ಮಂಗಳವಾರ, ಜುಲೈ 27, 2021
20 °C

ವೈದ್ಯರ ಕೊರತೆ ನೀಗಿಸಲು ಹೊಸ ನಿಯಮ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ವೈದ್ಯರ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ನಿಯಮ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ನಿವಾರಿಸುವಲ್ಲಿ ಸಹಕಾರಿಯಾಗಿದೆ’ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.ನಗರದ ಕನಕಪುರ ಮುಖ್ಯರಸ್ತೆಯ ಗಣಪತಿಪುರದಲ್ಲಿ ನೂತನವಾಗಿ ನಿರ್ಮಿಸಿರುವ ಸಾಯಿರಾಮ ಆಸ್ಪತ್ರೆಯನ್ನು ಸೋಮವಾರ ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.‘ಕೇಂದ್ರದ ಈ ನಿಯಮಾವಳಿಯಂತೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರನ್ನು ನೇಮಕ ಮಾಡಬೇಕು. ಹಾಗಾಗಿ ಪರಿಣತ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುವುದು. ಅಧಿಕ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೂ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಸರ್ಕಾರಿ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಉಂಟಾಗದಂತೆ ಎಚ್ಚರ ವಹಿಸಲಾಗುವುದು. ವೈದ್ಯರ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.‘ಬೆಂಗಳೂರು ‘ಹೆಲ್ತ್ ಸಿಟಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವ ಕಾರಣದಿಂದ ದೇಶ- ವಿದೇಶಗಳಿಂದ ಜನರು ಚಿಕಿತ್ಸೆ ಪಡೆಯಲು ಇಲ್ಲಿಗೆ ಬರುತ್ತಿದ್ದಾರೆ. ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಸಾಯಿರಾಮ ಆಸ್ಪತ್ರೆಯು ಉಚಿತ ಡಯಾಲಿಸಿಸ್ ಕೇಂದ್ರ ಸ್ಥಾಪಿಸಿರುವುದು ಉತ್ತಮವಾಗಿದೆ’ ಎಂದು ಶ್ಲಾಘಿಸಿದರು.ಜಯದೇವ ಹೃದ್ರೋಗ ಚಿಕಿತ್ಸಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಮಾತನಾಡಿ, ‘ಭಾರತೀಯ ವೈದ್ಯಕೀಯ ಮಂಡಳಿ ನಿಯಮದ ಪ್ರಕಾರ ಐದು ಸಾವಿರ ಜನಸಂಖ್ಯೆಯುಳ್ಳ ಪ್ರದೇಶದಲ್ಲಿ ಒಂದು ಆಸ್ಪತ್ರೆ ಇರಬೇಕು. ಆ ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳು ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲು ಆಸ್ಪತ್ರೆಗಳ ನಿರ್ಮಾಣಕ್ಕೆ ಆಸಕ್ತಿ ವಹಿಸಿರುವುದು ಉತ್ತಮ ಬೆಳವಣಿಗೆ’ ಎಂದರು.‘ಸಾಯಿರಾಮ ಆಸ್ಪತ್ರೆಯು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಈ ಭಾಗದ ಜನರಿಗೆ ಉತ್ತಮ ವೈದ್ಯಕೀಯ ಸೇವೆ ನೀಡಲಿದೆ. ಜನರು ಸಹ ಇದರ ಸದುಪಯೋಗ ಪಡೆಯಬಹುದು. ಅಪಘಾತದಿಂದ ತಲೆಗೆ ತೀವ್ರ ಪೆಟ್ಟು ಬಿದ್ದ ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗೆ ಎರಡು ಗಂಟೆಯ ಒಳಗೆ ತುರ್ತು ಚಿಕಿತ್ಸೆ ನೀಡಬೇಕು.

ಅಂತಹ ಸಂದರ್ಭದಲ್ಲಿ ಗಾಯಗೊಂಡವರನ್ನು ದೂರದ ಆಸ್ಪತ್ರೆಗಳಿಗೆ ಕರೆದೊಯ್ಯುವುದು ಕಷ್ಟಕರ. ಪ್ರತಿಯೊಂದು ಪ್ರದೇಶಗಳಲ್ಲಿ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆಗಳಿದ್ದರೆ ಗಾಯಗೊಂಡವರಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ’ ಎಂದು ತಿಳಿಸಿದರು.‘ಚಾಲುಕ್ಯ ಗೆಳೆಯರ ಬಳಗವು ಬಡ ಜನತೆಗೆ ನೆರವಾಗುವ ಉದ್ದೇಶದಿಂದ ಉಚಿತ ಡಯಾಲಿಸಿಸ್ ಕೇಂದ್ರವನ್ನು  ಸ್ಥಾಪಿಸಿದೆ. ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಬಡವರು ಉಚಿತವಾಗಿ ಡಯಾಲಿಸಿಸ್ ಸೇವೆ ಪಡೆಯಬಹುದು’ ಎಂದು ಹೇಳಿದರು. ಆಸ್ಪತ್ರೆಯ ಮುಖ್ಯ ನಿರ್ದೇಶಕ ಡಾ. ವಿವೇಕಾನಂದ ಶೆಟ್ಟಿ, ನಿರ್ದೇಶಕರಾದ ಅರವಿಂದ್ ಶೆಟ್ಟಿ, ರವಿರಾಜ್ ರಾವ್, ಶಾಂತರಾಜ್ ಶೆಟ್ಟಿ, ಪ್ರದೀಪ್ ಶೆಟ್ಟಿ ಇತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.