ಸೋಮವಾರ, ಜೂನ್ 14, 2021
26 °C

ಶಾಸಕ ಸಿ.ಟಿ. ರವಿ ವಿರುದ್ಧದ ಪ್ರಕರಣ: ದೂರುದಾರರ ರಕ್ಷಣೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ವಿರುದ್ಧ ಖಾಸಗಿ ದೂರು ಸಲ್ಲಿಸಿರುವ ನಗರಸಭಾ ಸದಸ್ಯ ಆರ್.ದೇವಿಪ್ರಸಾದ್ ಮತ್ತು ಅವರ ಆಪ್ತರಿಗೆ ಆರೋಪಿಗಳ ಕಡೆಯಿಂದ ಕಿರುಕುಳ ಉಂಟಾಗದಂತೆ ಎಚ್ಚರಿಕೆ ವಹಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಸೋಮವಾರ ಸೂಚನೆ ನೀಡಿದೆ.`ದೂರನ್ನು ಹಿಂದಕ್ಕೆ ಪಡೆಯುವಂತೆ ರವಿ ಅವರು ಕಿರುಕುಳ ನೀಡುತ್ತಿದ್ದಾರೆ. ದೂರಿಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸುತ್ತಿದ್ದ ಕುಮಾರ್ ಎಂಬುವರ ಮನೆಯನ್ನು ನಗರಸಭೆ ಮೂಲಕ ನೆಲಸಮ ಮಾಡಲು ಪ್ರಯತ್ನಿಸುತ್ತಿದ್ದಾರೆ~ ಎಂದು ದೇವಿಪ್ರಸಾದ್ ಹಿಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದರು. ಪ್ರಕರಣದ ತನಿಖೆಯನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದ್ದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು, ತನಿಖೆಯ ಪ್ರಗತಿ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದ್ದರು.ಸೋಮವಾರ ನ್ಯಾಯಾಲಯಕ್ಕೆ ಹಾಜರಾದ ಬೆಂಗಳೂರು ನಗರ ಲೋಕಾಯುಕ್ತ ಡಿವೈಎಸ್‌ಪಿ ಅಬ್ದುಲ್ ಅಹದ್ ತನಿಖೆಯ ಪ್ರಗತಿ ಕುರಿತು ವರದಿ ಸಲ್ಲಿಸಿದರು. ಈ ಮಧ್ಯೆ ಮತ್ತೊಂದು ಪ್ರಮಾಣಪತ್ರ ಸಲ್ಲಿಸಿದ  ದೇವಿಪ್ರಸಾದ್, `ಆರೋಪಿಗಳು ಕಿರುಕುಳ ನೀಡುತ್ತಿರುವ ಬಗ್ಗೆ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ ಬಳಿಕವೂ ಬೆದರಿಕೆ ಒಡ್ಡುತ್ತಿದ್ದಾರೆ. ಮನೆ ನೆಲಸಮ ಮಾಡುವುದಾಗಿ ಮತ್ತೆ ನೋಟಿಸ್ ನೀಡಿದ್ದಾರೆ~ ಎಂದು ತಿಳಿಸಿದರು.ದೂರುದಾರರ ಪ್ರಮಾಣಪತ್ರವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದರು. ನಗರಸಭೆ ಅಥವಾ ಇತರೆ ಸಂಸ್ಥೆಗಳನ್ನು ಬಳಸಿಕೊಂಡು ಆರೋಪಿಗಳು, ದೂರುದಾರರಿಗೆ ಕಿರುಕುಳ ನೀಡದಂತೆ ಕ್ರಮ ಕೈಗೊಳ್ಳುವಂತೆಯೂ ನಿರ್ದೇಶನ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.