ಮಂಗಳವಾರ, ಮೇ 24, 2022
25 °C

ವ್ಯಾಪಕ ಭ್ರಷ್ಟಾಚಾರದ ವಿರುದ್ಧ ಜನರಿಗೆ ಬೇಸರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ಬರಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನೈಋತ್ಯ ಕ್ಷೇತ್ರದ ಪದವೀಧರರ ಹಾಗೂ ಶಿಕ್ಷಕರ ವಿಭಾಗಕ್ಕೆ ಜೆಡಿಎಸ್ ವತಿಯಿಂದ ಸ್ಪರ್ಧಿಸಿರುವ ಭೋಜೇಗೌಡ ಹಾಗೂ ಪಂಚಾಕ್ಷರಿ ಅವರು ಗೆಲುವು ಸಾಧಿಸುವುದು ಖಚಿತ ಎಂಬ ವಿಶ್ವಾಸವನ್ನು ಜೆಡಿಎಸ್‌ನ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ವ್ಯಕ್ತಪಡಿಸಿದರು.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ನಡೆಸಿರುವ ವ್ಯಾಪಕ ಭ್ರಷ್ಟಾಚಾರವನ್ನು ನೋಡಿ ಜನರು ರೋಸಿ ಹೋಗಿದ್ದಾರೆ. ಮತ್ತೊಂದೆಡೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಕೂಡ ಹಲವು ಭ್ರಷ್ಟಾಚಾರ, ಹಗರಣಗಳಲ್ಲಿ ಭಾಗಿಯಾಗಿದ್ದು, ರಾಜ್ಯದ ಕಾಂಗ್ರೆಸ್ ಮುಖಂಡರು ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದರು.ಪದವೀಧರರ ವಿಭಾಗದ ನೈಋತ್ಯ ಕ್ಷೇತ್ರದಿಂದ ಹಲವು ಬಾರಿ ಆಯ್ಕೆಯಾಗಿರುವ ಬಿಜೆಪಿಯ ಡಿ.ಎಚ್. ಶಂಕರಮೂರ್ತಿ ಅವರು ಮತದಾರರ ಯಾವುದೇ ಭಾವನೆಗಳಿಗೆ ಸ್ಪಂದಿಸಿಲ್ಲ ಎಂಬುದು ಮತದಾರರನ್ನು ಸಂಪರ್ಕಿಸಿದ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ. ಶಿಕ್ಷಕರ ವಿಭಾಗದ ನೈಋತ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಣೇಶ್ ಕಾರ್ಣಿಕ್ ಅವರ ಸಾಧನೆ ಕೂಡ ಈ ಮಾತಿಗೆ ಹೊರತಾಗಿಲ್ಲ ಎಂದು ಹೇಳಿದರು.ರಾಜ್ಯದಲ್ಲಿ ಯುವಜನರಿಗೆ ಹಾಗೂ ರೈತರಿಗೆ ಹೆಚ್ಚಿನ ನೆರವು ನೀಡಿರುವ ಸರ್ಕಾರವೆಂದರೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದ ಜೆಡಿಎಸ್ ಸರ್ಕಾರ ಮಾತ್ರ. ಬಿಜೆಪಿ ಹಾಗೂ ಕಾಂಗ್ರೆಸ್ ರಾಜ್ಯದ ಜನತೆಗೆ ಹಲವು ಸುಳ್ಳು ಭರವಸೆಗಳನ್ನು ನೀಡುತ್ತ ವಂಚಿಸುತ್ತ ಬಂದಿವೆ. ಹೀಗಾಗಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ಜೆಡಿಎಸ್‌ನ್ನು ಬೆಂಬಲಿಸುವುದು ಖಚಿತ ಎಂದರು.ಕೇಂದ್ರ ಸರ್ಕಾರ ಅಡಿಕೆ ಆಮದಿನ ಮೇಲೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿರುವುದರಿಂದ ಅಡಿಕೆ ಬೆಲೆಯಲ್ಲಿ ಕುಸಿತ ಕಾಣುತ್ತಿದೆ. ಕೇಂದ್ರ ಸರ್ಕಾರಕ್ಕೆ ಅಡಿಕೆ ಬೆಳೆಗಾರರ ಹಿತದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ಕೂಡಲೇ ಅಡಿಕೆ ಆಮದಿನ ಮೇಲೆ ತೆಗೆದಿರುವ ನಿರ್ಬಂಧವನ್ನು ಮತ್ತೆ ಜಾರಿಗೊಳಿಸಬೇಕು. ಇಲ್ಲದಿದ್ದಲ್ಲಿ ಜೆಡಿಎಸ್ ರಾಜ್ಯಾದ್ಯಂತ ವ್ಯಾಪಕ ಹೋರಾಟ ನಡೆಸಲಿದೆ ಎಂದು ಹೇಳಿದರು.ಜೆಡಿಎಸ್‌ನ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜಗೌಡ ಬೈದೂರು, ಉಪಾಧ್ಯಕ್ಷ ಶಿವಲಿಂಗಪ್ಪಗೌಡ, ಪಾರ್ಶ್ವನಾಥ ಗೌಡ, ಪ್ರಧಾನ ಕಾರ್ಯದರ್ಶಿ ಟಿ. ಕನ್ನಪ್ಪ ಬೆಳಲಮಕ್ಕಿ, ಶಿವಾನಂದ ಕುಗ್ವೆ, ಪಡವಗೋಡು ಹುಚ್ಚಪ್ಪ, ಎಸ್.ಎಲ್. ಮಂಜುನಾಥ್, ಎಂ.ಎಂ. ಕೊಟ್ರಪ್ಪ, ಸಾದಿಕ್  ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.