ಸಂಸ್ಥೆ, ಕಾಲೇಜು ವಿರುದ್ಧ ಕ್ರಮಕ್ಕೆ ಒತ್ತಾಯ

ಮೈಸೂರು: ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದವರನ್ನು ಬಂಧಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಇಲ್ಲಿ ಪ್ರತಿಭಟನೆ ನಡೆಸಿದರು.
ಮಹಾರಾಜ ಪದವಿಪೂರ್ವ ಕಾಲೇಜಿನಿಂದ ಮೆರವಣಿಗೆ ಹೊರಟ ನೂರಾರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದರು. ದೇಶಪ್ರೇಮಕ್ಕೆ ಸಂಬಂಧಿಸಿದಂತೆ ವಿವಿಧ ಘೋಷಣೆ ಕೂಗಿದರು.
ಬೆಂಗಳೂರಿನ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜು ಹಾಗೂ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ ಸಂಸ್ಥೆಯ ವಿರುದ್ಧವೂ ಪೊಲೀಸರು ಕ್ರಮ ಕೈಗೊಂಡಿಲ್ಲ. ದೇಶದ್ರೋಹಿ ಘಟನೆ ನಡೆದರೂ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಿಲ್ಲ. ಎಬಿವಿಪಿ ದೂರು ನೀಡಿದರು ಎರಡು ದಿನ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ ಒಡೆತನದ ತುಮಕೂರಿನ ಎಸ್ಎಸ್ಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿಯೂ ಇಂತಹ ಪ್ರಕರಣ ನಡೆದಿದೆ. ದೇಶದ್ರೋಹಿ ಘೋಷಣೆ ಕೂಗಿದ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಆದರೆ, ಎಫ್‌ಐಆರ್ ದಾಖಲಿಸಿಲ್ಲ ಹಾಗೂ ಉನ್ನತ ಮಟ್ಟದ ತನಿಖೆಗೆ ಆದೇಶಿಸಿಲ್ಲ ಎಂದು ಆರೋಪಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಶಿವಕುಮಾರ್, ನಗರ ಸಹ ಕಾರ್ಯದರ್ಶಿ ಮನೋಜ್, ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಕೇಶ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.