ಸೋಮವಾರ, ಏಪ್ರಿಲ್ 19, 2021
23 °C

ಶಿವಮೊಗ್ಗಕ್ಕೆ ಶೀಘ್ರ ಕ್ರೀಡಾ ಸಮುಚ್ಚಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿದರೆ ಅತಿ ದೊಡ್ಡ ಕ್ರೀಡಾ ಸಮುಚ್ಚಯ ಶಿವಮೊಗ್ಗ ನಗರದಲ್ಲಿ ನಿರ್ಮಾಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ವಿ. ಪೊನ್ನುರಾಜ್ ತಿಳಿಸಿದರು.ನಗರದ ಸರ್ಕಾರಿ ಪ್ರೌಢಶಾಲೆ ಹಿಂಭಾಗದ ಆವರಣದಲ್ಲಿ ‘ಫ್ರೆಂಡ್ಸ್ ಷಟಲ್ ಕ್ಲಬ್’ ಮಂಗಳವಾರ ಮಹಾಶಿವರಾತ್ರಿ ಅಂಗವಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕ್ರೀಡಾ ಸಮುಚ್ಚಯಕ್ಕಾಗಿ ಸರ್ಕಾರ 10ಕೋಟಿ ರೂ. ಮಂಜೂರು ಮಾಡಿದೆ. ಈ ಸಂಬಂಧದ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಬೆಂಗಳೂರು ಮಾದರಿಯಲ್ಲಿ ರಾಜ್ಯದಲ್ಲಿ ಅತಿದೊಡ್ಡ ಕ್ರೀಡಾ ಸಮುಚ್ಚಯ ಮುಂದಿನ ದಿನಗಳಲ್ಲಿ ತಲೆಯೆತ್ತಲಿದೆ. ಸಮುಚ್ಚಯದಲ್ಲಿ ಬ್ಯಾಡ್ಮಿಂಟನ್ ಮತ್ತು ಟೆನಿಸ್‌ಗೆ ಒತ್ತುಕೊಡಲಾಗುವುದು ಎಂದು ಹೇಳಿದರು.

ಷಟಲ್ ಬ್ಯಾಡ್ಮಿಂಟನ್ ಬೆಂಗಳೂರಿಗೆ ಸೀಮಿತವಾಗಿದ್ದು, ಅಲ್ಲಿನ ಕ್ರೀಡಾಪಟುಗಳು ಮಾತ್ರ ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಹೋಗುತ್ತಾರೆ. ಈ ಕ್ರೀಡೆ ರಾಜ್ಯಾದ್ಯಂತ ಬೆಳೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ಉದ್ದೇಶಿಸಿದೆ ಎಂದರು.ಆದಿಚುಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿ ಮಾತನಾಡಿ, ಕ್ರೀಡೆ, ಮನುಷ್ಯನಲ್ಲಿ ಸ್ವಾಭಿಮಾನ ಬೆಳೆಸುತ್ತದೆ. ಮನಸ್ಸಿನ ಶಾಂತಿ, ಉಲ್ಲಾಸಕ್ಕೆ ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ; ಸ್ಪರ್ಧಾತ್ಮಕವಾಗಿ ಪಾಲ್ಗೊಳ್ಳುವುದು ಮುಖ್ಯ ಎಂದು ಹೇಳಿದರು.ಈ ಹಿನ್ನೆಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಭಾರತೀಯ ಕ್ರೀಡಾಪಟುಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ತಿಳಿಸಿದರು.ಅಂತರರಾಷ್ಟ್ರೀಯ ಕೋಚ್ ಗಂಗೂಲಿ ಪ್ರಸಾದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ. ಮಲ್ಲಿಕಾರ್ಜುನ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ಕೆ. ಶಾಂತಾ, ಎಸ್. ಶ್ರುತಿ, ಎನ್. ಉಷಾ ಅವರನ್ನು ಅಭಿನಂದಿಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.