ವೈದ್ಯರ ನೇಮಕ: ಸರ್ಕಾರ ಅಸಹಾಯಕ!

7

ವೈದ್ಯರ ನೇಮಕ: ಸರ್ಕಾರ ಅಸಹಾಯಕ!

Published:
Updated:

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯದ 18 ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ತೀವ್ರವಾಗಿದೆ. ಆಸ್ಪತ್ರೆಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ರೂಪಿಸಿರುವ ನಿಯಮಗಳನ್ನು (ಐಪಿಎಚ್‌ಎಸ್) ಅನುಷ್ಠಾನಕ್ಕೆ ತರಲು ಪ್ರತಿ ಆಸ್ಪತ್ರೆಗೆ ಹೆಚ್ಚುವರಿಯಾಗಿ 250 (ಒಟ್ಟು 4,500) ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿ ಬೇಕು.ಆದರೆ ಈ ಹುದ್ದೆಗಳನ್ನು ಭರ್ತಿ ಮಾಡಲು ತನ್ನಿಂದ ಆಗುತ್ತಿಲ್ಲ ಎಂದು ಸರ್ಕಾರ ಅಸಹಾಯಕತೆ ವ್ಯಕ್ತಪಡಿಸಿದೆ!

ರಾಜ್ಯದಲ್ಲಿ ಒಟ್ಟು 30 ಜಿಲ್ಲಾ ಆಸ್ಪತ್ರೆಗಳಿವೆ. ಇವುಗಳ ಪೈಕಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ 18 ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿ 12 ಜಿಲ್ಲಾ ಆಸ್ಪತ್ರೆಗಳಿವೆ. `ನಮ್ಮ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ನಾವು ಬದ್ಧರಾಗಿದ್ದೇವೆ. ಆದರೆ ಅದಕ್ಕೆ ಅಗತ್ಯ ಸಿಬ್ಬಂದಿ ನೇಮಕ ಮಾಡಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ.ಅದರಲ್ಲೂ, ವೈದ್ಯರು ಹಾಗೂ ತಜ್ಞ ವೈದ್ಯರನ್ನು ನೇಮಕ ಮಾಡಲು ಆಗುತ್ತಿಲ್ಲ. ಹೆಚ್ಚಿನ ವೇತನ ನೀಡುತ್ತಿದ್ದರೂ, ವೈದ್ಯರು ಮತ್ತು ತಜ್ಞ ವೈದ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ಮುಂದೆ ಬರುತ್ತಿಲ್ಲ' ಎಂದು ಇಲಾಖೆ ಹೈಕೋರ್ಟ್‌ಗೆ ತಿಳಿಸಿದೆ.ಗುಲ್ಬರ್ಗದ ಶರಣ ದೇಸಾಯಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮದನ್ ಗೋಪಾಲ್ ಅವರು ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠಕ್ಕೆ ಈ ಬಗ್ಗೆ ಹೇಳಿಕೆ ಸಲ್ಲಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry