ಭಾನುವಾರ, ಏಪ್ರಿಲ್ 18, 2021
31 °C

ಸಹಕಾರ ಸಂಸ್ಥೆಗಳ ಮೇಲೆ ತೆರಿಗೆಗೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಹಕಾರ ಸಂಸ್ಥೆಗಳ ಮೇಲೆ ತೆರಿಗೆಗೆ ವಿರೋಧ

ಮೈಸೂರು: ಸಹಕಾರ ಸಂಸ್ಥೆಗಳ ಲಾಭಾಂಶದ ಮೇಲೆ ಆದಾಯ ತೆರಿಗೆ ವಿಧಿಸಲು ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ವಿಧೇಯಕವನ್ನು ವಿರೋಧಿಸಿ ಸಹಕಾರ ಸಪ್ತಾಹದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಹಕಾರಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಪ್ರಕಟಿಸಿದರು.ಇಲ್ಲಿನ ಕಲಾಮಂದಿರದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬುಧವಾರ ಏರ್ಪಡಿಸಿದ್ದ 59ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಸಹಕಾರ ಸಂಸ್ಥೆಗಳಿಗೆ ಆದಾಯ ಮತ್ತು ನೇರ ತೆರಿಗೆ ವಿಧಿಸುವುದನ್ನು ರಾಜ್ಯ ಸರ್ಕಾರ ವಿರೋಧಿಸುತ್ತದೆ. ಇದು ಸಹಕಾರ ಕ್ಷೇತ್ರಕ್ಕೆ ಮಾರಕವಾಗಿ ಪರಿಣಮಿಸಲಿದೆ. ಈ ವಿಧೇಯಕವನ್ನು ವಿರೋಧಿಸಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.ಸಹಕಾರ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಕಡಿಮೆ ಮಾಡಲು ಹಾಗೂ ಮಹಿಳೆ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ 97ನೇ ತಿದ್ದುಪಡಿ ಮಸೂದೆಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಗುವುದು. ಅಶಕ್ತರಿಗೆ ಪ್ರಥಮ ಆದ್ಯತೆ ನೀಡುವ ನಿಟ್ಟಿನಲ್ಲಿ ಕಾಯ್ದೆ ರೂಪಿಸಲಾಗಿದೆ. ಇನ್ನೊಂದು ತಿಂಗಳ ಒಳಗೆ ಈ ಕಾಯ್ದೆ ಜಾರಿಗೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ಸಹಕಾರ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ. ಇದರಿಂದ ರಾಜಕೀಯ ಹಸ್ತಕ್ಷೇಪ ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿದೆ. ಮುಂದಿನ ಅಧಿವೇಶನದಲ್ಲಿ ಈ ಕಾಯ್ದೆ ಜಾರಿಯಾಗದೇ ಇದ್ದರೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವುದು ಸೂಕ್ತ ಎಂದು ಸಲಹೆ ನೀಡಿದರು.ಸಹಕಾರ ರತ್ನ ಪ್ರದಾನ: ಆರ್.ಪಿ.ರವಿಶಂಕರ್ (ಬೆಂಗಳೂರು), ಎಚ್.ಎನ್. ವಿಜಯದೇವ್ (ತೀರ್ಥಹಳ್ಳಿ), ಹಳಸೆ ಬಿ.ಶಿವಣ್ಣ (ಮೂಡಿಗೆರೆ), ಪ್ರಕಾಶ್ ಐ.ತಪಶೆಟ್ಟಿ (ಬಾಗಲಕೋಟೆ), ವಿಶ್ವನಾಥ್ ಹಿರೇಮಠ (ಬಳ್ಳಾರಿ), ಸಿ.ಎಸ್.ಮಹಾಲಕ್ಷಿ (ಮಹಿಳಾ ವಿಭಾಗ), ಆರ್.ಎಸ್.ಹುಚ್ಚಾಚಾರಿ (ಅಧಿಕಾರಿಗಳ ವಿಭಾಗ) ಅವರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ರೂ.50 ಸಾವಿರ ಹಾಗೂ ಪದಕವನ್ನು ಒಳಗೊಂಡಿದೆ.ಉಪಮುಖ್ಯಮಂತ್ರಿ ಆರ್.ಅಶೋಕ ಸಪ್ತಾಹಕ್ಕೆ ಚಾಲನೆ ನೀಡಿದರು. ವಸತಿ ಸಚಿವ ವಿ.ಸೋಮಣ್ಣ, ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.