ಮಂಗಳವಾರ, ಅಕ್ಟೋಬರ್ 15, 2019
26 °C

ಸಮನ್ವಯತೆಯಿಂದ ಮಾತ್ರ ಅಭಿವೃದ್ಧಿ - ಸಚಿವ ಶೆಟ್ಟರ್

Published:
Updated:

ಬೀದರ್:  ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿ ಹಾಗೂ ಅಭಿವೃದ್ಧಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಸಚಿವ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟರು.ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಒಕ್ಕೂಟವು ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಪ್ರಥಮ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.ಚುನಾಯಿತ ಪ್ರತಿನಿಧಿ ಹಾಗೂ ಅಧಿಕಾರಿಗಳು ಪರಸ್ಪರರನ್ನು ಗೌರವಿಸಿದರೆ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರಬಹುದಾಗಿದೆ. ಚುನಾಯಿತ ಪ್ರತಿನಿಧಿಗಳು ಹಾಗೂ ಅಭಿವೃದ್ಧಿ ಅಧಿಕಾರಿಗಳ ನಡುವೆ ಉಂಟಾಗಿದ್ದ ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಕೆಲ ಗಾಪಂ ಅಧ್ಯಕ್ಷರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗಿದೆ. ಇನ್ನು ಮುಂದೆ ಪರಸ್ಪರರನ್ನು ಅಗೌರವದಿಂದ ಕಾಣುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.ಕೇಂದ್ರ ಸ್ಥಾನದಲ್ಲಿ ಇರುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಿಮಯ ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಮಧ್ಯೆ ಹೊಂದಾಣಿಕೆ ಅಗತ್ಯ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ಮೂರು ಸಂಸ್ಥೆಯ ಪ್ರತಿನಿಧಿಗಳ ಸಭೆ ನಡೆಸಲಾಗುವುದು. ಪ್ರತಿನಿಧಿಗಳ ಸಮಸ್ಯೆಗಳನ್ನು ಆಲಿಸಲಾಗುವುದು. ಅಗತ್ಯ ಬಿದ್ದರೆ ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದರು.ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸುವುದಕ್ಕಾಗಿ ಗ್ರಾಮಸಭೆಗಳನ್ನು ಸಮರ್ಪಕವಾಗಿ ನಡೆಸಬೇಕು. ಉದ್ಯೋಗ ಖಾತರಿ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಯೋಜನೆಯಲ್ಲಿ ಅವ್ಯವಹಾರ ನಡೆದ ಬಗ್ಗೆ ದೂರುಗಳು ಬಂದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

 

Post Comments (+)