ಸಂಚಾರ ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ: ಬಂಧನ

7

ಸಂಚಾರ ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ: ಬಂಧನ

Published:
Updated:

ಬೆಂಗಳೂರು: ಏಕಮುಖ ಸಂಚಾರ ರಸ್ತೆಯಲ್ಲಿ ಒಂದೇ ಬೈಕ್‌ನಲ್ಲಿ ಸವಾರಿ ಮಾಡುತ್ತಿದ್ದ ಮೂರು ಮಂದಿ ಕರ್ತವ್ಯ ನಿರತ ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ ನಡೆಸಿರುವ ಘಟನೆ ಗಂಗೇನಹಳ್ಳಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಈ ಸಂಬಂಧ ಸದಾಶಿವನಗರ ಪೊಲೀಸರು ನದೀಮ್‌ಅಹಮದ್‌ (23) ಎಂಬಾತನನ್ನು ಬಂಧಿಸಿದ್ದಾರೆ.ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ನಿವಾಸಿಯಾದ ನದೀಮ್, ಗೆಳೆಯನ ಮದುವೆ ಸಮಾರಂಭಕ್ಕೆಂದು ಗಂಗೇನಹಳ್ಳಿಯಲ್ಲಿರುವ ಕಲ್ಯಾಣ ಮಂಟಪಕ್ಕೆ ಬಂದಿದ್ದ. ಊಟ ಮುಗಿಸಿಕೊಂಡು ರಾತ್ರಿ 9 ಗಂಟೆ ಸುಮಾರಿಗೆ ಇಬ್ಬರು ಸ್ನೇಹಿತರನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಏಕಮುಖ ಸಂಚಾರ ರಸ್ತೆಯಲ್ಲಿ ಬಂದಿದ್ದಾನೆ.ಈ ವೇಳೆ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಟಿ.ನಗರ ಸಂಚಾರ ಠಾಣೆ ಕಾನ್‌ಸ್ಟೆಬಲ್‌ ರಮೇಶ್‌, ಅವರನ್ನು ಅಡ್ಡಗಟ್ಟಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿದ ನದೀಮ್‌ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದಾಗ ಆತ ಸ್ನೇಹಿತರೊಂದಿಗೆ ಸೇರಿಕೊಂಡು ರಮೇಶ್‌ ಜತೆ ವಾಗ್ವಾದಕ್ಕೆ ಇಳಿದಿದ್ದಾನೆ. ಆಗ ಬೈಕ್‌ನ ಕೀ ತೆಗೆದುಕೊಳ್ಳಲು ಮುಂದಾದ ರಮೇಶ್‌ ಅವರಿಗೆ ನದೀಮ್‌ ಮೊಣಕೈನಿಂದ ಗುದ್ದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.ಕೂಡಲೇ ರಮೇಶ್‌ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಹೊಯ್ಸಳ ವಾಹನದಲ್ಲಿ ಸ್ಥಳಕ್ಕೆ ಬಂದ ಸಿಬ್ಬಂದಿ ನದೀಮ್‌ನನ್ನು ವಶಕ್ಕೆ ಪಡೆದರು. ಬಳಿಕ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ  (ಐಪಿಸಿ 353) ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಅವರ ವಶಕ್ಕೆ ಒಪ್ಪಿಸಿದರು.ನದೀಮ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪರಾರಿಯಾಗಿರುವ ಆತನ ಸ್ನೇಹಿತರ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry