ಮಂಗಳವಾರ, ನವೆಂಬರ್ 12, 2019
19 °C

`ಸಿಎಂ ಹುದ್ದೆ ಬೇಕಿಲ್ಲ'

Published:
Updated:

ಬೆಂಗಳೂರು: `ನಾನು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಅಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಕ್ಕಾಗಿ ದುಡಿಯುವುದೇ ನನ್ನ ಗುರಿ' ಎಂದು ಸಚಿವ ಎಂ. ವೀರಪ್ಪ ಮೊಯಿಲಿ ಹೇಳಿದರು.ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. `ರಾಜ್ಯ ರಾಜಕಾರಣಕ್ಕೆ ಮರಳಲು ಸಿದ್ಧತೆ ನಡೆಸಿದ್ದೀರಾ' ಎಂಬ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು.ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೇ ಚುನಾವಣೆ ಎದುರಿಸುತ್ತಿರುವ ಕುರಿತು ಪ್ರಶ್ನಿಸಿದಾಗ, `ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪ್ರಕಟಿಸುವ ಸಂಪ್ರದಾಯ ನಮ್ಮ ಪಕ್ಷದಲ್ಲಿಲ್ಲ. ಪಂಜಾಬ್‌ನಲ್ಲಿ ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪಕ್ಷ ಬಿಂಬಿಸಿತ್ತು. ಆದರೆ, ಅಲ್ಲಿ ಪಕ್ಷವು ಬಹುಮತ ಪಡೆಯಲು ಸಾಧ್ಯವಾಗಲಿಲ್ಲ. ಅಂತಹ ಪ್ರಯೋಗಗಳನ್ನು ಕಾಂಗ್ರೆಸ್ ಮತ್ತೆ ಮಾಡುವುದಿಲ್ಲ' ಎಂದು ಉತ್ತರಿಸಿದರು.ಸಾಮಾನ್ಯವಾಗಿ ಪಕ್ಷ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಚುನಾವಣೆ ನಡೆದಾಗ ಹಾಲಿ ಮುಖ್ಯಮಂತ್ರಿಯನ್ನೇ ನಾಯಕ ಎಂದು ಬಿಂಬಿಸಲಾಗುತ್ತದೆ. ಆದರೆ, ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ ಒಬ್ಬರನ್ನು ಬಿಂಬಿಸುವುದು ಕಷ್ಟವಾಗುತ್ತದೆ. ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಚುನಾವಣೆಯನ್ನು ಎದುರಿಸುತ್ತದೆ. ನಂತರದ ದಿನಗಳಲ್ಲಿ ಸಿ.ಎಂ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.ಪೈಪೋಟಿಯೇ ಪ್ರತಿಭಟನೆಗೆ ಕಾರಣ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಈ ಕಾರಣಕ್ಕಾಗಿಯೇ ಟಿಕೆಟ್ ವಂಚಿತರು ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿಲ್ಲ. ಟಿಕೆಟ್ ಸಿಗದೇ ಬೇಸರಗೊಂಡವರನ್ನು ಸಮಾಧಾನಪಡಿಸುವ ಪ್ರಯತ್ನ ನಡೆದಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರತಿಕ್ರಿಯಿಸಿ (+)