ಭಾನುವಾರ, ಏಪ್ರಿಲ್ 18, 2021
23 °C

ಸಿಎಂ ಪದಚ್ಯುತಿ: ವರಿಷ್ಠರಿಗೆ ಒತ್ತಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಬಣ ಸೋಮವಾರ ಸಂಜೆ ಮತ್ತೊಂದು ಸುತ್ತಿನ ಸಭೆ ನಡೆಸಿತು. ಈ ಸಭೆಯಲ್ಲಿ ಯಡಿಯೂರಪ್ಪ ಮೇಲಿನ ಭ್ರಷ್ಟಾಚಾರ ಆರೋಪಗಳ ಬಗ್ಗೆ ವರಿಷ್ಠರಿಗೆ ದೂರು ನೀಡಿ, ಅವರನ್ನು ಪದಚ್ಯುತಿಗೊಳಿಸುವಂತೆ ಒತ್ತಡ ಹೇರಲು ನಿರ್ಧರಿಸಲಾಗಿದೆ.ಭಾನುವಾರ ಶಾಸಕ ಅರವಿಂದ ಲಿಂಬಾವಳಿ ಅವರ ಮನೆಯಲ್ಲಿ ಸಭೆ ನಡೆಸಿದ್ದ ಮುಖಂಡರು ಸೋಮವಾರ ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ್ ಅವರ ಅಧಿಕೃತ ನಿವಾಸದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.ಈ ಸಭೆಯಲ್ಲಿ ಈಶ್ವರಪ್ಪ, ಶೆಟ್ಟರ್ ಅವರಲ್ಲದೆ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್, ಅರವಿಂದ ಲಿಂಬಾವಳಿ ಮೊದಲಾದವರು ಪಾಲ್ಗೊಂಡಿದ್ದರು. ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸುವುದನ್ನೇ ಪ್ರಮುಖ ಗುರಿಯಾಗಿ ಇಟ್ಟುಕೊಂಡು ಈ ಸಭೆ ಮಾಡಿದ್ದು, ಇದರಲ್ಲಿ ವಿವಿಧ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗಿದೆ.ಯಡಿಯೂರಪ್ಪ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿದ್ದು, ಆ ಬಗ್ಗೆ ಪಕ್ಷದ ಹೈಕಮಾಂಡ್ ಜತೆ ಚರ್ಚಿಸಲು ನಿರ್ಧರಿಸಲಾಗಿದೆ. ಶೆಟ್ಟರ್ ಸೇರಿದಂತೆ ಭಿನ್ನಬಣದ ಇತರ ಮುಖಂಡರು ಮಂಗಳವಾರ ರಾತ್ರಿ ದೆಹಲಿಗೆ ತೆರಳಿ ಪಕ್ಷದ ವರಿಷ್ಠರಿಗೆ ಈ ಕುರಿತು ಮಾಹಿತಿ ನೀಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.ಈ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಕ್ಕೆ ಬಳ್ಳಾರಿಯ ‘ಗಣಿಧಣಿ’ ಸಚಿವರು ಬೆಂಬಲ ಸೂಚಿಸಿದ್ದು, ದೆಹಲಿಗೆ ತೆರಳುವಾಗ ನಿಯೋಗದಲ್ಲಿ ಭಾಗವಹಿಸುವುದಾಗಿಯೂ ತಿಳಿಸಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಅವರ ಅಕ್ರಮಗಳ ಕುರಿತು ಎಚ್.ಡಿ. ಕುಮಾರಸ್ವಾಮಿ ಬಿಡುಗಡೆ ಮಾಡಿರುವ ದಾಖಲೆಗಳಲ್ಲದೆ, ಇತರ ಹೊಸ ಹಗರಣಗಳ ದಾಖಲೆಗಳನ್ನು ಪಕ್ಷದ ವರಿಷ್ಠರಿಗೆ ನೀಡಿ, ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಕಾರ್ಯತಂತ್ರದ ಬಗ್ಗೆಯೂ ಸಮಾಲೋಚನೆ ನಡೆಸಿದರು ಎಂದು ಗೊತ್ತಾಗಿದೆ. ಯಡಿಯೂರಪ್ಪ ಅವರು ಶನಿವಾರ ತಮ್ಮ ಮನೆಯಲ್ಲಿ ಶಾಸಕರ ಸಭೆ ಕರೆದು ಎಡವಟ್ಟು ಮಾಡಿಕೊಂಡಿದ್ದಾರೆ. ಅವರಿಗೆ ಎಲ್ಲ ಶಾಸಕರ ಬೆಂಬಲ ಇಲ್ಲ ಎನ್ನುವುದನ್ನು ಬಹಿರಂಗವಾಗಿ ಒಪ್ಪಿಕೊಂಡಂತೆ ಆಗಿದ್ದು, ಈ ಸಂದರ್ಭವನ್ನು ಬಳಸಿಕೊಂಡು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಸಬೇಕು ಎನ್ನುವುದರ ಬಗ್ಗೆಯೂ ಚರ್ಚಿಸಲಾಗಿದೆ.ಈ ಸಭೆ ನಂತರ ಪಕ್ಷದ ಕಚೇರಿಗೆ ತೆರಳಿದ ಈಶ್ವರಪ್ಪ ಅವರು ವಿಭಾಗವಾರು ಮುಖಂಡರ ಸಭೆಯಲ್ಲಿ ಭಾಗವಹಿಸಿ, ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು. ಅನಂತಕುಮಾರ್ ಅವರು ರಾತ್ರಿಯೇ ದೆಹಲಿಗೆ ತೆರಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.