ಭಾನುವಾರ, ಜೂಲೈ 12, 2020
28 °C

ಸಾಹಿತ್ಯ ಸಮ್ಮೇಳನ: ಕರೆಯೋಲೆ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಫೆಬ್ರುವರಿ 4ರಿಂದ ಆರಂಭವಾಗಲಿರುವ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಶುಕ್ರವಾರ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ನ್ಯಾಷನಲ್ ಕಾಲೇಜು ಮೈದಾನದಲ್ಲಿ 48 ಲಕ್ಷ ರೂಪಾಯಿ ವೆಚ್ಚದಲ್ಲಿ ಮಹಾವೇದಿಕೆ ನಿರ್ಮಾಣವಾಗುತ್ತಿದೆ. ಸಮ್ಮೇಳನದ ಮೂರು ದಿನಗಳ ಭೋಜನ ವ್ಯವಸ್ಥೆಗಾಗಿ ವಾಸುದೇವ್ ಅಡಿಗಾಸ್ ಹೋಟೆಲ್‌ಗೆ 84 ಲಕ್ಷ ರೂಗೆ ಟೆಂಡರ್ ನೀಡಲಾಗಿದೆ. ಸಮ್ಮೇಳನಕ್ಕೆ ಆಗಮಿಸುವ ಪದಾಧಿಕಾರಿಗಳ ವಾಸ್ತವ್ಯಕ್ಕಾಗಿ ವಸತಿ ಸಮಿತಿ ಸಭೆ ಕರೆಯಲಾಗಿದೆ’ ಎಂದರು.‘ಸರ್ಕಾರ ಈಗಾಗಲೇ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ದಾನಿಗಳಿಂದ 4 ಲಕ್ಷ ರೂಪಾಯಿ ಸಂಗ್ರಹವಾಗಿದ್ದು ಬಿಬಿಎಂಪಿ ಸದಸ್ಯರು ಒಂದು ತಿಂಗಳ ವೇತನವನ್ನು ದೇಣಿಗೆಯಾಗಿ ನೀಡಲು ನಿರ್ಧರಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರಿ ನೌಕರರು ತಮ್ಮ ಒಂದು ವೇತನವನ್ನು ಸಮ್ಮೇಳನಕ್ಕಾಗಿ ನೀಡಲಿದ್ದಾರೆ’ ಎಂದರು.‘40 ವರ್ಷಗಳ ನಂತರ ನಡೆಯುತ್ತಿರುವ ಸಮ್ಮೇಳನವನ್ನು ಎಲ್ಲಾ ನಾಗರಿಕರು ಸಂಭ್ರಮದಿಂದ ಆಚರಿಸಬೇಕಿದೆ. ಮನೆಗಳಲ್ಲಿ ನಾಡದೇವಿಯ ಭಾವಚಿತ್ರಕ್ಕೆ ಪುಷ್ಪಾಲಂಕಾರ ಮಾಡಿ ಕನ್ನಡ ಧ್ವಜ ನೆಟ್ಟು ಹಬ್ಬದ ವಾತಾವರಣ ಮೂಡಿಸಬೇಕಿದೆ. ಸಮ್ಮೇಳನಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಿದೆ’ ಎಂದರು.‘ಚಲನಚಿತ್ರಗಳ ಜಾಹೀರಾತಿನಲ್ಲಿ ಸಮ್ಮೇಳನಕ್ಕೆ ಶುಭ ಕೋರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೂಚಿಸಿದೆ. ಅಲ್ಲದೇ ಸಮ್ಮೇಳನದ ಜಾಹೀರಾತು ಹೊತ್ತಿಗೆಯಾದ ಬೆಂಗಳೂರು ಬಾಗಿನದಲ್ಲಿ ಜಾಹೀರಾತು ಪ್ರಕಟಿಸಲಿದೆ. ಐಟಿ-ಬಿಟಿ ಉದ್ಯೋಗಿಗಳನ್ನು ಸಮ್ಮೇಳನದಲ್ಲಿ ಭಾಗವಹಿಸುವಂತೆ ಮಾಡಲು ಈ ಬಾರಿ ಚಿಂತನೆ ನಡೆದಿದೆ’ ಎಂದು ತಿಳಿಸಿದರು.ಸಮ್ಮೇಳನದ ಪ್ರಧಾನ ಸಂಚಾಲಕರಾಗಿರುವ ವಿಧಾನ ಪರಿಷತ್ ಸದಸ್ಯ ಅಶ್ವತ್ಥನಾರಾಯಣ ಮಾತನಾಡಿ ‘ಸಮ್ಮೇಳನ ಸಂಘಟನೆಗಾಗಿ ನೇಮಿಸಿರುವ ಪ್ರತಿ ಸಮಿತಿಯಲ್ಲಿ ಬಿಬಿಎಂಪಿ ಸದಸ್ಯರು ಇದ್ದು ಕಾರ್ಯ ನಿರ್ವಹಿಸುತ್ತಿದ್ದಾರೆ. ಪಾರದರ್ಶಕತೆ ಕಾಯ್ದುಕೊಳ್ಳುವ ಉದ್ದೇಶದಿಂದ ಸಮ್ಮೇಳನ ಪೂರ್ವಸಿದ್ಧತೆಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ನೇಮಿಸಲಾಗಿದೆ. ಒಂದು ಲಕ್ಷಕ್ಕಿಂತಲೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ’ ಎಂದರು.ಸಮ್ಮೇಳನಾಧ್ಯಕ್ಷರ ಮೆರವಣಿಗೆ ಸಮಿತಿ ಅಧ್ಯಕ್ಷರಾಗಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಮಾತನಾಡಿ ‘ಅಧ್ಯಕ್ಷರಿಗಾಗಿ ವಿಶೇಷ ರೀತಿಯ ರಥ ತಯಾರಿಸಲಾಗಿದ್ದು ಭುವನೇಶ್ವರಿ ದೇವಿಯ ಭಾವಚಿತ್ರವನ್ನು ಹೂವಿನ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಲಾಗುವುದು. ಈ ಬಾರಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನು ಕೂಡ ಮೆರವಣಿಗೆಯಲ್ಲಿ ಕರೆದೊಯ್ಯಲಾಗುವುದು’ ಎಂದು ತಿಳಿಸಿದರು. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಕೆ.ರಾಮೇಗೌಡ, ಕಸಾಪ ಗೌರವ ಕಾರ್ಯದರ್ಶಿ ಸಂಗಮೇಶ ಬಾದವಾಡಗಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.