ಭಾನುವಾರ, ಮೇ 22, 2022
22 °C

ಸೇವಾ ಭದ್ರತೆಗೆ ಅಂಗವಿಕಲರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ:  ಗ್ರಾಮೀಣ ಪುನರ್ವಸತಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮ ಪುನರ್ವಸತಿ ಕಾರ್ಯಕರ್ತರಿಗೆ ಸೇವಾ ಭದ್ರತೆ ಒದಗಿಸಲು ಆಗ್ರಹಿಸಿ ಶುಕ್ರವಾರ ನಗರದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿನ ಕಾವೇರಿವನದಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಧರಣಿ ಆರಂಭಿಸಿದ ಅಂಗವಿಕಲರು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್‌ಡಬ್ಲ್ಯೂ) ಮತ್ತು ಗ್ರಾಮ ಪುನರ್ವಸತಿ ಕಾರ್ಯಕರ್ತರು (ವಿಆರ್‌ಡಬ್ಲ್ಯೂ) ಅವರಿಗೆ ಕನಿಷ್ಠ ವೇತನ, ಆರೋಗ್ಯ ವಿಮೆ ಸೌಲಭ್ಯವನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ಸಂಘದ ಮುಖಂಡರಾದ ಆರ್.ಎಸ್.ಮಹಾದೇವಪ್ಪ, ಜೆ.ದೇವ ರಾಜು, ಎಂ.ಎಚ್.ಗಿರೀಗೌಡ, ಎಚ್.ಎಸ್.ಮಲ್ಲೇಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಸಮಸ್ಯೆ ಪರಿಹರಿಸುವಂತೆ ಜಿಲ್ಲಾಡಳಿತಕ್ಕೂ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಬೇಡಿಕೆಯನ್ನು ನಿರ್ಲಕ್ಷಿಸಿದ್ದಾರೆ. ಅಂಗವಿಕಲರ ಹಕ್ಕು ರಕ್ಷಣೆಗಾಗಿಯೇ ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಇದ್ದರೂ ಅಗತ್ಯ ರಕ್ಷಣೆ ದೊರೆಯುತ್ತಿಲ್ಲ ಎಂದು ಪ್ರತಿಪಾದಿಸಿದರು.ಗ್ರಾಮೀಣ ಅಂಗವಿಕಲರ ಪುನರ್ವಸತಿ ಯೋಜನೆಯನ್ನು ನಗರ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಗೂ ವಿಸ್ತರಿಸಬೇಕು. ಸಮಗ್ರ ಅಂಗವಿಕಲರ ಪುನರ್ವಸತಿ ಯೋಜನೇತರ ಕಾರ್ಯಕ್ರಮ ರೂಪಿಸಬೇಕು. ಅಂಗವಿಕಲರ ಅಭಿವೃದ್ಧಿಗಾಗಿಯೇ ಪ್ರತ್ಯೇಕ ಸಚಿವಾಲಯ ರಚಿಸಬೇಕು, ಸೇವೆಯಲ್ಲಿದ್ದಾಗ ಮೃತಪಟ್ಟರೆ ಕುಟುಂಬ ಸದಸ್ಯರಿಗೆ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.