ಬುಧವಾರ, ಜೂನ್ 3, 2020
27 °C

ಸರ್ಕಾರಿ ಆಸ್ಪತ್ರೆ ನಿರ್ಮಾಣ: ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ:  ನಗರದ ಬಿ.ಬಿ.ರಸ್ತೆ ಬಳಿಯಿರುವ ಬಸಪ್ಪ ಛತ್ರದ ಸ್ಥಳದಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಜನರ ಅನುಕೂಲಕ್ಕಾಗಿ ಆಸ್ಪತ್ರೆಗೆ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.ಚಿಕ್ಕಬಳ್ಳಾಪುರಕ್ಕೆ ಸೋಮವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಸಕ್ತ ಜಿಲ್ಲಾ ಆಸ್ಪತ್ರೆಯು ಕಿರಿದಾಗಿದ್ದು, ರೋಗಿಗಳಿಗೆ ಹೆಚ್ಚಿನ ಸೌಕರ್ಯಗಳು ಕಲ್ಪಿಸಲು ಆಗುತ್ತಿಲ್ಲ. ಉತ್ತಮ ವೈದ್ಯಕೀಯ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ’ ಎಂದರು.ಈ ಎಲ್ಲದರ ಹಿನ್ನೆಲೆಯಲ್ಲಿ ಬಸಪ್ಪ ಛತ್ರದ ಸ್ಥಳದಲ್ಲಿ ಆಸ್ಪತ್ರೆ ನಿರ್ಮಿಸುವ ಉದ್ದೇಶವಿದೆ. ಛತ್ರದ ಆವರಣದಲ್ಲಿರುವ ನಿರಾಶ್ರಿತ ಕುಟುಂಬಗಳನ್ನು ಬೇರೆಡೆ ಸ್ಥಳಾಂತರಿಸಿ, ಛತ್ರದ ಸ್ಥಳದಲ್ಲಿ ಆಸ್ಪತ್ರೆ ನಿರ್ಮಿಸಲಾಗುವುದು. ಇದರಿಂದ ಜಿಲ್ಲಾ ಆಸ್ಪತ್ರೆಯ ಕಾರ್ಯನಿರ್ವಹಣೆ ವಿಸ್ತರಣೆಗೊಳ್ಳುವುದರ ಜೊತೆಗೆ ಜನಕ್ಕೂ ಕೂಡ ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು.ವಿದ್ಯುತ್ ಪೂರೈಕೆ ಸಮರ್ಪಕವಾಗಿ ಪೂರೈಸಲಾಗುತ್ತಿದೆ ಎಂದು ಹೇಳಿದ ಅವರು, ‘ಚಿಕ್ಕಬಳ್ಳಾಪುರ ಜಿಲ್ಲೆಗೆ ಮೂರು ಫೇಸ್‌ಗಳಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.ರೈತರಿಗೆ ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದ ರೀತಿಯಲ್ಲಿ ವಿದ್ಯುತ್ ಪೂರೈಸಲಾಗುತ್ತಿದೆ. ಭವಿಷ್ಯದಲ್ಲೂ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಯಾವುದೇ ಅಡಚಣೆಯಾಗುವುದಿಲ್ಲ’ ಎಂದರು.ಮುಖ್ಯಮಂತ್ರಿಯವರ ವಿರುದ್ಧ ಕಾನೂನು ಕ್ರಮ ಜರುಗೊಳಿಸಲು ರಾಜ್ಯಪಾಲರು ಅನುಮತಿ ನೀಡಿರುವ ಕ್ರಮವನ್ನು ಖಂಡಿಸಿದ ಅವರು, ‘ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಕಾನೂನು ಪಂಡಿತರು. ಅವರು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸುತ್ತಾರೆ ಎಂದು ಭಾವಿಸಿದ್ದೆವು. ಆದರೆ ಅವರು ಅಧಿಕಾರ ತೆಗೆದುಕೊಂಡ ದಿನದಿಂದ ರಾಜ್ಯ ಸರ್ಕಾರಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಕಿರಿಕಿರಿ ಮಾಡುತ್ತಿದ್ದಾರೆ. ಸರ್ಕಾರದ ಸುಗಮ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ. ವಿನಾಕಾರಣ ಮುಖ್ಯಮಂತ್ರಿಯವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ್ದಾರೆ’ ಎಂದು ಟೀಕಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.