ಗುರುವಾರ , ಏಪ್ರಿಲ್ 22, 2021
27 °C

ಶಾಲೆ ವೇಳೆ ಮೊಬೈಲ್ ಬಳಸದಿರಿ: ಶಿಕ್ಷಕರಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: `ರಾಜ್ಯದಾದ್ಯಂತ ಶಾಲೆ ಅವಧಿಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಮೊಬೈಲ್ ಬಳಕೆ ಮಾಡಬಾರದು ಎಂದು ಸೂಚಿಸಲಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದು ನಿರ್ದೇಶಿಸಲಾಗಿದೆ~ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ಇಲ್ಲಿ ಹೇಳಿದರು.ತಾಲ್ಲೂಕಿನ ತೆರಕನಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ಶಾಲೆ ಅವಧಿಯಲ್ಲಿ ಶಿಕ್ಷಕರು ಮೊಬೈಲ್ ಬಳಕೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಕೊಳ್ಳಲಾಗುವುದು ಎಂದರು.

ಟಿವಿ ನಿಷೇಧಿಸಿ
ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗದಂತೆ ಪಾಲಕರು ಸಂಜೆ 6 ರಿಂದ 9ರ ತನಕ ಮನೆಗಳಲ್ಲಿ ಟಿವಿ ವೀಕ್ಷಣೆಯನ್ನು ನಿಷೇಧಿಸುವ ಸ್ವಯಂ ನಿರ್ಣಯ ಕೈಕೊಳ್ಳಬೇಕು. ಅನೇಕ ಕಡೆಗಳಲ್ಲಿ ಪಾಲಕರ ಸಮೂಹ ಒಂದಾಗಿ ಯೋಚಿಸಿ ಇಂತಹ ನಿರ್ಣಯ ತೆಗೆದುಕೊಂಡಿದ್ದಾರೆ. ಪ್ರತಿ ಮನೆಯಲ್ಲೂ ಇಂಥ ನಿರ್ಣಯ ಸ್ವೀಕಾರವಾಗಬೇಕು ಎಂದು ಶಿಕ್ಷಣ ಸಚಿವರು ಹೇಳಿದರು.

 ರಾಜ್ಯದಲ್ಲಿ ಸುಮಾರು ಮೂರು ಲಕ್ಷ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಮುಖ್ಯ ಶಿಕ್ಷಕರನ್ನು ಹೊರತುಪಡಿಸಿ ಉಳಿದವರೆಲ್ಲರಿಗೂ ಈ ನಿಯಮ ಅನ್ವಯಿಸುತ್ತದೆ. ಅನಿವಾರ್ಯ ಕರೆಗಳನ್ನು ಸ್ವೀಕರಿಸುವ ಸಲುವಾಗಿ ಮುಖ್ಯ ಶಿಕ್ಷಕರು ಮಾತ್ರ ಮೊಬೈಲ್ ಅನ್ನು ಸೈಲೆಂಟ್ ಮೋಡ್‌ನಲ್ಲಿ ಇಟ್ಟುಕೊಳ್ಳಬಹುದು ಎಂದರು.ಶಾಲೆ ಅವಧಿಯಲ್ಲಿ ಶಿಕ್ಷಕರ ಮೊಬೈಲ್ ಆನ್ ಆಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಕರೆ ಮಾಡುವುದು ಮತ್ತು ದಿಢೀರ್ ಭೇಟಿ ನೀಡಿ ಪರೀಕ್ಷಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ, ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರಿಗೆ ಸೂಚಿಸಲಾಗಿದೆ. ಶಾಲೆ ಅವಧಿಯಲ್ಲಿ ಶಿಕ್ಷಕರು ಶೈಕ್ಷಣಿಕ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳಬೇಕು. ಈ ಕಾರ್ಯಕ್ಕೆ  ಮೊಬೈಲ್ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಈ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.