ವೈದ್ಯರ ನೇರ ನೇಮಕಾತಿ ಆರಂಭ

7

ವೈದ್ಯರ ನೇರ ನೇಮಕಾತಿ ಆರಂಭ

Published:
Updated:

ಧಾರವಾಡ: “ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಿಗೆ ತಜ್ಞ ವೈದ್ಯರ ನೇಮಕಕ್ಕೆ ಕ್ರಮ ಕೈಕೊಳ್ಳಲಾಗಿದೆ. 700 ಜನ ತಜ್ಞ ವೈದ್ಯರನ್ನು ನೇರ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆದಿದೆ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು. ಬುಧವಾರ ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಆರಂಭಿಸಲಾಗುವುದು. ಹಂತ ಹಂತವಾಗಿ ಈ ಕಾರ್ಯಕ್ರಮ ನಡೆಯಲಿದೆ. ಯಾವುದೇ ಹಣಕಾಸಿನ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು.ಇಲ್ಲಿನ ಜಿಲ್ಲಾ ಆಸ್ಪತ್ರೆಯ ಎಲ್ಲ ಮೂಲಸೌಕರ್ಯ ಒದಗಿಸಲಾಗುವುದು. ಹಣಕಾಸು ಇಲಾಖೆಯಿಂದ ವಿಶೇಷ ಅನುದಾನ ಪಡೆಯಲು ಪ್ರಯತ್ನಿಸಲಾಗುವುದು. ತಜ್ಞ ವೈದ್ಯರು ಹಾಗೂ ಪ್ಯಾರಾ ಮೆಡಿಕಲ್ ಸಿಬ್ಬಂದಿ ಕೊರತೆಯನ್ನು ನೀಗಿಸಲು ಕ್ರಮ ಕೈಕೊಳ್ಳಲಾಗುವುದು. ಈ ಆಸ್ಪತ್ರೆಯಿಂದ ಪ್ರಸ್ತಾವ ಬಂದ ಹಿನ್ನೆಲೆಯಲ್ಲಿ ಅಭಿವೃದ್ಧಿಗೆ ಈಗಾಗಲೇ 30 ಲಕ್ಷ ರೂ. ನೀಡಲಾಗಿದೆ. ಬಾಕಿ ಇರುವ 80 ಲಕ್ಷ ರೂ. ಶೀಘ್ರದಲ್ಲಿಯೇ ನೀಡಲಾಗುವುದು ಎಂದರು.ಧಾರವಾಡ ಆಸ್ಪತ್ರೆಯಲ್ಲಿನ ವ್ಯವಸ್ಥೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಸಚಿವರು, ಇಲ್ಲಿನ ವೈದ್ಯರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಹೇಳಿದರು. ಇದಕ್ಕೂ ಮುನ್ನ ಆಸ್ಪತ್ರೆಯ ಸಾಮಾನ್ಯ ವಾರ್ಡ, ರಕ್ತಭಂಡಾರ, ಪ್ರಯೋಗಾಲಯ, ಡಯಾಲಿಸಿಸ್ ಘಟಕ, ತುರ್ತು ಚಿಕಿತ್ಸಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಶಾಸಕ ಚಂದ್ರಕಾಂತ ಬೆಲ್ಲದ, ಸೀಮಾ ಮಸೂತಿ, ಡಾ. ಗೀತಾ ನ್ಯಾಮಗೌಡರ, ಡಾ. ಅಚ್ಯುತ್, ಈರಣ್ಣ ಹಪ್ಪಳಿ, ರವೀಂದ್ರ ದೇಸಾಯಿ, ಮೋಹನ ರಾಮದುರ್ಗ, ಸುನೀಲ ಮೋರೆ, ಪ್ರೇಮಾ ಕೊಮಾರದೇಸಾಯಿ ಮತ್ತಿತರರು ಈ ಸಂದರ್ಭದಲ್ಲಿದ್ದರು. ಬಿಜೆಪಿ ಮುಖಂಡ ಮಾರುತಿ ನಾಯ್ಕ ಆಸ್ಪತ್ರೆಯ ಅಭಿವೃದ್ಧಿ ಕುರಿತು ಸಚಿವರಿಗೆ ಮನವಿ ಸಲ್ಲಿಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry