ಸಂಘಟನೆ, ಚುನಾವಣೆ: ಜೆಡಿಎಸ್ ಸಭೆ

7

ಸಂಘಟನೆ, ಚುನಾವಣೆ: ಜೆಡಿಎಸ್ ಸಭೆ

Published:
Updated:

ಬೆಂಗಳೂರು: ಪಕ್ಷ ಸಂಘಟನೆ ಮತ್ತು ಚುನಾವಣಾ ತಯಾರಿಗೆ ಜೆಡಿಎಸ್ ಚಾಲನೆ ನೀಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭಾನುವಾರ 13 ಜಿಲ್ಲೆಗಳ ಶಾಸಕರು ಮತ್ತು ಮುಖಂಡರ ಸಭೆ ನಡೆಸಿದರು. ಸೋಮವಾರ 17 ಜಿಲ್ಲೆಗಳ ಮುಖಂಡರ ಸಭೆ ನಡೆಯಲಿದೆ. ಬಿಡದಿ ಸಮೀಪದ ಖಾಸಗಿ ರೆಸಾರ್ಟ್ ಒಂದರಲ್ಲಿ ನಡೆದ ಸಭೆಯಲ್ಲಿ ಹಳೆ ಮೈಸೂರು ಭಾಗದ 13 ಜಿಲ್ಲೆಗಳ ಶಾಸಕರು, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರು ಮತ್ತು ಹಲವು ಮುಖಂಡರು ಪಾಲ್ಗೊಂಡಿದ್ದರು.  ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಸಾಧನೆಯೂ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ.‘ಯಾವುದೇ ಸಂದರ್ಭದಲ್ಲಿ ವಿಧಾನ ಸಭೆಗೆ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆ ಇದೆ. ಪಕ್ಷ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಬೇಕು. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಬೇಕು’ ಎಂದು ಕುಮಾರಸ್ವಾಮಿ ಪಕ್ಷದ ಮುಖಂಡರಿಗೆ ಸೂಚಿಸಿದ್ದಾರೆ.‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಮತ್ತು ಭೂ ಹಗರಣಗಳ ಆರೋಪಗಳ ಬಗ್ಗೆ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಬಿಜೆಪಿ ಸರ್ಕಾರದ ವಿರುದ್ಧದ ಹೋರಾಟವನ್ನು ಜನಾಂದೋಲನವಾಗಿ ಪರಿವರ್ತಿಸಬೇಕು’ ಎಂದು ಕರೆ ನೀಡಿದ್ದಾರೆ.ಉಸ್ತುವಾರಿಗಳ ಭೇಟಿ: ವಿವಿಧ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಯ ಉಸ್ತುವಾರಿ ಹೊತ್ತಿರುವ ಮುಖಂಡರು ಜನವರಿ 30ರೊಳಗೆ ಆಯಾ ಜಿಲ್ಲೆಗಳಿಗೆ ತೆರಳಿ ಸ್ಥಳೀಯ ಮುಖಂಡರ ಸಭೆ ನಡೆಸಬೇಕು. ಸಂಘಟನೆಯಲ್ಲಿ ಬದಲಾವಣೆ ಅಗತ್ಯವಿದ್ದರೆ ತಕ್ಷಣ ಈ ಬಗ್ಗೆ ವರದಿ ನೀಡಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.ಸೋಮವಾರ ಕರಾವಳಿ, ಮಧ್ಯ ಕರ್ನಾಟಕ ಮತ್ತು ಉತ್ತರಕರ್ನಾಟಕದ 17 ಜಿಲ್ಲೆಗಳ ಶಾಸಕರು, ಮುಖಂಡರ ಸಭೆ ನಡೆಯಲಿದೆ. ಎಲ್ಲ ಜಿಲ್ಲೆಗಳ ಮುಖಂಡರಿಂದಲೂ ಪಕ್ಷ ಸಂಘಟನೆಯ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry