ಶುಕ್ರವಾರ, ಮೇ 27, 2022
23 °C

ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಗಿರಿ:  ಮುಂದಿನ ದಿನಗಳಲ್ಲಿ ಆಹಾರ ಅಭದ್ರತೆ ಬಂದರೂ ಅಚ್ಚರಿಯಿಲ್ಲ. ನಾವಿನ್ನೂ ಹಳೆಯ ಕಾಲದ ಶಿಕ್ಷಣವನ್ನು ಅಭ್ಯಾಸ ಮಾಡುತ್ತಿದ್ದೇವೆ. ಕಾಲಮಾನಕ್ಕೆ ತಕ್ಕಂತೆ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ ಅಗತ್ಯ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.ಶುಕ್ರವಾರ ಪಟ್ಟಣದ ಶಿವಲಿಂಗೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ವತಿಯಿಂದ ನಡೆದ ಒಂದು ದಿನದ ರಾಜ್ಯಮಟ್ಟದ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.ಹನಿ ನೀರಿಗಾಗಿ ಮುಂದಿನ ದಿನಗಳಲ್ಲಿ ಯುದ್ಧಗಳಾಗಬಹುದು. ನಾವು ಇಂದು ನೆನಪನ್ನು ಇಟ್ಟುಕೊಳ್ಳುವಂತಹ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದೇವೆ. ಆದರೆ, ಬದುಕನ್ನು ರೂಪಿಸುವಂತಹ ಶಿಕ್ಷಣ ವಿದ್ಯಾರ್ಥಿಗಳಿಗೆ ನೀಡಬೇಕಾಗಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು. ಸ್ನಾತಕೋತ್ತರ ವಿಭಾಗದಲ್ಲಿ ಪ್ರಾಧ್ಯಾಪಕರು ಶೇ. 50 ರಷ್ಟು ಅಂಕಗಳನ್ನು ಕೊಡುವ ಪದ್ಧತಿಯನ್ನು ರದ್ದು ಮಾಡಿದರೆ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರು ನೀಡುತ್ತಿರುವ ಲೈಂಗಿಕ ದೌರ್ಜನ್ಯ ತಪ್ಪಿಸಬಹುದು. ಇದಕ್ಕಾಗಿ ಮುಂದಿನ ಅಧಿವೇಶನದಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗುವುದು ಎಂದರು.ಚಿತ್ರದುರ್ಗ ಎಸ್‌ಜೆಎಂ ವಿದ್ಯಾಪೀಠದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರೊ.ಜಿ.ಎನ್. ಮಲ್ಲಿಕಾರ್ಜುನಪ್ಪ ಮಾತನಾಡಿ, ಜಾಗತಿಕ ಸಮಸ್ಯೆಗಳಿಗೆ ಪರಿಹಾರ ಸ್ಥಳೀಯ ಮಟ್ಟದಲ್ಲಿ ಸಿಗಬೇಕಾಗಿದೆ. ಇಂದಿನ ಯುವಪಡೆಗೆ ಉತ್ತಮ ವಿದ್ಯಾಭ್ಯಾಸವನ್ನು ಕೊಟ್ಟು ವೃತ್ತಿಯನ್ನು ನೀಡದಿದ್ದರೆ ದೇಶದ್ರೋಹದ ಕಾರ್ಯವಾಗುತ್ತದೆ. ಒಳ್ಳೆಯ ಪ್ರೇರಣೆಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದರು.ಇಂದಿನ ದಿನಗಳಲ್ಲಿ ವಿಶ್ವವಿದ್ಯಾಲಯಗಳು ರಣಭೂಮಿಗಳಾಗಿ ಮಾರ್ಪಟ್ಟಿವೆ. ಪ್ರತಿದಿನ ಒಂದಲ್ಲ ಒಂದು ಹಗರಣಗಳು ಹಾಗೂ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದನ್ನು ನೋಡುತ್ತಿದ್ದೇವೆ. ವಿದ್ಯಾಲಯಗಳು ಸುಲಿಗೆ ಮಾಡುವ ಕೇಂದ್ರಗಳಾಗಿರುವುದು ವಿಷಾದದ ಸಂಗತಿ ಎಂದರು.

ದಾವಣಗೆರೆ ವಿವಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಜಿ.ಟಿ. ಗೋವಿಂದಪ್ಪ ಉಪಸ್ಥಿತರಿದ್ದರು. ಪ್ರಾಂಶುಪಾಲ ಜಿ.ಆರ್. ಈಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ದೀಪಿಕಾ ಸಂಗಡಿಗರು ಪ್ರಾರ್ಥಿಸಿದರು. ಎಸ್.ಪಿ. ರವಿ ಸ್ವಾಗತಿಸಿದರು. ರಾಜೇಶ್ವರಿ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.