ಶುಕ್ರವಾರ, ಜನವರಿ 17, 2020
21 °C
ಮೂಲಸೌಕರ್ಯಗಳ ಕೊರತೆ ಆರೋಪ n ಕೊಠಡಿಗೆ ಬೀಗ

ಶಿಕ್ಷಕರನ್ನೇ ಕೂಡಿಹಾಕಿದ ವಿದ್ಯಾರ್ಥಿಗಳು...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ: ತಾಲ್ಲೂಕಿನ ಚಕ್ಕೆರೆ ಗ್ರಾಮದ ಮೊರಾರ್ಜಿದೇಸಾಯಿ ವಸತಿ ಶಾಲೆಯಲ್ಲಿ ಮೂಲಸೌಲಭ್ಯಗಳಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರನ್ನು ಕೊಠಡಿಯಲ್ಲಿ ಕೂಡಿ ಬೀಗಹಾಕಿದ ಸೋಮವಾರ ಪ್ರತಿಭಟನೆ ನಡೆಸಿದರು.ಶಾಲೆಯ ಮುಖ್ಯದ್ವಾರಕ್ಕೆ ಬೀಗಹಾಕಿ ಧರಣಿ ನಡೆಸಿದ ವಿದ್ಯಾರ್ಥಿಗಳು ಶಾಲೆಯಲ್ಲಿರುವ ಎಲ್ಲಾ ಸಮಸ್ಯೆಗಳು ಪರಿಹಾರವಾಗಬೇಕು. ವರ್ಗಾವಣೆ ಮಾಡಿರುವ ದೈಹಿಕ ಶಿಕ್ಷಕರನ್ನು ಮತ್ತೆ ವಾಪಸ್‌ ನಮ್ಮ ಶಾಲೆಯಲ್ಲಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕು, ಅಲ್ಲಿಯವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದರು.ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಬೇಕಿರುವ ವಸತಿ ವ್ಯವಸ್ಥೆ, ಶೌಚಾಲಯ, ಸ್ನಾನದ ಗೃಹಗಳು ಸೂಕ್ತವಾಗಿಲ್ಲ. ಹೆಚ್ಚುವರಿ ಕೊಠಡಿಗಳು, ಕುಡಿಯುವ ನೀರು, ಸೂಕ್ತವಾದ  ಊಟದ ವ್ಯವಸ್ಥೆ ಇಲ್ಲ. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡರು.ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದೈಹಿಕ ಶಿಕ್ಷಕ ವೆಂಕಟೇಶ್‌ ಅವರನ್ನು ಏಕಾಏಕಿ  ಬೇರೊಂದು ಶಾಲೆಗೆ ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರುತಿ ಅವರ ಕೈವಾಡವಿದೆ ಎಂದು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಆರೋಪಿಸಿದರು.ಶಾಲೆಯು ಸಮಾಜ ಕಲ್ಯಾಣ ಇಲಾಖೆಯ ಸುಪರ್ದಿಯಲ್ಲಿದ್ದು, ವಿದ್ಯಾರ್ಥಿಗಳ ಸಮಸ್ಯೆ ಕೇಳಲು ಸ್ಥಳಕ್ಕೆ ಯಾವೊಬ್ಬ ಅಧಿಕಾರಿಯೂ ಭೇಟಿ ನೀಡಲಿಲ್ಲ. ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಚಕ್ಕೆರೆ ಗ್ರಾ.ಪಂ. ಉಪಾಧ್ಯಕ್ಷ ಕೃಷ್ಣೇಗೌಡ, ಪಿಡಿಓ ಮಹೇಶ್ ಹಾಗೂ ಸದಸ್ಯ ವೆಂಕಟಾಚಲ ಮುಂತಾದವರು, ಶಾಲೆಯಲ್ಲಿಯ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸುವ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು.ನಂತರ ಕೊಠಡಿಗೆ ಹಾಕಿದ್ದ ಬೀಗ ತೆಗೆಸಿ ಪ್ರಾಂಶುಪಾಲರು ಹಾಗೂ ಶಿಕ್ಷಕರ ಜೊತೆ ಗ್ರಾ.ಪಂ.ನವರು ಮಾತುಕತೆ ನಡೆಸಿ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅವರು ಕಿವಿಮಾತು ಹೇಳಿದರು.

ಪ್ರತಿಕ್ರಿಯಿಸಿ (+)