ಶನಿವಾರ, ಫೆಬ್ರವರಿ 27, 2021
21 °C

ಸಂಪೂರ್ಣ ಸಾಕ್ಷರ ಜಿಲ್ಲೆ ರೂಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂಪೂರ್ಣ ಸಾಕ್ಷರ ಜಿಲ್ಲೆ ರೂಪಿಸಿ

ಕೋಲಾರ: ‘ಜಿಲ್ಲೆಯನ್ನು ಸಂಪೂರ್ಣ ಸಾಕ್ಷರ ಜಿಲ್ಲೆಯಾಗಿ ರೂಪಿಸಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಗರದ ಸರ್‌.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜಿಲ್ಲೆಯು ಸಾಕ್ಷರತೆ ಪ್ರಮಾಣದಲ್ಲಿ 14ನೇ ಸ್ಥಾನದಲ್ಲಿದೆ ಎಂದು ಹೇಳಿದರು.ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರ ಜಿಲ್ಲೆಯಲ್ಲಿ ಸಾಕ್ಷರತೆ ಮತ್ತು ತಲಾ ಆದಾಯದ ಪ್ರಮಾಣ ತುಂಬಾ ಕಡಿಮೆ ಇದೆ. ಜತೆಗೆ ಇಲ್ಲಿನ ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಅಪೌಷ್ಟಿಕತೆ ಸಮಸ್ಯೆ ಕಾಡುತ್ತಿದೆ. ಶೇ 70ರಷ್ಟು ಜನ ಬಡತನ ರೇಖೆಗಿಂತ (ಬಿಪಿಎಲ್‌) ಕೆಳಗಿದ್ದಾರೆ. ವಿಜ್ಞಾನ, ತಂತ್ರಜ್ಞಾನ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆ ಬಹಳ ಹಿಂದುಳಿದಿದೆ. ಅಲ್ಲದೇ, ಮೂಲಸೌಕರ್ಯಗಳ ಸಮಸ್ಯೆ ಗಂಭೀರವಾಗಿದೆ ಎಂದು ಅಭಿಪ್ರಾಯಪಟ್ಟರು.ಕೃಷಿಯು ಜಿಲ್ಲೆಯ ಪ್ರಧಾನ ಕಸುಬಾಗಿದೆ. ಒಟ್ಟಾರೆ ಜನಸಂಖ್ಯೆಯಲ್ಲಿ ಶೇ 64ರಷ್ಟು ಮಂದಿ ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ, ನೀರಿನ ಸಮಸ್ಯೆಯಿಂದ ಕೃಷಿಗೆ ಹಿನ್ನಡೆಯಾಗುತ್ತಿದೆ. ಜನರಿಗೆ ಹಾಗೂ ಜಾನುವಾರುಗಳಿಗೆ ಸರಿಯಾಗಿ ಕುಡಿಯುವ ನೀರು ಸಿಗುತ್ತಿಲ್ಲ. ಅಂತರ್ಜಲ ಮಟ್ಟ ಸಹ ಕುಸಿದಿದೆ. ಎತ್ತಿನ ಹೊಳೆ ಮತ್ತು ಚಲ್ಲಘಟ್ಟ ಯೋಜನೆಗಳು ಪೂರ್ಣಗೊಂಡ ನಂತರ ನೀರಿನ ಬವಣೆ ತೀರಲಿದೆ ಎಂದರು.ಜಿಲ್ಲಾಡಳಿತವು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬರುವ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗೆ ಸಮರ್ಪಕವಾಗಿ ಬಳಸಬೇಕು. ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿ, ನಿರ್ಮಲ ಗ್ರಾಮ ಯೋಜನೆ ಮತ್ತು ವಸತಿ ಸೌಕರ್ಯಕ್ಕೆ ಹೆಚ್ಚು ಒತ್ತು ಕೊಟ್ಟು ಹಸಿವುಮುಕ್ತ ಆದರ್ಶ ಜಿಲ್ಲೆ ರೂಪಿಸಿ. ಮಹಿಳೆಯರು ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಸಲಹೆ ನೀಡಿದರು.ಪಥ ಸಂಚಲನ: ಸಮಾರಂಭದ ಭಾಗವಾಗಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆ, ಎನ್‌ಸಿಸಿ, ಭಾರತೀಯ ಸೇವಾ ದಲ, ಸ್ಕೌಟ್ಸ್‌ ಮತ್ತು ಗೈಡ್ಸ್‌, ಗೃಹರಕ್ಷಕ ದಲ ಸಿಬ್ಬಂದಿ ಹಾಗೂ ಶಾಲಾ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು. ದೇಶ ಭಕ್ತಿಗೀತೆ ಹಾಗೂ ದೇಶ ಭಕ್ತಿ ಸಾರುವ ಸಮೂಹ ನೃತ್ಯದ ಮೂಲಕ ವಿದ್ಯಾರ್ಥಿಗಳು ಎಲ್ಲರೆದೆಯಲ್ಲಿ ರಾಷ್ಟ್ರಪ್ರೇಮದ ಕಿಚ್ಚು ಹಚ್ಚಿದರು.ಬಹುಮಾನ: ಆಕರ್ಷಕ ಪಥ ಸಂಚಲನ ನಡೆಸಿದ ಮಹಿಳಾ ಸಮಾಜ ಶಾಲೆಯ ವಿದ್ಯಾರ್ಥಿನಿಯರಿಗೆ ಪ್ರಥಮ ಬಹುಮಾನ, ಬೆಂಗಳೂರು ಮಾಂಟೆಸರಿ ಶಾಲೆ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ ಹಾಗೂ ಸುವರ್ಣ ಸೆಂಟ್ರಲ್‌ ಶಾಲಾ ಮಕ್ಕಳಿಗೆ ತೃತೀಯ ಬಹುಮಾನ ನೀಡಲಾಯಿತು. ಅಂತರಗಂಗಾ ವಿದ್ಯಾ ಸಂಸ್ಥೆಯ ಅಂಗವಿಕಲ ಮಕ್ಕಳಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.ಸಂಸದ ಕೆ.ಎಚ್.ಮುನಿಯಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಮಾಜಿ ಸಚಿವ ನಿಸಾರ್‌ ಅಹಮ್ಮದ್‌, ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಚಂದ್ರಾರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿ.ವೆಂಕಟಮುನಿಯಪ್ಪ, ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್‌.ಎಂ.ಪನಾಲಿ, ಉಪ ವಿಭಾಗಾಧಿಕಾರಿ ಸಿ.ಎನ್.ಮಂಜುನಾಥ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್‌, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ಎ.ಕೋರವಾರ ಸಮಾರಂಭದಲ್ಲಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.