ವಿವಿಧ ಬೇಡಿಕೆ ಈಡೇರಿಕೆಗೆ ಡಿಎಸ್‌ಎಸ್ ಆಗ್ರಹ

7

ವಿವಿಧ ಬೇಡಿಕೆ ಈಡೇರಿಕೆಗೆ ಡಿಎಸ್‌ಎಸ್ ಆಗ್ರಹ

Published:
Updated:

ಶಿವಮೊಗ್ಗ: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸರ್ಕಾರ ದಲಿತರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ನಗರದ ಅಂಬೇಡ್ಕರ್ ಭವನದಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ಯಲ್ಲಿ ತೆರಳಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಈ ಸಂಬಂಧ ಮನವಿ ಸಲ್ಲಿಸಿದರು.ಜಿಲ್ಲಾ ಕೇಂದ್ರದಲ್ಲಿ ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಕೂಡಲೇ ಪ್ರತಿಷ್ಠಾಪಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು, ಪ್ರತಿಮೆ ಸ್ಥಾಪನೆ ಕುರಿತಂತೆ ಹಲವು ವರ್ಷಗಳಿಂದ ಮನವಿ ಸಲ್ಲಿಸಿದರೂ ಜಿಲ್ಲಾಡಳಿತ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ, ಭದ್ರಾವತಿ ತಾಲ್ಲೂಕು ಪ್ರೊ.ಬಿ. ಕೃಷ್ಣಪ್ಪ ವೃತ್ತದಲ್ಲಿ ಕೃಷ್ಣಪ್ಪ ಅವರ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸ ಬೇಕು ಎಂದು ಒತ್ತಾಯಿಸಿದರು.ಅಲ್ಲದೇ, ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ದೌರ್ಜನ್ಯ ತಡೆ ಸಮಿತಿಯನ್ನು ಪುನರ್ ರಚಿಸಬೇಕು. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳಲ್ಲಿ ಕಾರ್ಯ ನಿರ್ವಹಿಸುವ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.ಜಿಲ್ಲೆಯಾದ್ಯಂತ ನಡೆಸುತ್ತಿರುವ ಕಲ್ಲುಗಾರಿಕೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಕರ್ನಾಟಕ ಗಣಿಗಾರಿಕಾ ಅಧಿಸೂಚನೆ ಕಾಯ್ದೆಯಡಿ ಗಣಿಗಾರಿಕೆ ನಡೆಸಲು ದಲಿತರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಡಿಎಸ್‌ಎಸ್‌ನ ರಾಜ್ಯ ಸಂಚಾಲಕರಾದ ಸತ್ಯ ಭದ್ರಾವತಿ, ಹೆಣ್ಣೂರು ಶ್ರೀನಿವಾಸ, ಜಿಲ್ಲಾ ಸಂಚಾಲಕ ಚಿನ್ನಯ್ಯ ಮತ್ತಿತರರು ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry