ಶುಕ್ರವಾರ, ಮೇ 7, 2021
20 °C

ಸೇವೆ ಕಾಯಂಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ವಿದ್ಯಾರ್ಥಿ ನಿಲಯಗಳು ಮತ್ತು ವಸತಿ ಶಾಲೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರ ಸೇವೆಯನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ `ರಾಜ್ಯ ಸರ್ಕಾರಿ ವಿದ್ಯಾರ್ಥಿ ವಸತಿ ನಿಲಯಗಳ ದಿನಗೂಲಿ ನೌಕರರ ಸಂಘ' ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು.ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ರ‍್ಯಾಲಿ ನಡೆಸಿದ ಪ್ರತಿಭಟನಾಕಾರರು, `ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ಹಿಂದಿನ ಸರ್ಕಾರಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಇದರಿಂದ ಸೇವಾ ಭದ್ರತೆ ಇಲ್ಲವಾಗಿದೆ' ಎಂದು ದೂರಿದರು.`ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಸುಮಾರು 4,460 ವಿದ್ಯಾರ್ಥಿ ನಿಲಯಗಳಿವೆ. ಆ ವಿದ್ಯಾರ್ಥಿ ನಿಲಯಗಳಲ್ಲಿ 50 ಸಾವಿರ ನೌಕರರು ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸ್ವಯಂ ಸೇವಾ ಸಂಸ್ಥೆಗಳ (ಎನ್‌ಜಿಒ) ಮೂಲಕ ನೇಮಕಗೊಂಡಿರುವ ಆ ನೌಕರರು ವಿದ್ಯಾರ್ಥಿ ನಿಲಯಗಳಲ್ಲಿ ಅಡುಗೆ, ಸ್ವಚ್ಛತೆ ಹಾಗೂ ಕಾವಲು ಕಾಯುವ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಅವರ ಸೇವೆ ಕಾಯಂಗೊಳಿಸಲು ಹಿಂದಿನ ಯಾವುದೇ ಸರ್ಕಾರ ಕ್ರಮ ಕೈಗೊಂಡಿಲ್ಲ' ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ನಿತ್ಯಾನಂದ ಸ್ವಾಮಿ ಹೇಳಿದರು.ಕಾರ್ಮಿಕ ಇಲಾಖೆಯು ವಿದ್ಯಾರ್ಥಿನಿಲಯದ ಪ್ರತಿ ನೌಕರನಿಗೆ ಮಾಸಿಕ ರೂ. 4,059 ವೇತನ ನಿಗದಿಪಡಿಸಿದೆ. ಆದರೆ, ಎನ್‌ಜಿಒಗಳು ರೂ. 2,000 ಮಾತ್ರ ನೀಡುತ್ತಿವೆ. ಕಾರ್ಮಿಕ ಇಲಾಖೆ ನಿಗದಿಪಡಿಸಿದ ಪ್ರಮಾಣದಲ್ಲೇ ಸರ್ಕಾರ ವೇತನದ ಹಣ ಬಿಡುಗಡೆ ಮಾಡುತ್ತಿದ್ದರೂ ಎನ್‌ಜಿಒಗಳು ನೌಕರರನ್ನು ವಂಚಿಸುತ್ತಿವೆ. ಈ ಅಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಹ ಶಾಮೀಲಾಗಿದ್ದಾರೆ ಎಂದು ಅವರು ಆರೋಪಿಸಿದರು.ವಿದ್ಯಾರ್ಥಿ ನಿಲಯಗಳ ಪ್ರತಿ ನೌಕರನಿಗೆ ಮಾಸಿಕ ರೂ. 10 ಸಾವಿರ ವೇತನ ನೀಡಬೇಕು. ಸರ್ಕಾರಿ ವಿದ್ಯಾರ್ಥಿನಿಲಯಗಳಿಗೆ ಎನ್‌ಜಿಒಗಳ ಮೂಲಕ ನೌಕರರನ್ನು ನೇಮಿಸಿಕೊಳ್ಳುವ ವ್ಯವಸ್ಥೆಯನ್ನು ನಿಲ್ಲಿಸಬೇಕು. ಆರೋಗ್ಯ ವಿಮೆ ಮತ್ತು ಭವಿಷ್ಯ ನಿಧಿ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.ಪ್ರತಿಭಟನಾಕಾರರಿಂದ ಮನವಿಪತ್ರ ಸ್ವೀಕರಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ನವೀನ್‌ರಾಜ್ ಸಿಂಗ್, `ನೌಕರರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುತ್ತೇನೆ. ಆ ಬೇಡಿಕೆಗಳ ಬಗ್ಗೆ ಚರ್ಚಿಸಲು ಜೂ.12ರಂದು ನೌಕರರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸುತ್ತೇನೆ' ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.