ಭಾನುವಾರ, ಜನವರಿ 19, 2020
29 °C

ಶಿಕ್ಷಣ ಕಾಯ್ದೆಗೆ ವಿರೋಧ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ 2006ರ ವೃತ್ತಿ ಶಿಕ್ಷಣ ಕಾಯ್ದೆಯನ್ನು ವಿರೋಧಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್‌, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಶಿಕ್ಷಣ ಪಡೆಯಲು ಇರುವ ಮೆರಿಟ್ ಹಾಗೂ ಸರ್ಕಾರಿ ಕೋಟಾ ರದ್ದುಗೊಳಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆತಡೆ ನಡೆಸಿದ ವಿವಿಧ ಕಾಲೇಜುಗಳ ಪದವಿಪೂರ್ವ ವಿಭಾಗದ ನೂರಾರು ವಿದ್ಯಾರ್ಥಿಗಳು, ಬಡ ವಿದ್ಯಾರ್ಥಿ ವಿರೋಧಿಯಾಗಿರುವ ಕಾಯ್ದೆ ಜಾರಿಗೊಳಿಸಬಾರದು ಎಂದು ಕೋರಿ ಕಾಯ್ದೆಯ ಪ್ರತಿಕೃತಿ ದಹಿಸಿದರು.ಈ ಕಾಯ್ದೆ ಜಾರಿಯಾದಲ್ಲಿ ಬಡ, ಮಧ್ಯಮ ವರ್ಗಗಳ ವಿದ್ಯಾರ್ಥಿಗಳು ವೈದ್ಯಕೀಯ, ಎಂಜಿನಿಯರಿಂಗ್, ದಂತ ವೈದ್ಯಕೀಯ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವುದೇ ದುಸ್ತರವಾಗಲಿದೆ. ಇದರಿಂದ ಪ್ರತಿಭಾವಂತರಿಗೆ ಅನ್ಯಾಯವಾಗಲಿದೆ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ.ಪ್ರಮೋದ್‌ ತಿಳಿಸಿದರು.ವೃತ್ತಿ ಶಿಕ್ಷಣ ಕೋರ್ಸ್‌ಗೆ ಸಂಬಂಧಿಸಿದಂತೆ ದೇಶದಲ್ಲೇ ಮಾದರಿಯಾಗರುವ ಕರ್ನಾಟಕದಲ್ಲಿ, ಸಿಇಟಿ ಪದ್ಧತಿ ಮೂಲಕ ಮೆರಿಟ್‌ ಹಾಗೂ ಸರ್ಕಾರಿ ಕೋಟಾ ಇರುವುದು ಅನೇಕರಿಗೆ ಸಹಕಾರಯಾಗಿದೆ. ನೂತನ ಕಾಯ್ದೆ ಜಾರಿಯಾದಲ್ಲಿ ಬಡವರು ವೃತ್ತಿ ಶಿಕ್ಷಣದಿಂದ ವಂಚಿತರಾಗುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಪದ್ಧತಿಯನ್ನೇ ಮುಂದುವರಿಸಬೇಕು ಎಂದು ಕೋರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ್, ಕಾರ್ಯದರ್ಶಿ ಸುರೇಶ್,  ಸೇತುಮಾಧವ, ರಘು, ರಫಿಕ್‌ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಕ್ರಿಯಿಸಿ (+)