಂಶವನ್ನು ಗೃಹ ಸಚಿವ ಜಾರ್ಜ್ ಅವರು ಮುಖ್ಯಮಂತ್ರಿ ಗಮನಕ್ಕೆ ತಂದರು.ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ರಾಮಲಿಂಗಾರೆಡ್ಡಿ, `ಗುತ್ತಿಗೆದಾರರ ಮೇಲೆ ಅವಲಂಬಿಸದೆ, ತ್ಯಾಜ್ಯ ವಿಲೇವಾರಿ ಕಾರ್ಯಗಳಿಗೆ ಒಟ್ಟು 4,000 ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದಕ್ಕೆ ಹಣಕಾಸು ಇಲಾಖೆಯ ಒಪ್ಪಿಗೆ ದೊರೆತಿದೆ. ನೇಮಕ ಪ್ರಕ್ರಿಯೆ ಮೂರು ತಿಂಗಳಲ್ಲಿ ಆರಂಭವಾಗಲಿದೆ' ಎಂದು ತಿಳಿಸಿದರು.ಅಂದಾಜು 600 ಕೋಟಿ ರೂಪಾಯಿ ವೆಚ್ಚದಲ್ಲಿ ಮೂಲಸೌಕರ್ಯ ಕಾಮಗಾರಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಸಂಚಾರ ದಟ್ಟಣೆ ತಗ್ಗಿಸುವ ಯೋಜನೆಗಳು ಮತ್ತು ಪಾದಚಾರಿ ಮಾರ್ಗ ಅಭಿವೃದ್ಧಿಪಡಿಸುವ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ರೆಡ್ಡಿ ತಿಳಿಸಿದರು.ನಗರದ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿಯನ್ನು ಬೇರೆ ಬೇರೆ ಇಲಾಖೆಗಳಿಗೆ ವಹಿಸಲಾಗಿದೆ. ಒಣಗಿದ ಮರಗಳನ್ನು ಕಡಿದು, ತೆರವುಗೊಳಿಸುವ ಕಾರ್ಯವನ್ನು ಅರಣ್ಯ ಇಲಾಖೆಗೆ, ವಿದ್ಯುತ್ ಕಂಬಗಳು ಸುಸ್ಥಿತಿಯಲ್ಲಿವೆಯೇ ಎಂಬುದನ್ನು ಬೆಸ್ಕಾಂ ಅಧಿಕಾರಿಗಳು ನಿಗಾ ವಹಿಸಬೇಕು, ನಿರ್ಮಾಣ ಮಾಡಿರುವ ಬಡಾವಣೆಗಳಲ್ಲಿ ಮಳೆ ನೀರು ಚರಂಡಿ ವ್ಯವಸ್ಥೆ ಸರಿ ಇದೆಯೇ ಎಂಬುದನ್ನು ಬಿಡಿಎ ಗಮನಿಸಬೇಕು ಎಂಬ ನಿರ್ದೇಶನ ನೀಡಲಾಗಿದೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.