ಸರ್ಕಾರದ ವಿರುದ್ಧ ರಾಜ್ಯಪಾಲರ ವಾಕ್ಸಮರ

ಬೆಂಗಳೂರು: ಪ್ರತಿ 15 ದಿನಗಳಿಗೊಮ್ಮೆ ರಾಜ್ಯಪಾಲರನ್ನು ಭೇಟಿ ಮಾಡುವ ಮೂಲಕ ಅವರೊಂದಿಗಿನ ಸಂಘರ್ಷಕ್ಕೆ ಇತಿಶ್ರೀ ಹಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಕಟಿಸಿದ ಬೆನ್ನಲ್ಲೇ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಕರ್ನಾಟಕದಲ್ಲಿ ಅಕ್ರಮ ಹಣದ ವರ್ಗಾವಣೆ ಮತ್ತು ತೆರಿಗೆ ವಂಚನೆ ರಾಜಾರೋಷವಾಗಿ ನಡೆಯುತ್ತಿದೆ’ ಎಂಬ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ನಡೆದ ವಿಶ್ವ ಉರ್ದು ಸಮ್ಮೇಳನ ಉದ್ಘಾಟನಾ ಸಮಾರಂಭದ ಬಳಿಕ ಬುಧವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಕ್ರಮ ಹಣದ ವರ್ಗಾವಣೆ ಮತ್ತು ತೆರಿಗೆ ವಂಚನೆ ಬಹಿರಂಗವಾಗಿಯೇ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆ ನಡೆಯುತ್ತಿದೆ’ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.
ಓಬಳಾಪುರಂ ಮೈನಿಂಗ್ ಕಂಪೆನಿಯ ವಹಿವಾಟಿನಲ್ಲಿ ರಾಜ್ಯದ ಸಚಿವರಾದ ಜಿ.ಜನಾರ್ದನ ರೆಡ್ಡಿ, ಜಿ.ಕರುಣಾಕರ ರೆಡ್ಡಿ ಮತ್ತು ಬಿ.ಶ್ರೀರಾಮುಲು 86 ಕೋಟಿ ರೂಪಾಯಿ ತೆರಿಗೆ ವಂಚಿಸಿದ್ದಾರೆ ಎಂಬ ಆದಾಯ ತೆರಿಗೆ ಇಲಾಖೆ ವರದಿ ಕುರಿತು ಪ್ರತಿಕ್ರಿಯಿಸಿದ ರಾಜ್ಯಪಾಲರು, ‘ಈ ವಿಷಯ ಈಗ ರಹಸ್ಯವಾಗಿ ಉಳಿದಿಲ್ಲ. ಎಲ್ಲವೂ ಬಹಿರಂಗವಾಗಿಯೇ ಇದೆ’ ಎಂದರು.
‘ಕಾಂಗ್ರೆಸ್ ಮುಖಂಡರಾದ ವಿ.ಎಸ್.ಉಗ್ರಪ್ಪ ಮತ್ತು ಕೆ.ಸಿ.ಕೊಂಡಯ್ಯ ಅವರು ಹಿಂದೆಯೇ ಈ ಬಗ್ಗೆ ದೂರು ನೀಡಿದ್ದರು. ಈಗ ಮತ್ತೆ ದೂರು ನೀಡಿದ್ದಾರೆ. ಈ ಸಂಬಂಧ ಸಂವಿಧಾನಬದ್ಧವಾಗಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಪರಿಶೀಲಿಸಿ ಕ್ರಮ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ಇಬ್ಬರು ವಕೀಲರು ಸಲ್ಲಿಸಿರುವ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಭಾರದ್ವಾಜ್, ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಮುಖ್ಯಮಂತ್ರಿ ವಿರುದ್ಧ ವಕೀಲರು ಸಲ್ಲಿಸಿರುವ ದೂರು ಬೃಹತ್ ಗಾತ್ರದಲ್ಲಿದೆ. 2,000 ಪುಟಗಳಿಗೂ ಹೆಚ್ಚು ದಾಖಲೆಗಳಿವೆ.ಅವುಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಬೇಕಿದೆ. ಬಳಿಕವೇ ನಾನು ಒಂದು ತೀರ್ಮಾನಕ್ಕೆ ಬರಲು ಸಾಧ್ಯ’ ಎಂದರು.ಪ್ರತಿ 15 ದಿನಗಳಿಗೊಮ್ಮೆ ರಾಜ್ಯಪಾಲರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಕುರಿತು ಪ್ರಶ್ನಿಸಿದಾಗ, ‘ಅವರ ನಿರ್ಧಾರದ ಬಗ್ಗೆ ಮಾಧ್ಯಮಗಳಿಂದಲೇ ನಾನು ತಿಳಿದಿದ್ದೇನೆ.
ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ನನ್ನನ್ನು ಭೇಟಿ ಮಾಡಿದ ಎಲ್ಲ ಸಂದರ್ಭಗಳಲ್ಲಿ ಅವರು ಬಯಸಿದ ವಿಷಯಗಳ ಬಗ್ಗೆ ಚರ್ಚಿಸಲು ನಾನು ಸಿದ್ಧನಿದ್ದೇನೆ’ ಎಂದರು.‘ಕರ್ತವ್ಯ ಪಾಲಿಸುವೆ’: ‘ವಿಧಾನಮಂಡಲದ ಜಂಟಿ ಅಧಿವೇಶನ ನಡೆದಾಗಲೆಲ್ಲ ಸದನವನ್ನು ಉದ್ದೇಶಿಸಿ ಭಾಷಣ ಮಾಡುವುದು ರಾಜ್ಯಪಾಲರ ಕರ್ತವ್ಯ. ಅದು ನನ್ನ ಸಂವಿಧಾನಬದ್ಧ ಕರ್ತವ್ಯ. ಜನವರಿ 6ರಂದು ನಡೆಯುವ ಜಂಟಿ ಅಧಿವೇಶನದಲ್ಲಿ ಅದನ್ನು ನಾನು ನಿರ್ವಹಿಸುತ್ತೇನೆ’ ಎಂದು ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳುವ ಕುರಿತ ವಿವಾದಕ್ಕೆ ಉತ್ತರಿಸಿದರು.
‘ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಮಾಡುವ ಭಾಷಣವನ್ನು ಸಿದ್ಧಪಡಿಸುವುದು ಸಚಿವ ಸಂಪುಟದ ಕೆಲಸ. ಅವರು ಕಳುಹಿಸುವ ಭಾಷಣವನ್ನು ನಾನು ನೋಡುತ್ತೇನೆ’ ಎಂದರು.ಕಾನೂನು ಮೀರಿಲ್ಲ: ‘ನನ್ನ ಕೆಲಸವನ್ನು ನಾನು ಸರಿಯಾಗಿಯೇ ನಿರ್ವಹಿಸುತ್ತಿದ್ದೇನೆ. ಹಲವು ವರ್ಷಗಳಿಂದ ನಾನು ರಾಜಕೀಯದಲ್ಲಿ ಇದ್ದೇನೆ. ಯಾವುದೇ ಸಂದರ್ಭದಲ್ಲೂ ನಾನು ಕಾನೂನು ಮತ್ತು ನಿಯಮಗಳನ್ನು ಮೀರಿಲ್ಲ. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದು ಮತ್ತು ಕಾನೂನು ಉಲ್ಲಂಘನೆಗೆ ಅವಕಾಶ ನೀಡುವುದಿಲ್ಲ’ ಎಂದು ತಮ್ಮನ್ನು ಟೀಕಿಸುವವರಿಗೆ ತಿರುಗೇಟು ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.